ಬೆಂಗಳೂರು:ಮಲೆಮಹದೇಶ್ವರ ಬೆಟ್ಟ ಅರಣ್ಯ ಪ್ರದೇಶದಲ್ಲಿ 5 ಹುಲಿಗಳ ಅಸಹಜ ಸಾವು ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಡಿಸಿಎಫ್ ಚಕ್ರಪಾಣಿ ಮತ್ತು ಮೂವರು ಅಧಿಕಾರಿಗಳ ಅಮಾನತಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಶಿಫಾರಸು ಮಾಡಿದ್ದಾರೆ.
ಘಟನೆ ಸಂಬಂಧ ಉನ್ನತಮಟ್ಟದ ವಿಚಾರಣಾ ಸಮಿತಿಯ ಪ್ರಾಥಮಿಕ ವರದಿ ಪರಾಮರ್ಶೆ ನಂತರ ಸಚಿವರು, ಹುಲಿಗಳ ಅಸಹಜ ಸಾವು ಪ್ರಕರಣದಲ್ಲಿ ಮೇಲ್ನೋಟಕ್ಕೆ ನಿರ್ಲಕ್ಷ್ಯ ಮತ್ತು ಕರ್ತವ್ಯಲೋಪ ಕಂಡುಬಂದ ಹಿನ್ನೆಲೆಯಲ್ಲಿ ತಪ್ಪಿತಸ್ತ ಅಧಿಕಾರಿಗಳ ಅಮಾನತಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಶಿಫಾರಸು ಮಾಡಿದರು.
ಕರ್ತವ್ಯ ಲೋಪ
ಹೊರಗುತ್ತಿಗೆ ಸಿಬ್ಬಂದಿ ವೇತನಕ್ಕೆ ಏಪ್ರಿಲ್ ತಿಂಗಳಾಂತ್ಯಕ್ಕೇ ಹಣ ಬಿಡುಗಡೆಯಾಗಿದ್ದರೂ, ಜೂನ್ವರೆಗೆ ಪಾವತಿಸದೆ ಡಿಸಿಎಫ್ ಚಕ್ರಪಾಣಿ ಮೂಲಭೂತ ಕರ್ತವ್ಯ ಲೋಪ ಎಸಗಿದ್ದು, ಗಸ್ತು ಕಾರ್ಯಕ್ಕೆ ಹಿನ್ನಡೆ ಉಂಟಾಯಿತು, ಈ ಸಂಬಂಧ ಅಧಿಕಾರಿಯನ್ನು ಅಮಾನತು ಮಾಡಿ, ಇಲಾಖಾ ವಿಚಾರಣೆ ನಡೆಸುವಂತೆ ಶಿಫಾರಸು ಮಾಡಿದರು.
ಮಾರ್ಚ್ನಿಂದ 3 ತಿಂಗಳ ವೇತನ ಪಾವತಿಯಾಗಿಲ್ಲ ಎಂದು ಹೊರಗುತ್ತಿಗೆ ಸಿಬ್ಬಂದಿ ಜೂನ್ 23ರಂದು ಪ್ರತಿಭಟನೆ ನಡೆಸಿದ್ದರು, ಸಕಾಲದಲ್ಲಿ ವೇತನ ಸಿಗದೆ ಮುಂಚೂಣಿ ಸಿಬ್ಬಂದಿ ಕರ್ತವ್ಯ ವಿಮುಖರಾಗಲು ಕಾರಣವಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ.
ಸುಮಾರು 11 ವರ್ಷದ ತಾಯಿ ಹುಲಿ ಮತ್ತು ಅದರ 10 ರಿಂದ 11 ತಿಂಗಳ 4 ಮರಿ ಹುಲಿಗಳ ಸಾವಿಗೆ, ಹುಲಿ ಕೊಂದ ಹಸುವಿನ ಮೃತದೇಹದೊಳಗೆ ಸಿಂಪಡಿಸಲಾದ ರಾಸಾಯನಿಕ ಸಂಯುಕ್ತವೇ ಕಾರಣ ಎಂಬುದು ಪ್ರಾಥಮಿಕ ತನಿಖಾ ವರದಿಯಿಂದ ತಿಳಿದುಬಂದಿದೆ.
ಹಸು ಸಾವಿಗೆ ಸೇಡು
ಹುಲಿಯಿಂದ ಹಸು ಸಾವಿಗೆ ಸೇಡು ತೀರಿಸಿಕೊಳ್ಳಲು ಈ ಕೃತ್ಯ ಎಸಗಲಾಗಿದೆ ಎಂಬುದಾಗಿ ಪ್ರಾಥಮಿಕ ವರದಿಯಲ್ಲಿ ತಿಳಿಸಲಾಗಿದೆ.
ಗಸ್ತು ಸಿಬ್ಬಂದಿ ಕಾರ್ಯಕ್ಷಮತೆ ಮೇಲೆ ಸಂಬಂಧಿತ ವಲಯದ ಎ.ಸಿ.ಎಫ್, ಆರ್.ಎಫ್.ಓ. ಮತ್ತು ಡಿ.ಆರ್.ಎಫ್.ಓ. ನಿಗಾ ಇಡುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಅರಣ್ಯ ರಕ್ಷಣೆಯ ಮೂಲಭೂತ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿರುತ್ತಾರೆ ಎಂದಿರುವ ಈಶ್ವರ ಖಂಡ್ರೆ, ಮೂವರು ಸಿಬ್ಬಂದಿಯನ್ನು ಅಮಾನತು ಮಾಡಿ, ಇಲಾಖಾ ವಿಚಾರಣೆ ನಡೆಸಲು ಸೂಚಿಸಿದರು.
10ರೊಳಗೆ ಅಂತಿಮ ವರದಿ
ಅಲ್ಲದೆ, ಈ ತಿಂಗಳ 10ರೊಳಗೆ ಅಂತಿಮ ವರದಿ ಸಲ್ಲಿಸುವಂತೆಯೂ ಸಮಿತಿಗೆ ಅರಣ್ಯ ಸಚಿವರು ಸೂಚಿಸಿದ್ದಾರೆ.
ಪ್ರಾಥಮಿಕ ತನಿಖಾ ವರದಿ ಸಲ್ಲಿಸಿರುವ ಅಪರ ಮುಖ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಕುಮಾರ್ ಪುಶ್ಕರ್ ನೇತೃತ್ವದ ಉನ್ನತಮಟ್ಟದ ಸಮಿತಿಯಲ್ಲಿ ವನ್ಯಜೀವಿ ವಿಭಾಗದ ಎಪಿಸಿಸಿಎಫ್ ಶ್ರೀನಿವಾಸುಲು, ಚಾಮರಾಜನಗರ ಸಿಸಿಎಫ್ ಹೀರಾಲಾಲ್, ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಎ.ಐ.ಜಿ ಹರಿಣಿ ವೇಣುಗೋಪಾಲ್, ವನ್ಯಜೀವಿ ತಜ್ಞ ಡಾ.ಸಂಜಯ್ ಗುಬ್ಬಿ ಮತ್ತು ಮೈಸೂರು ಮೃಗಾಲಯದ ಸಹಾಯಕ ನಿರ್ದೇಶಕ ಡಾ.ಶಶಿಧರ್ ಸದಸ್ಯರಾಗಿದ್ದಾರೆ.


