ಫೆರಿಫೆರಲ್ ರಿಂಗ್ ರೋಡ್ ಯೋಜನೆ ಅನುಷ್ಠಾನಕ್ಕೆ ದೃಢ ಸಂಕಲ್ಪ
ಬೆಂಗಳೂರು : ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಆದರೆ, ಪರಿಷ್ಕರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ನಗರದ ಮಾಣಿಕ್ ಷಾ ಮೈದಾನದಲ್ಲಿ ನಡೆದ 78 ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ನಾಡಿನ ಜನತೆಗೆ ಸಂದೇಶ ನೀಡಿದ ಮುಖ್ಯಮಂತ್ರಿ, ಈ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಭವಿಷ್ಯ ನುಡಿದವರಿಗೆ ರಾಜ್ಯದಲ್ಲಿ ಆರ್ಥಿಕ ಬೆಳವಣಿಗೆಯನ್ನು ಸಾಧಿಸಿ ತೋರಿಸುವ ಮೂಲಕ ನಾವು ಉತ್ತರಿಸಲಿದ್ದೇವೆ ಎಂದರು.
ಈ ಯೋಜನೆಗಳ ವ್ಯಾಪ್ತಿಯೊಳಗೆ ಹೊಸ ಆವಿಷ್ಕಾರಗಳನ್ನು ನಡೆಸಿ ಅವುಗಳು ಫಲಾನುಭವಿಗಳಿಗೆ ಇನ್ನಷ್ಟು ಹೆಚ್ಚು ನೆರವಾಗುವ ರೀತಿಯ ಕ್ರಮಗಳನ್ನು ಕೈಗೊಳ್ಳಲು ನಾವು ಉದ್ಯುಕ್ತರಾಗಿದ್ದೇವೆ.
ಉದಾಹರಣೆಗೆ ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿ ಕುಟುಂಬಗಳ ಯಜಮಾನಿ ಮಹಿಳೆಯರಿಗೆ ಈಗ ಮಾಸಿಕ 2,000 ರೂ. ನೆರವು ನೀಡುತ್ತಿದ್ದೇವೆ. ಈ ಫಲಾನುಭವಿಗಳನ್ನು ಸ್ತ್ರೀ-ಶಕ್ತಿ ಮಹಿಳಾ ಸ್ವಸಹಾಯ ಸಂಘಗಳಾಗಿ ಸಂಘಟಿಸುವ ಮೂಲಕ ಅವರಿಗೆ ವಿವಿಧ ಹಣಕಾಸು ಸಂಸ್ಥೆಗಳಿಂದ ಆರ್ಥಿಕ ನೆರವು ಒದಗಿಸಿ ವರಮಾನ ತರುವ ವಿವಿಧ ಚಟುವಟಿಕೆಗಳಲ್ಲಿ ಅವರನ್ನು ತೊಡಗಿಸುವ ಯೋಚನೆ ಇದೆ. ಅದೇ ರೀತಿ ಯುವನಿಧಿಯ ಫಲಾನುಭವಿಗಳಿಗೆ ಕೌಶಾಲ್ಯಾಭಿವೃದ್ಧಿ ತರಬೇತಿಯನ್ನು ನೀಡಲು ಕ್ರಮ ವಹಿಸಲಾಗುತ್ತಿದೆ ಎಂದು ಅವರು ಹೇಳಿದರು.
ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಗಳಿಂದಾಗಿ ಮಾಸಿಕ ಸರಾಸರಿ 4,000-5,000 ರೂ.ಗಳಷ್ಟು ಪ್ರತಿ ಫಲಾನುಭವಿ ಕುಟುಂಬಕ್ಕೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಲಭಿಸುತ್ತಿದೆ ಎಂದರು.
