ಮೈಸೂರು:ಅಧಿಕಾರ ಹಂಚಿಕೆ ವಿಷಯದಲ್ಲಿ ಜನಾಭಿಪ್ರಾಯ ಏನೇ ಇದ್ದರೂ ಪಕ್ಷದ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನವೇ ಅಂತಿಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಎಂಬ ಮಾತುಗಳು ಕೇಳಿಬರುತ್ತಿವೆಯಲ್ಲಾ ಎಂಬ ಸುದ್ದಿಗಾರರ ಪ್ರಶ್ನೆಗೆ ಸಿಡಿಮಿಡಿಗೊಂಡ ಸಿದ್ದರಾಮಯ್ಯ, ನಿಮಗೆ ಯಾರು ಹೇಳಿದರು ಎಂದು ಮಧ್ಯಮದ ಮೇಲೇ ಹರಿಹಾಯ್ದರು.
ನಾವು ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ
ಸಾರ್ವಜನಿಕವಾಗಿ ಏನೇ ಅಭಿಪ್ರಾಯ ವ್ಯಕ್ತವಾದರೂ ನಾವು ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ, ದೆಹಲಿಯ ಕಾಂಗ್ರೆಸ್ ನಾಯಕರು ಕೈಗೊಳ್ಳುವ ತೀರ್ಮಾನವೇ ಅಂತಿಮ.
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಆಗುತ್ತದೆ ಎಂಬುದಾಗಿ ನಿಮಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅಥವಾ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆಯೇ, ಎಲ್ಲ ಗೊಂದಲಗಳೂ ನಿಮ್ಮಿಂದಲೇ ಸೃಷ್ಠಿಯಾಗುತ್ತಿವೆ ಎಂದರು.
ಬಿಹಾರ ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ನಾನು ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡುತ್ತೇನೆ, ಈ ವೇಳೆ, ಸಂಪುಟ ಪುನರ್ ರಚನೆ ಬಗ್ಗೆಯೂ ಪ್ರಸ್ತಾಪಿಸುವುದಾಗಿ ಸ್ಪಷ್ಟಪಡಿಸಿದರು.
ಬಿಹಾರ ಚುನಾವಣಾ ಪ್ರಚಾರ
ಬಿಹಾರದಲ್ಲಿ ಅಧಿಕಾರ ವಿರೋಧಿ ಅಲೆ ಇದ್ದು, ಬಿಜೆಪಿಯ ಭ್ರಷ್ಟ ಹಾಗೂ ದುರಾಡಳಿತ ಅಂಶಗಳು ಪ್ರಮುಖವಾಗಿವೆ, ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಜಯಸಾಧಿಸುವ ವಿಶ್ವಾಸವಿದೆ, ಹೈಕಮಾಂಡ್ ಕರೆ ಬಂದರೆ ಬಿಹಾರ ಚುನಾವಣಾ ಪ್ರಚಾರಕ್ಕೆ ಅಗತ್ಯವಾಗಿ ತೆರಳುತ್ತೇನೆ.
ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟ ಕರ್ನಾಟಕದ ಗ್ಯಾರಂಟಿ ಯೋಜನೆಗಳ ನಕಲು ಮಾಡಿದೆ, ಆ ರಾಜ್ಯದ ಮುಖ್ಯಮಂತ್ರಿ ನಿತೀಶ್‌ಕುಮಾರ್ ಅವರಿಗೆ ಯಾವುದೇ ಸಿದ್ಧಾಂತವಿಲ್ಲ, ಅಲ್ಲಿ ಬಡತನ ನಿರ್ಮೂಲನೆ ಆಗಿಲ್ಲ, ಬಡವರು, ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಕಾಂಗ್ರೆಸ್ ಪರ ಮತಚಲಾಯಿಸುವ ವಿಶ್ವಾಸವಿದೆ.
ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಯಡಿ ರಾಜ್ಯದಲ್ಲಿ ೧.೨೪ ಕೋಟಿ ಮಹಿಳೆಯರಿಗೆ ಮಾಸಿಕ ೨೦೦೦ ರೂ. ನೀಡಲಾಗುತ್ತಿದೆ, ಇದುವರೆಗೆ ಒಂದು ಲಕ್ಷ ಕೋಟಿ ರೂ.ಗಳಿಗೂ ಹೆಚ್ಚು ಮೊತ್ತ ಗ್ಯಾರಂಟಿ ಯೋಜನೆಗಳಿಗಾಗಿಯೇ ವೆಚ್ಚ ಮಾಡಲಾಗಿದೆ ಎಂದರು.
ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ
ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಎಲೆಮರೆಯ ಕಾಯಿಯಂತೆ ಸೇವೆ ಸಲ್ಲಿಸಿರುವ ಹಲವು ಸಾಧಕರನ್ನು ಗುರುತಿಸಿ ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ, ಪ್ರಶಸ್ತಿಗೆ ಅರ್ಜಿ ಆಹ್ವಾನಿಸದೇ, ಸಾಮಾಜಿಕ ನ್ಯಾಯ, ಪ್ರಾದೇಶಿಕ ಸಮಾನತೆ ಆಧರಿಸಿ ಪ್ರತಿ ಜಿಲ್ಲೆಯ ಸಾಧಕರನ್ನು ಗುರುತಿಸಿ ಗೌರವಿಸಲಾಗಿದೆ.
ಅರಣ್ಯ ಪ್ರದೇಶಗಳಲ್ಲಿ ಹೆಚ್ಚು ರೆಸಾರ್ಟ್‌ಗಳು ಆರಂಭವಾಗಿದ್ದು ಸಫಾರಿ ಸೇರಿದಂತೆ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ, ನೀರು, ಮೇವು ಕೊರತೆಯಿಂದ ಕಾಡು ಪ್ರಾಣಿಗಳು ಜನವಸತಿ ಪ್ರದೇಶಗಳಿಗೆ ನುಗ್ಗುತ್ತಿವೆ.
ಅನಧಿಕೃತ ರೆಸಾರ್ಟ್‌ಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು, ಸಫಾರಿಗಳ ಸಂಖ್ಯೆಯಲ್ಲೂ ಕಡಿತ ಮಾಡಲು ಸೂಚಿಸಲಾಗಿದೆ ಎಂದರು.

