ಬೆಂಗಳೂರು:ರಾಜ್ಯದಲ್ಲಿರುವುದು ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರವಾಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಪ್ರಸ್ತುತ ಎಐಸಿಸಿ ಅಧ್ಯಕ್ಷರಾಗಿರುವ ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಈ ಹಿಂದೆ ರಾಜ್ಯದಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ 5 ವರ್ಷ ಸೇವೆ ಸಲ್ಲಿಸಿದರೂ ಅವರನ್ನು ಮುಖ್ಯಮಂತ್ರಿ ಮಾಡಲಿಲ್ಲ.
ಮುಖ್ಯಮಂತ್ರಿ ಮಾಡಲಿಲ್ಲ
ಸತತ 8 ವರ್ಷ ಕೆಪಿಸಿಸಿ ಅಧ್ಯಕ್ಷರಾಗಿದ್ದ ಇನ್ನೊಬ್ಬ ದಲಿತ ನಾಯಕ ಡಾ.ಜಿ.ಪರಮೇಶ್ವರ್ ಅವರನ್ನೂ ಮುಖ್ಯಮಂತ್ರಿ ಮಾಡಲಿಲ್ಲ.
ಸತತವಾಗಿ 7 ಬಾರಿ ಲೋಕಸಭೆಯಲ್ಲಿ ಕರ್ನಾಟಕದಿಂದ ಕಾಂಗ್ರೆಸ್ ಪಕ್ಷ ಪ್ರತಿನಿಧಿಸಿದ ದಲಿತ ನಾಯಕ ಕೆ.ಎಚ್.ಮುನಿಯಪ್ಪ ಅವರನ್ನು ಕೇಂದ್ರದಲ್ಲಿ ಕ್ಯಾಬಿನೆಟ್ ದರ್ಜೆ ಮಂತ್ರಿಯನ್ನೂ ಮಾಡಲಿಲ್ಲ.
ಅಂತೂ ಇಂತೂ ದಲಿತ ವಿರೋಧಿ ಕರ್ನಾಟಕ ಕಾಂಗ್ರೆಸ್‌ನಲ್ಲಿ ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ಎಂದು ಕಟುವಾಗಿ ಟೀಕಿಸಿದ್ದಾರೆ.
ದಲಿತ ವಿರೋಧಿ ನೀತಿ
ದಲಿತರ ಉದ್ಧಾರದ ಮಾತನಾಡುವ ಸಿದ್ದರಾಮಯ್ಯ, ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಅಡಿ ಪರಿಶಿಷ್ಠ ಸಮುದಾಯಗಳಿಗೆ ಮೀಸಲಿಟ್ಟ 42,017,51 ಕೋಟಿ ರೂ. ಅನುದಾನದಲ್ಲಿ 11,896,84 ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲು ಮುಂದಾಗಿರುವುದು ದಲಿತ ವಿರೋಧಿ ನೀತಿಯನ್ನು ತೋರಿಸುತ್ತದೆ.
ಅನುದಾನ ಹಂಚಿಕೆಗೆ ಹಣವಿಲ್ಲ ಎಂದಾದರೆ, ಬಜೆಟ್‌ನಲ್ಲಿ ಕಾಟಾಚಾರದ, ಅವಾಸ್ತವಿಕ ಘೋಷಣೆಗಳನ್ನು ಮಾಡಿ ಪರಿಶಿಷ್ಟರ ಮೂಗಿಗೆ ತುಪ್ಪ ಸವರಿ, ಬಿಟ್ಟಿ ಪ್ರಚಾರ ಪಡೆದುಕೊಂಡರೆ ಪರಿಶಿಷ್ಟ ಸಮುದಾಯಗಳ ಕಲ್ಯಾಣ ಆಗುತ್ತದೆಯೇ, ಇದೇನಾ ಪರಿಶಿಷ್ಟ ಸಮುದಾಯಗಳ ಬಗ್ಗೆ ತಮಗಿರುವ ಬದ್ಧತೆ, ಇದೇನಾ ತಾವು ಭಾಷಣ ಬಿಗಿಯುವ ಸಾಮಾಜಿಕ ನ್ಯಾಯ ಎಂದು ಪ್ರಶ್ನಿಸಿದ್ದಾರೆ.