ಇದು ಹಲವು ಕಾರಣಗಳಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೇರ ಆರ್ಥಿಕ ನೆರವು ನೀಡುವ ಯೂನಿವರ್ಷಲ್ ಬೇಸಿಕ್ ಆದಾಯ (Universal Basic Income) ಪರಿಕಲ್ಪನೆ. ಮುಂದುವರಿದ ರಾಷ್ಟ್ರಗಳಲ್ಲಿ ಆರ್ಥಿಕವಾಗಿ ಅಶಕ್ತ ವರ್ಗಗಳಿಗೆ ನೆರವಾಗಲು ಜಾರಿಗೊಳಿಸಲಾಗುತ್ತಿರುವ ಇಂತಹ ಯೋಜನೆಯೊಂದನ್ನು ಅತೀ ದೊಡ್ಡ ಮಟ್ಟದಲ್ಲಿ ಸಾಕಾರಗೊಳಿಸುತ್ತಿರುವ ರಾಜ್ಯ ಕರ್ನಾಟಕ ಎಂದು ಅವರು ತಿಳಿಸಿದರು.
ಸರ್ಕಾರದ ಜನಕಲ್ಯಾಣ ಯೋಜನೆಗಳು
ನಮ್ಮ ಸರ್ಕಾರದ ಜನಕಲ್ಯಾಣ ಯೋಜನೆಗಳು ಐದು ಗ್ಯಾರಂಟಿಗಳಿಗಷ್ಟೇ ಸೀಮಿತವಾಗಿಲ್ಲ. ದುರ್ಬಲ ವರ್ಗದವರಿಗೆ ಸಾಮಾಜಿಕ ಭದ್ರತೆ ಒದಗಿಸುವ ವಿವಿಧ ಮಾಸಿಕ ಪಿಂಚಣಿಗಳಡಿ 78.64 ಲಕ್ಷ ಫಲಾನುಭವಿಗಳು ನೇರ ನಗದು ವರ್ಗಾವಣೆಯ ರೂಪದಲ್ಲಿ ನೆರವು ಪಡೆಯುತ್ತಿದ್ದಾರೆ.
ಅಧಿಕಾರಕ್ಕೆ ಬಂದ ನಂತರ ವೃದ್ಧಾಪ್ಯ ವೇತನ, ವಿಧವಾ ವೇತನ, ಮೈತ್ರಿ, ಮನಸ್ವಿನಿ ಮೊದಲಾದ ಸಾಮಾಜಿಕ ಭದ್ರತೆ ಯೋಜನೆಗಳಡಿ 13,027 ಕೋಟಿ ರೂ. ವೆಚ್ಚ ಮಾಡಲಾಗಿದೆ.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯಡಿ ಹೋಬಳಿಗೊಂದು ವಸತಿ ಶಾಲೆ ಪ್ರಾರಂಭಿಸುವ ಗುರಿಯನ್ನು ಹೊಂದಿದ್ದು, ಪ್ರಸಕ್ತ ಸಾಲಿನಲ್ಲಿ 20 ಹೊಸ ವಸತಿ ಶಾಲೆಗಳು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಸಮುದಾಯದವರಲ್ಲಿ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡಲು ಪೂರಕವಾಗಿ ಹೊಸದಾಗಿ ಒಟ್ಟು 295 ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳನ್ನು ಮಂಜೂರು ಮಾಡಲಾಗಿದೆ. ಸ್ವಂತ ಕಟ್ಟಡ ಹೊಂದಿರುವ 25 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಪ್ರಾರಂಭಿಸಲಾಗಿದೆ ಎಂದು ಅವರು ತಿಳಿಸಿದರು.
ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 11,494 ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಬಾಕಿ ಇರುವ ಹುದ್ದೆಗಳನ್ನೂ ಹಂತ ಹಂತವಾಗಿ ಭರ್ತಿ ಮಾಡುವ ಪ್ರಕ್ರಿಯೆ ಪ್ರಾರಂಭಿಸುತ್ತೇವೆ.
