ಬೆಂಗಳೂರು:ಅತಿವೃಷ್ಟಿ ಮತ್ತು ಪ್ರವಾಹದಿಂದ ಉಂಟಾದ ಬೆಳೆ ನಷ್ಟ ಪರಿಹಾರಕ್ಕಾಗಿ ರಾಜ್ಯ ಸರ್ಕಾರ 2,000 ಕೋಟಿ ರೂ. ಬಿಡುಗಡೆ ಮಾಡಿದೆ.
ನೈಋತ್ಯ ಮುಂಗಾರು ಹಾಗೂ ನೆರೆಯಿಂದ 12.5 ಲಕ್ಷ ಹೆಕ್ಟೇರ್ ಬೆಳೆ ನಷ್ಟವಾಗಿದ್ದು, ಹಾನಿಗೊಳಗಾದ ರೈತರಿಗೆ ಒಂದು ತಿಂಗಳಲ್ಲಿ ಪರಿಹಾರ ದೊರೆಯಲಿದೆ.
ಕಂದಾಯ ಸಚಿವ ಕೃಷ್ಣಬೈರೇಗೌಡ ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿದ್ದು, ಸರ್ಕಾರ ಪ್ರತಿ ಹೆಕ್ಟೇರ್ಗೆ 8,500 ರೂ. ಹೆಚ್ಚುವರಿಯಾಗಿ ನೀಡಲು ನಿರ್ಧರಿಸಿದೆ ಎಂದರು.
ರೈತರ ಖಾತೆಗೆ ಹಣ ಜಮೆ
ಮಳೆ ಆಶ್ರಿತ ಬೆಳೆ ಹಾನಿಗೆ 17,000 ರೂ., ನೀರಾವರಿ ಬೆಳೆಗೆ 25,500 ರೂ. ಹಾಗೂ ದೀರ್ಘಕಾಲಿಕ ಬೆಳೆ ಹಾನಿಗೆ ಹೆಕ್ಟೇರ್ಗೆ 31,000 ರೂ. ಪರಿಹಾರವನ್ನು ರೈತರಿಗೆ ಕೆಲವೇ ದಿನಗಳಲ್ಲಿ ಅವರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಮಾಡುವುದಾಗಿ ತಿಳಿಸಿದ್ದಾರೆ.
ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ಸೆಪ್ಟೆಂಬರ್ ಮೊದಲ ವಾರದಲ್ಲಿ 5.29 ಲಕ್ಷ ಹೆಕ್ಟೇರ್ ಕೃಷಿ ಹಾಗೂ ತೋಟಗಾರಿಕಾ ಬೆಳೆ ನಷ್ಟವಾಗಿತ್ತು.
ಮಹಾರಾಷ್ಟ್ರದಲ್ಲಿ ಸುರಿದ ಭಾರೀ ಮಳೆಯಿಂದ ಭೀಮಾ ಜಲಾನಯನ ಪ್ರದೇಶದಲ್ಲಿ ಪ್ರವಾಹ ಉಂಟಾಗಿ 7.24 ಲಕ್ಷ ಹೆಕ್ಟೇರ್ ಬೆಳೆ ನಷ್ಟವಾಗಿದೆ.
ಪರಿಹಾರ ಕಾರ್ಯ ಆರಂಭ
ಮೊದಲ ಹಂತದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಜಿಲ್ಲೆಗಳ ಜಂಟಿ ಸಮೀಕ್ಷೆ ಕಾರ್ಯ ಪೂರ್ಣಗೊಂಡು 5.2 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಕಳೆದುಕೊಂಡ ರೈತರಿಗೆ ಪರಿಹಾರ ನೀಡುವ ಕಾರ್ಯ ಆರಂಭಗೊಂಡಿದೆ.
ಇನ್ನು 10 ದಿನಗಳಲ್ಲಿ ಉಳಿದ ಪ್ರದೇಶಗಳಲ್ಲಿ ಜಂಟಿ ಸಮೀಕ್ಷೆ ಕಾರ್ಯ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರ ನಿಗದಿ ಪಡಿಸಿರುವ ಮೊತ್ತವೂ ಸೇರಿ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ 8,500 ರೂ. ನೀಡುವುದಾಗಿ ತಿಳಿಸಿದ್ದಾರೆ.
ರಾಷ್ಟ್ರದಲ್ಲೇ ರಾಜ್ಯ ಸರ್ಕಾರ ಸಂಪೂರ್ಣ ಪಾರದರ್ಶಕತೆಯೊಂದಿಗೆ ಆಧಾರ್ ಜೋಡಣೆ ಹೊಂದಿದ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಾಗೂ ಅತ್ಯಂತ ತ್ವರಿತವಾಗಿ ಹಣ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.