ಭ್ರಷ್ಟಾಚಾರದಲ್ಲಿ ತೊಡಗಿದೆ
ಒಂದೆಡೆ ಬಿಡುಗಡೆ ಮಾಡಿದ ಅಲ್ಪಸ್ವಲ್ಪ ಅನುದಾನದಲ್ಲೂ ಲೂಟಿ ಹೊಡೆಯುವ ಮೂಲಕ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ.
ಮತ್ತೊಂದೆಡೆ ಘೋಷಣೆ ಮಾಡಿದ ಅನುದಾನ ಹಂಚಿಕೆ ಮಾಡದೆ ಬಾಕಿ ಉಳಿಸಿಕೊಳ್ಳುತ್ತಿದ್ದು, ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಯಾಗಬೇಕು, ಕಿಂಚಿತ್ತಾದರೂ ಆತ್ಮಸಾಕ್ಷಿ ಇದ್ದರೆ ಸಿದ್ದರಾಮಯ್ಯ ಅಹಿಂದ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ಬಿಡಬೇಕು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ದಲಿತ ವಿರೋಧಿ ರಾಜ್ಯ ಕಾಂಗ್ರೆಸ್ ಸರ್ಕಾರ ವಾಗ್ದಾನದಂತೆ ಬಡ ಕುಟುಂಬಗಳಿಗೆ 10 ಕೆ.ಜಿ. ಉಚಿತ ಅಕ್ಕಿ ನೀಡಲಾಗದೆ ದಿವಾಳಿಯಾಗಿದೆ.
ಸುಳ್ಳು ಹೇಳಿದ್ದೇ ಸಾಧನೆ
ಕಳೆದ ಎರಡು ವರ್ಷಗಳಲ್ಲಿ ಕಾಂಗ್ರೆಸ್ ಸರ್ಕಾರ ಜನತೆಗೆ ಕೊಟ್ಟಿದ್ದು ಏನೂ ಇಲ್ಲ, ಬರೀ ಸುಳ್ಳು ಹೇಳಿದ್ದೇ ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಸಾಧನೆಯಾಗಿದೆ.
ಬಡ ಕುಟುಂಬಗಳಿಗೆ ಪ್ರತಿ ತಿಂಗಳು 10 ಕೆ.ಜಿ. ಉಚಿತ ಅಕ್ಕಿ ಕೊಡುವುದಾಗಿ ವಾಗ್ದಾನ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್, ಅಕ್ಕಿಯನ್ನೂ ಕೊಡದೆ, ಹಣವೂ ನೀಡದೆ ವಂಚಿಸುತ್ತಿದೆ.
ಬಡವರ ಉಚಿತ ಅಕ್ಕಿ ಸಾಗಿಸುವ ಲಾರಿ ಮಾಲೀಕರಿಗೆ ಸಾಗಣೆ ವೆಚ್ಚದ ಬಿಲ್ ಪಾವತಿಗೂ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಬಳಿ ಹಣವಿಲ್ಲ.

ಅಕ್ಕಿ ಖರೀದಿಗೆ ಹಣ ಇಲ್ಲ
ಭಾರತೀಯ ಆಹಾರ ನಿಗಮದಿಂದ ಅಕ್ಕಿ ಖರೀದಿಸಲು ಸಮಯಕ್ಕೆ ಸರಿಯಾಗಿ ಹಣ ಪಾವತಿ ಮಾಡಲೂ ಈ ಸರ್ಕಾರದಿಂದ ಸಾಧ್ಯವಾಗುತ್ತಿಲ್ಲ, ಅಲ್ಲದೆ, ನ್ಯಾಯಬೆಲೆ ಅಂಗಡಿಗಳ ಮಾಲೀಕರಿಗೆ ಕಮಿಷನ್ ಕೊಡಲೂ ದುಡ್ಡಿಲ್ಲದಂತಾಗಿದೆ.
ಆರ್ಥಿಕವಾಗಿ ಸಂಪೂರ್ಣ ದಿವಾಳಿಯಾಗಿರುವ ರಾಜ್ಯ ಸರ್ಕಾರದಿಂದ ಯಾವುದೇ ಅಭಿವೃದ್ಧಿ ಕಾರ್ಯಗಳೂ ಆಗುತ್ತಿಲ್ಲ ಎಂದಿದ್ದಾರೆ.