ಪ್ರವಾಹ ಪೀಡಿತ ಜಿಲ್ಲೆಗಳಿಗೆ ನಾನು ಸ್ವತಃ ಭೇಟಿ ನೀಡಿದ್ದೇನೆ. ನಮ್ಮ ಸಚಿವರುಗಳೂ ಜಿಲ್ಲೆಗಳಲ್ಲಿದ್ದು ಪರಿಸ್ಥಿತಿಯನ್ನು ನಿಭಾಯಿಸಿದ್ದಾರೆ. ಜೀವಹಾನಿ, ಜಾನುವಾರುಗಳ ಸಾವು ಹಾಗೂ ಮನೆ ಹಾನಿಗಳಿಗೆ ತ್ವರಿತವಾಗಿ ಪರಿಹಾರ ಒದಗಿಸುವಂತೆ ಸೂಚಿಸಲಾಗಿದೆ. ಮನೆ ಕಳೆದುಕೊಂಡವರಿಗೆ 1.2 ಲಕ್ಷ ರೂ. ಪರಿಹಾರದೊಂದಿಗೆ ಮನೆ ಹಂಚಿಕೆ ಮಾಡಲು ಕ್ರಮ ವಹಿಸುತ್ತಿದ್ದೇವೆ ಎಂದು ತಿಳಿಸಿದರು.
100 ಕೋಟಿ ರೂ. ವೆಚ್ಚದಲ್ಲಿ ಉಪಶಮನ
ಭೂ-ವೈಜ್ಞಾನಿಕ ಸರ್ವೇಕ್ಷಣಾ ಸಂಸ್ಥೆಯು ರಾಜ್ಯದ ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ಭೂ-ಕುಸಿತ ಸಂಭವಿಸಬಹುದಾದ 1,351 ಗ್ರಾಮಗಳನ್ನು ಗುರುತಿಸಿದೆ. ಈ ಪ್ರದೇಶಗಳಲ್ಲಿ ಭೂ-ಕುಸಿತ ತಡೆಗಟ್ಟಲು ಭೂ-ವೈಜ್ಞಾನಿಕ ಸರ್ವೇಕ್ಷಣಾ ಸಂಸ್ಥೆ ಎನ್ಐಆರ್ ಎಂ ಸಹಯೋಗದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಉಪಶಮನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಕಲ್ಯಾಣ ಯೋಜನೆಗಳ ಜೊತೆಜೊತೆಗೆ ಅರ್ಥಿಕ ಅಭಿವೃದ್ಧಿ ದರದ ವೇಗ ಹೆಚ್ಚಿಸಲು ಉದ್ಯಮ, ಕೃಷಿ, ಮೂಲಭೂತ ಸೌಕರ್ಯ ಮುಂತಾದ ಕ್ಷೇತ್ರಗಳಲ್ಲಿ ಬಹುಮುಖಿ ಯೋಜನೆಗಳನ್ನು ಸರ್ಕಾರ ಹಮ್ಮಿಕೊಂಡಿದೆ. ರಾಜ್ಯದ ಸಮಗ್ರ ಅಭಿವೃದ್ಧಿಯೆ ನಮ್ಮ ಗುರಿ ಮತ್ತು ಧ್ಯೇಯವಾಗಿದೆ.
2023-24ನೇ ಸಾಲಿನಲ್ಲಿ ರಾಜ್ಯವು 1,66,545 ಮಿಲಿಯನ್ ಅಮೆರಿಕನ್ ಡಾಲರ್ ಮೊತ್ತದ ರಫ್ತು ಮಾಡಿ ಮೊದಲ ಸ್ಥಾನದಲ್ಲಿದೆ. ಕಳೆದ ಸಾಲಿಗೆ ಹೋಲಿಸಿದರೆ ರಾಜ್ಯವು ಶೇ. 5.20 ರಷ್ಟು ಪ್ರಗತಿಯನ್ನು ಸಾಧಿಸಿದೆ. ರಾಜ್ಯಕ್ಕೆ, ಅಂತಾರಾಷ್ಟ್ರೀಯ ಹಾಗೂ ರಾಷ್ಟ್ರೀಯ ಬಂಡವಾಳವನ್ನು ಆಕರ್ಷಿಸುವ ಸಂಬಂಧ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶ – 2025 ರನ್ನು ಫೆಬ್ರವರಿ 2025ರಲ್ಲಿ ಆಯೋಜಿಸಲಾಗುತ್ತಿದೆ. ಇದಕ್ಕೆ ಭರದ ಸಿದ್ಧತೆ ನಡೆಯುತ್ತಿದ್ದು, ದೇಶ-ವಿದೇಶಗಳಲ್ಲಿ ರೋಡ್ ಶೋಗಳನ್ನು ನಡೆಸಿ ಹೂಡಿಕೆದಾರರನ್ನು ಆಹ್ವಾನಿಸಲಾಗುವುದು ಎಂದರು.
