ರಾಜ್ಯ ಸರ್ಕಾರದ ಮನವಿಗೆ ಕೇಂದ್ರದ ಸ್ಪಂದನೆ
ಬೆಂಗಳೂರು:ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಮತ್ತು ಸೂರ್ಯಕಾಂತಿ ಖರೀದಿಗೆ ಸಮ್ಮತಿಸಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಇಂದಿಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ಮಾರುಕಟ್ಟೆಯಲ್ಲಿ ಹೆಸರುಕಾಳು ಮತ್ತು ಸೂರ್ಯಕಾಂತಿ ಧಾರಣೆ ಕುಸಿದ ಹಿನ್ನೆಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಖರೀದಿಗೆ ಅನುಮತಿ ನೀಡುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿತ್ತು, 22,215 ಮೆಟ್ರಿಕ್ ಟನ್ ಹೆಸರುಕಾಳು ಹಾಗೂ 13,210 ಮೆಟ್ರಿಕ್ ಟನ್ ಸೂರ್ಯಕಾಂತಿ ಖರೀದಿಗೆ ಸಮ್ಮತಿಸಿದೆ ಎಂದರು.
ಎಫ್ಎಕ್ಯೂ ಗುಣಮಟ್ಟ
ಬೆಂಬಲ ಬೆಲೆ ಯೋಜನೆಯಡಿ ಎಫ್ಎಕ್ಯೂ ಗುಣಮಟ್ಟದ ಹೆಸರುಕಾಳಿಗೆ ಪ್ರತಿ ಕ್ವಿಂಟಾಲ್ಗೆ 8,682 ರೂ. ಹಾಗೂ ಸೂರ್ಯಕಾಂತಿಗೆ 7,280 ರೂ. ಬೆಲೆ ನಿಗದಿಪಡಿಸಲಾಗಿದೆ.
ಖರೀದಿ ಏಜನ್ಸಿ ನೇಮಕ ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ, ಧಾರಣೆ ಕುಸಿತದಿಂದ ರೈತರು ಆತಂಕ ಪಡುವ ಅಗತ್ಯವಿಲ್ಲ, ಖರೀದಿ ಕೇಂದ್ರಗಳನ್ನು ಆರಂಭಿಸುತ್ತಿದ್ದಂತೆ ನೋಂದಣಿ ಮಾಡಿಸಿಕೊಂಡು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಬಹುದಾಗಿದೆ.
ಹೆಸರುಕಾಳು ಮತ್ತು ಸೂರ್ಯಕಾಂತಿ ಬೆಳೆಯುವ ಪ್ರಮುಖ ಜಿಲ್ಲೆಗಳ ಜಿಲ್ಲಾಧಿಕಾರಿಗಳು ವಿಳಂಬ ಮಾಡದೆ, ಟಾಸ್ಕ್ ಫೋರ್ಸ್ ಸಭೆ ನಡೆಸಿ ಖರೀದಿ ಕೇಂದ್ರಗಳನ್ನು ಗುರುತಿಸಿ ನೋಂದಣಿ ಆರಂಭಿಸುವಂತೆ ನಿರ್ದೇಶನ ನೀಡಲಾಗಿದೆ.
ರೈತರ ಹಿತದೃಷ್ಟಿಯಿಂದ ಆದಷ್ಟು ತ್ವರಿತವಾಗಿ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಿವಾನಂದ ಪಾಟೀಲ್ ತಿಳಿಸಿದ್ದಾರೆ.