ಮದ್ದೂರು:ಪರಿಶಿಷ್ಟ ಸಮುದಾಯಗಳಿಗೆ ದ್ರೋಹ ಬಗೆದ ರಾಜ್ಯದಲ್ಲಿನ ಭ್ರಷ್ಟ ಕಾಂಗ್ರೆಸ್ ಸರ್ಕಾರ ಅಧಿಕಾರ ಬಿಟ್ಟು ತೊಲಗಲೇಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಮೈಸೂರು ಚಲೋ ಪಾದಯಾತ್ರೆಯ ನಾಲ್ಕನೇ ದಿನವಾದ ಇಂದು ಮದ್ದೂರಿನಲ್ಲಿ ಸಾರ್ವಜನಿಕ ವೇದಿಕೆಯಲ್ಲಿ ಮಾತನಾಡಿದ ಅವರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಸಾವಿರಾರು ಕೋಟಿ ರೂ. ಮೌಲ್ಯದ ನಿವೇಶನಗಳ ಅಕ್ರಮ ಹಂಚಿಕೆ ಹಾಗೂ ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಹಗರಣಗಳ ಮೊದಲ ಆರೋಪಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಆಗಿದ್ದಾರೆ ಎಂದರು.
ಬಿಜೆಪಿ-ಜೆಡಿಎಸ್ ಒಂದಾಗಿ ಹೋರಾಟ
ಇಂಥ ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಹೋರಾಟ ನಿಲ್ಲುವುದಿಲ್ಲ, ಬಿಜೆಪಿ-ಜೆಡಿಎಸ್ ಒಂದಾಗಿ ಹೋರಾಟ ಮುಂದುವರೆಸಲಿವೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆ ಎಸ್‌ಐಟಿ ಸಲ್ಲಿಸಿರುವ ಚಾರ್ಜ್‌ಶೀಟ್‌ನಿಂದ ಆರೋಪಿ ಸ್ಥಾನದಲ್ಲಿರುವ ಮಾಜಿ ಸಚಿವ ಬಿ.ನಾಗೇಂದ್ರ ಮತ್ತು ನಿಗಮದ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ್ ಹೆಸರು ಕೈಬಿಡಲಾಗಿದೆ.
ಇವರಿಬ್ಬರನ್ನು ಆರೋಪಿಗಳನ್ನಾಗಿ ಮಾಡಿದರೆ, ಮುಂದೆ ಸಿದ್ದರಾಮಯ್ಯನವರೇ ಮೊದಲ ಆರೋಪಿ ಆಗಲಿದ್ದಾರೆ ಎಂಬ ಕಾರಣಕ್ಕೆ ಮಾಜಿ ಸಚಿವ ಹಾಗೂ ದದ್ದಲ್ ಅವರುಗಳ ಹೆಸರನ್ನು ಆರೋಪಪಟ್ಟಿಯಿಂದ ಕೈಬಿಡುವ ಕೆಲಸ ಮಾಡಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ದಲಿತರ ಹಣ ಲೂಟಿ
ದಲಿತರು, ಪರಿಶಿಷ್ಟ ಜಾತಿ, ಪಂಗಡಗಳ ಹೆಸರು ಹೇಳಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಾಡಿನ ದಲಿತ ಸಮುದಾಯಗಳಿಗೆ ಮೀಸಲಿಟ್ಟ ಹಣ ಲೂಟಿ ಮಾಡಿದೆ.
ಯಾದಗಿರಿಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಪೊಲೀಸ್ ಅಧಿಕಾರಿಯಿಂದ 30 ಲಕ್ಷ ರೂ.ಗಳಿಗೆ ಬೇಡಿಕೆ ಇಡುವ ಮೂಲಕ ಸ್ಥಳೀಯ ಕಾಂಗ್ರೆಸ್ ಶಾಸಕರು ಅಧಿಕಾರಿ ಸಾವಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿದರು.