ಕಲಬುರಗಿ:ಅತಿವೃಷ್ಟಿಯಿಂದ ಬೆಳೆ ನಷ್ಟಕ್ಕೆ ಒಳಗಾದ ರೈತರಿಗೆ ಒಂದು ಎಕರೆಗೆ 25,000 ರೂ. ಪರಿಹಾರ ಘೋಷಿಸಬೇಕು ಎಂದು ಜಾತ್ಯತೀತ ಜನತಾದಳ ಯುವಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಇಡೀ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಿಂದ ಬೆಳೆ ಹಾಗೂ ಆಸ್ತಿಪಾಸ್ತಿಗೆ ನಷ್ಟವಾಗಿದೆ, ಜನ ಜಾನುವಾರುಗಳ ಮೇಲೆ ತೀವ್ರ ಪರಿಣಾಮ ಬೀರಿದೆ, ರಸ್ತೆ ಗುಂಡಿಗಳನ್ನೇ ಮುಚ್ಚಲು ಸರ್ಕಾರದಿಂದ ಸಾಧ್ಯವಾಗುತ್ತಿಲ್ಲ.
ಆಗಸ್ಟ್‌ನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಒಂದು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೊಗರಿ, ಉದ್ದು, ಹೆಸರು, ಮತ್ತಿತರ ಬೆಳೆಗಳಿಗೆ ಹಾನಿಯಾಗಿದೆ.
ಜೆಡಿಎಸ್ ವರದಿ
ಬೆಳೆ ಹಾನಿ ಪ್ರದೇಶಗಳ ಸಂತ್ರಸ್ತರ ಭೇಟಿ ನಂತರ ಜೆಡಿಎಸ್‌ನಿಂದ ವರದಿ ಸಿದ್ಧಪಡಿಸಿ ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಬರೀ ಘೋಷಣೆಗೆ ಮಾತ್ರ ಸೀಮಿತವಾಗಿದೆ, ಅಭಿವೃದ್ಧಿ ಕಾರ್ಯದಲ್ಲಿ ವಿಫಲವಾಗಿದೆ, ಘೋಷಿಸಿದ ಯೋಜನೆಗಳ ಅನುಷ್ಠಾನಕ್ಕೆ ಖಜಾನೆಯಲ್ಲಿ ಹಣ ಇಲ್ಲ ಎಂದರು.
ಬೆಳೆಹಾನಿ ಸಮೀಕ್ಷಕರು ಹೊಲಗಳಿಗೆ ಬಂದಿಲ್ಲ ಎಂಬ ಆತಂಕದಲ್ಲಿ ರೈತರಿದ್ದಾರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿಡಿಯೊ ಕಾನ್ಫರೆನ್ಸಿಂಗ್ ಸಭೆ ಮಾಡಿದರೇ ಹೊರತು ಪರಿಹಾರ ನೀಡಲಿಲ್ಲ.
ಕ್ಷೇತ್ರಕ್ಕೆ ಮಾತ್ರ ಸಚಿವರು
ಕೃಷಿ ಸಚಿವರು ತಮ್ಮ ಕ್ಷೇತ್ರಕ್ಕೆ ಮಾತ್ರಕ್ಕೆ ಸಚಿವರಾಗಿದ್ದಾರೆ, ಮಳೆ ಪ್ರದೇಶಗಳಿಗೆ ಭೇಟಿ ನೀಡಿಲ್ಲ, ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ.
ಮುಂದಿನ ದಿನಗಳಲ್ಲಿ ರೈತರಿಗೆ ಬಿತ್ತನೆ ಬೀಜ ರಸಗೊಬ್ಬರ ನೀಡಬೇಕು, ಕೇಂದ್ರದ ಎನ್‌ಡಿಆರ್‌ಎಫ್ ನಿಯಮಾವಳಿ ಪ್ರಕಾರ ಹೆಕ್ಟೇರ್‌ಗೆ 6,000 ರೂ. ಮಾತ್ರ ನೀಡಲಾಗುತ್ತಿದೆ ಎಂದರು.
ಸಚಿವ ಎಚ್.ಡಿ.ಕುಮಾರಸ್ವಾಮಿ ಕೇಂದ್ರದಿಂದ ರೈತರಿಗೆ ಬೆಳೆ ನಷ್ಟ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ, ರೈತರ ವಿಷಯದಲ್ಲಿ ರಾಜಕೀಯ ಮಾಡಲ್ಲ, ಶಕ್ತಿ ಮೀರಿ ಹೋರಾಟ ಮಾಡುತ್ತೇವೆ ಎಂದರು.