ಖಾಲಿ ಹುದ್ದೆಗಳ ಭರ್ತಿಗೆ ಒತ್ತು
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಖಾಲಿ ಇರುವ ಹುದ್ದೆ ಭರ್ತಿಗೆ ಒತ್ತು ನೀಡಲಾಗಿದ್ದು, 15,428 ಹುದ್ದೆಗಳ ಭರ್ತಿಗೆ ಸರ್ಕಾರ ಅನುಮೋದನೆ ನೀಡಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಅಧಿಸೂಚನೆಯಾಗಿ ಬಾಕಿ ಉಳಿದಿದ್ದ 670 ಹುದ್ದೆಗಳೂ ಸೇರಿದಂತೆ ಒಟ್ಟು 11,512 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿದೆ ಎಂದರು.
ಉತ್ತಮ ಮೂಲಸೌಕರ್ಯಗಳು, ಸಾರಿಗೆ ಸಂಪರ್ಕ ಸೌಲಭ್ಯಗಳು ಆರ್ಥಿಕತೆಯ ಬೆಳವಣಿಗೆಗೆ ವೇಗವರ್ಧಕವಿದ್ದಂತೆ. ಈ ನಿಟ್ಟಿನಲ್ಲಿ ಪ್ರಸಕ್ತ ಸಾಲಿನಲ್ಲಿ 1,917 ಕಿ.ಮೀ. ರಾಜ್ಯ ಹೆದ್ದಾರಿ, 2,502 ಕಿ.ಮೀ. ಜಿಲ್ಲಾ ಮುಖ್ಯ ರಸ್ತೆಗಳು ಮತ್ತು 150 ಸೇತುವೆಗಳನ್ನು ನಿರ್ಮಾಣ ಮಾಡಲಾಗುವುದು.
ಬೆಂಗಳೂರು ನಗರವನ್ನು ವಿಶ್ವದರ್ಜೆಯ ನಗರವಾಗಿ ಅಭಿವೃದ್ಧಿ ಪಡಿಸಲು ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯನ್ನು ಜಾರಿಗೊಳಿಸಲಾಗಿದೆ. ನಗರದಲ್ಲಿ ವಿನೂತನ ಆರ್ಥಿಕ ಸಂಪನ್ಮೂಲ ಕ್ರೋಢೀಕರಣ ಮಾದರಿ ಅಡಿಯಲ್ಲಿ ಕನಿಷ್ಠ 48,686 ಕೋಟಿ ರೂ. ವೆಚ್ಚದಲ್ಲಿ ದೀರ್ಘಾವಧಿಯ ಮೂಲಭೂತ ಸೌಕರ್ಯ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಯೋಜಿಸಲಾಗಿದೆ.
ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಯ ಉದ್ದೇಶದಿಂದ ಫೆರಿಫೆರಲ್ ರಿಂಗ್ ರೋಡ್ ಯೋಜನೆಯನ್ನು ಅನುಷ್ಠಾನಗೊಳಿಸಲು ನಮ್ಮ ಸರ್ಕಾರ ದೃಢ ಸಂಕಲ್ಪ ಮಾಡಿದೆ ಎಂದರು.
ಉಪವಿಭಾಗ ಕಚೇರಿ ಸ್ಥಳಾಂತರ
ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಮತ್ತು ಭೂ-ಸ್ವಾಧೀನ ಪ್ರಕ್ರಿಯೆಗಳನ್ನು ಚುರುಕುಗೊಳಿಸಲು ಕಾವೇರಿ ನೀರಾವರಿ ನಿಗಮ ವ್ಯಾಪ್ತಿಯ ವಿಭಾಗ ಕಚೇರಿ ಮತ್ತು ಉಪವಿಭಾಗ ಕಚೇರಿ ಸ್ಥಳಾಂತರ ಮಾಡಲಾಗಿದೆ ಎಂದರು.
