ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ಬಗ್ಗೆ ರಾಜ್ಯ ಹೈಕೋರ್ಟ್‌ನಲ್ಲಿ ನಾಳೆ ವಿಚಾರಣೆ ಮುಂದುವರೆಯುವ ಸಂದರ್ಭದಲ್ಲೇ ಕಾಂಗ್ರೆಸ್ ಶಾಸಕರು ರಾಜಭವನ ಚಲೋ’ ನಡೆಸುತ್ತಿದ್ದಾರೆ.
ಸಿದ್ದರಾಮಯ್ಯ ಪ್ರಶ್ನಿಸಿರುವ ಅರ್ಜಿ ವಿಚಾರಣೆ ನಾಳೆ ಬೆಳಗ್ಗೆ 10-30ಕ್ಕೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಪೀಠದ ಮುಂದೆ ಬರಲಿದೆ.
ಪಕ್ಷದ ಎಲ್ಲ ಜನಪ್ರತಿನಿಧಿಗಳು
ಇದೇ ಸಂದರ್ಭದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಬಿಜೆಪಿಯ ಮೂವರು ಮಾಜಿ ಸಚಿವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಒತ್ತಾಯಿಸಿ ಸಿದ್ದರಾಮಯ್ಯ ನೇತೃತ್ವದಲ್ಲೇ ಕಾಂಗ್ರೆಸ್‌ನ ಸಚಿವರು, ಶಾಸಕರು ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಪಕ್ಷದ ಎಲ್ಲ ಜನಪ್ರತಿನಿಧಿಗಳು ರಾಜಭವನಕ್ಕೆ ತೆರಳಲಿದ್ದಾರೆ.
ವಿಧಾನಸೌಧದ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಸೇರಿ ಅಲ್ಲಿಂದ ರಾಜಭವನಕ್ಕೆ ತೆರಳಿ, ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ ಹಾಗೂ ಶಶಿಕಲಾ ಜೊಲ್ಲೆ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳಿಗೂ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ಎಂದು ರಾಜ್ಯಪಾಲರನ್ನು ಒತ್ತಾಯಿಸಲಿದ್ದಾರೆ.
ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡಿ
ಈ ಸಂಬಂಧ ಸುದ್ದಿಗಾರರೊಂದಿಗೆ ಪ್ರತ್ಯೇಕವಾಗಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಸ್‌ಐಟಿ ತನಿಖೆ ನಡೆಸಿ ಎಫ್‌ಐಆರ್ ದಾಖಲಿಸಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ರಾಜಭವನವನ್ನು ಸರ್ಕಾರ ಕೋರಿದೆ.
ಕುಮಾರಸ್ವಾಮಿ ಸೇರಿದಂತೆ ನಾಲ್ವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಸಂಪುಟದಲ್ಲಿ ನಿರ್ಣಯ ಕೈಗೊಂಡು ಮನವಿ ಮಾಡಿದರೂ ರಾಜಭವನ ಅನುಮತಿ ನೀಡದಿರುವುದರಿಂದ ನಾವೆಲ್ಲರೂ ರಾಜ್ಯಪಾಲರನ್ನು ಭೇಟಿ ಮಾಡಿ ಮತ್ತೊಮ್ಮೆ ಒತ್ತಾಯ ಮಾಡುತ್ತೇವೆ ಎಂದರು.