ಬೆಂಗಳೂರು:ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) 2025ರ ಎನ್‌ಇಇಟಿ (ನೀಟ್) ಪರೀಕ್ಷೆ ಮೇ 4 ರಂದು ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ ಕರ್ನಾಟಕದ ಒಟ್ಟು 381 ಕೇಂದ್ರಗಳಲ್ಲಿ ನಡೆಯಲಿದೆ.
ಒಟ್ಟು 1,49,000 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಾತಿ ಪತ್ರದೊಂದಿಗೆ ಕಾಲೇಜಿನಿಂದ ನೀಡಲ್ಪಟ್ಟ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್, ಪಾನ್ ಕಾರ್ಡ್, ವಾಹನ ಚಾಲನಾ ಪರವಾನಗಿ ಅಥವಾ ಮತದಾರರ ಗುರುತಿನ ಚೀಟಿ ಅಥವಾ ಇತರೆ ಯಾವುದೇ ಅಂಗೀಕೃತ ಗುರುತಿನ ಚೀಟಿಯೊಂದಿಗೆ ಒಂದು ಪೋಸ್ಟ್ ಕಾರ್ಡ್ ಮತ್ತು ಎರಡು ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಕಡ್ಡಾಯವಾಗಿ ತರಬೇಕು.
ಬೆಳಗ್ಗೆ 11 ರಿಂದ ನೋಂದಣಿ
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನೇಮಿಸಿರುವ ಏಜೆನ್ಸಿಗಳಿಂದ ಬೆಳಗ್ಗೆ 11 ರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭಿವಾಗಲಿದೆ ಹಾಗೂ ನಿಯೋಜಿತ ಪೊಲೀಸ್ ಸಿಬ್ಬಂದಿ ವಿದ್ಯಾರ್ಥಿಗಳ ಸುರಕ್ಷತಾ ತಪಾಸಣೆ ನಡೆಸಲಿದೆ.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿದ್ದು, ಪ್ರವೇಶಾತಿ ಪತ್ರದಲ್ಲಿ ನೀಡಲಾಗಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪೂರ್ಣ ತೋಳಿನ ಮೇಲಂಗಿ, ದೊಡ್ಡ ಬಟನ್ ಇರುವ ಶರ್ಟ್, ಪ್ಯಾಂಟ್, ಶೂ, ಸಾಕ್ಸ್, ಎತ್ತರದ ಚಪ್ಪಲಿಗಳು, ಕಿವಿಯೋಲೆ, ಬಳೆ, ಸರ, ಕಾಲ್ಗೆಜ್ಜೆ, ಮೂಗುತಿ, ಜಡೆ ಕ್ಲಿಪ್ ಸೇರಿದಂತೆ ಇತರೆ ಯಾವುದೇ ಮೆಟಲ್ ಉಪಕರಣಗಳನ್ನು ಧರಿಸುವಂತಿಲ್ಲ ಹಾಗೂ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವಂತಿಲ್ಲ ಮತ್ತು ಧರಿಸುವಂತಿಲ್ಲ.
ನೇರ ಪರೀಕ್ಷಾ ಕೊಠಡಿಗೆ
ಪ್ರವೇಶಾತಿ ರಿಜಿಸ್ಟ್ರೇಷನ್ ಪ್ರಕ್ರಿಯೆ ಪೂರ್ಣಗೊಳಿಸಿಕೊಂಡ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಇರುವ ಪರೀಕ್ಷಾ ಕೊಠಡಿಗೆ ನೇರವಾಗಿ ತೆರಳತಕ್ಕದ್ದು.
ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಅವಧಿಯಲ್ಲಿ ಪ್ರತಿ ಗಂಟೆಗೊಂದು ಬಾರಿ ಬೆಲ್ ಮೂಲಕ ಸೂಚನೆ ನೀಡಲಾಗುವುದು.
ಪರೀಕ್ಷಾ ಕೇಂದ್ರಗಳಿಗೆ ನಿರಂತರ ವಿದ್ಯುತ್ ವ್ಯವಸ್ಥೆ, ಆರೋಗ್ಯ ಸಿಬ್ಬಂದಿ ಹಾಗೂ ತುರ್ತು ಸೇವೆಗಳ ನಿಯೋಜನೆ, ಪರೀಕ್ಷಾ ಕೇಂದ್ರಗಳ ಸ್ವಚ್ಛತೆ ಮತ್ತು ಪರೀಕ್ಷೆಗೆ ಹಾಜರಾಗುವ ದಿವ್ಯಾಂಗ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ವ್ಹೀಲ್ ಚೇರ್ ವ್ಯವಸ್ಥೆ ಹಾಗೂ ತುರ್ತು ಆಗ್ನಿ ಶಾಮಕ ವ್ಯವಸ್ಥೆಯನ್ನು ಜಿಲ್ಲಾಡಳಿತದಿಂದ ಮಾಡಲಾಗುತ್ತದೆ.
ಮೊಬೈಲ್ ಜ್ಯಾಮರ್ ಅಳವಡಿಕೆ
ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ಜ್ಯಾಮರ್ ಅಳವಡಿಕೆ ಮತ್ತು ಫ್ರಿಸ್ಕಿಂಗ್ ಮಾಡುವ ಬಗ್ಗೆ ಪರೀಕ್ಷಾ ಕೇಂದ್ರದ ಮುಖ್ಯಸ್ವರು ಖಚಿತಪಡಿಸಿಕೊಳ್ಳಲಿದ್ದಾರೆ.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಯಲ್ಲಿರುವುದಲ್ಲದೆ, ಪರೀಕ್ಷಾ ಕೇಂದ್ರಗಳಿಗೆ ನಿಯೋಜಿತ ಅಧಿಕಾರಿ ಅಥವಾ ಸಿಬ್ಬಂದಿ ಹೊರತುಪಡಿಸಿ, ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.