ಇತ್ತೀಚಿನ ವರ್ಷಗಳಲ್ಲಿ ಕೇಂದ್ರ ಸರ್ಕಾರ ರಾಜ್ಯಗಳಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗುತ್ತಿದೆ. ಮುಂದಿನ ದಿನಗಳಲ್ಲಾದರೂ ಕೇಂದ್ರ ಸರ್ಕಾರವು, ರಾಜ್ಯಗಳು ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂಬುದನ್ನು ಮನಗಂಡು ರಾಜ್ಯಗಳ ಅಭಿವೃದ್ಧಿಗೆ ಅನುದಾನಗಳನ್ನು ಬಿಡುಗಡೆ ಮಾಡಬೇಕೆಂದು ಈ ಸಂದರ್ಭದಲ್ಲಿ ಸಮಸ್ತ ನಾಡ ಬಂಧುಗಳ ಪರವಾಗಿ ಒತ್ತಾಯಿಸುತ್ತೇನೆ ಎಂದರು ಹೇಳಿದರು.
ಅಂತೆಯೇ ಜನತೆಯ ತೀರ್ಪನ್ನು ಧಿಕ್ಕರಿಸಿ ನಡೆಸುವ ಹಿಂಬಾಗಿಲ ರಾಜಕಾರಣವನ್ನು ಇತಿಹಾಸದಲ್ಲಿ ಜನತೆ ಎಂದಿಗೂ ಕ್ಷಮಿಸಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಡಿ ನಾಡಿನ ಮಹಾ ಜನತೆ ನೀಡಿದ ತೀರ್ಪನ್ನು ಗೌರವಿಸಿ, ಸಂವಿಧಾನದ ಆಶಯಗಳ ಪ್ರಕಾರ ವಿರೋಧಪಕ್ಷಗಳು ಜವಾಬ್ದಾರಿಯುತವಾಗಿ ನಡೆಯಬೇಕೆಂಬುದನ್ನು ಎಲ್ಲರೂ ನಿರೀಕ್ಷಿಸುತ್ತಾರೆ ಎಂದರು.
ಎಲ್ಲ ಜಾತಿ ಹಾಗೂ ಮತಗಳ ಜನರು ಒಟ್ಟುಗೂಡಿ ಸ್ವಾತಂತ್ರ್ಯ ಗಳಿಸಿದ್ದೇವೆ. ಎಲ್ಲರೂ ಒಟ್ಟುಗೂಡಿ ಈ ಅಮೂಲ್ಯ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಬೇಕಾಗಿದೆ.
ರಾಷ್ಟ್ರಕವಿ ಕುವೆಂಪು ಅವರ ಕವನದ ಈ ಸಾಲುಗಳಂತೆ ಜಾತಿ, ಮತ, ಧರ್ಮ, ಭಾಷೆಯ ಆಧಾರದ ಭೇದ-ಭಾವಗಳನ್ನು ಮರೆತು ದೇಶದ ವೈವಿಧ್ಯತೆಯನ್ನು ಗೌರವಿಸುತ್ತ, ಅಖಂಡತೆಯನ್ನು ಪಾಲಿಸುತ್ತ ಅಭಿವೃದ್ಧಿ ಪಥದಲ್ಲಿ ಮುನ್ನಡೆಯಬೇಕಾಗಿದೆ. ಎಲ್ಲರಿಗೂ ಸಾಮಾಜಿಕ ಹಾಗೂ ಆರ್ಥಿಕ ಸ್ವಾತಂತ್ರ್ಯ ದೊರಕಿಸುವ ಮೂಲಕ ರಾಜಕೀಯ ಸ್ವಾತಂತ್ರ್ಯ ಅಬಾಧಿತವಾಗುವಂತೆ ಶ್ರಮಿಸಬೇಕಾಗಿದೆ. ಈ ಗುರಿ ಸಾಧನೆಗಾಗಿ ನಾವೆಲ್ಲರೂ ಒಟ್ಟಾಗಿ ದುಡಿಯೋಣ. ಸ್ವಸ್ಥ, ಸಮೃದ್ಧ, ಸಮ-ಸಮಾಜದ ನಾಡು ಕಟ್ಟೋಣ ಎಂದು ಆಶಿಸಿ ದರು.