ಬೆಂಗಳೂರು:ಜಿಲ್ಲಾ, ತಾಲ್ಲೂಕು ಪಂಚಾಯತ್ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವಂತೆ ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಸ್ಥಳೀಯ ಸರ್ಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೆ ಭಾಗ್ಯ ಬರುವುದಿಲ್ಲ, ಮೊದಲು ಅವರಿಗೆ ಅಧಿಕಾರ ನೀಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ.
ನೀವು ಅಧಿಕಾರಕ್ಕೆ ಬಂದು ವರ್ಷದ ಮೇಲೆ ನಾಲ್ಕು ತಿಂಗಳು ಕಳೆಯಿತು, ಈವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ನಿಮ್ಮಿಂದ ಸಾಧ್ಯವಾಗಿಲ್ಲ.
ಕತ್ತು ಹಿಸುಕುವ ಕೆಲಸ
ಅಧಿಕಾರದ ನಿಮ್ಮ ದಾಹ ಸ್ಥಳೀಯ ಸಂಸ್ಥೆಗಳ ಕತ್ತು ಹಿಸುಕುವ ಕೆಲಸ ಮಾಡಿದೆ, ನಿಮ್ಮ ಪ್ರಜಾಪ್ರಭುತ್ವದ ಜನಪರತೆ ಜಾಹೀರಾತುಗಳಲ್ಲಷ್ಟೇ ಝಗಮಗಿಸುತ್ತಿದೆ ಎಂದು ಟ್ವೀಟ್ ಮಾಡಿ ಕಿಡಿ ಕಾರಿದ್ದಾರೆ.
ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿಕೊಳ್ಳುವ ಕೆಲಸ ಮಾಡಿದ್ದೀರಿ, ಆದರೆ, ನೈಜವಾಗಿ ಪ್ರಜಾಪ್ರಭುತ್ವ ಉಳಿಸುವ ಕೆಲಸ ಮಾಡುತ್ತಿಲ್ಲ.
ಅಧಿಕಾರಕ್ಕೆ ಬಂದಾಗಿನಿಂದಲೂ ಪ್ರಜಾಪ್ರಭುತ್ವದ ಸರಪಳಿಯ ತಳಮಟ್ಟದ ಆಧಾರ ಸ್ತಂಭಗಳಾದ ಜಿಲ್ಲಾ, ತಾಲ್ಲೂಕು ಪಂಚಾಯತ್ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಿಲ್ಲ ಏತಕ್ಕೆ ಎಂದು ಪ್ರಶ್ನಿಸಿರುವ ಕುಮಾರಸ್ವಾಮಿ, ಸ್ಥಳೀಯ ನಾಯಕರು ಅಧಿಕಾರಕ್ಕೆ ಬಂದರೆ ನೀವು ವಿಧಾನಸೌಧದಲ್ಲಿ ಮೆರೆಯಲು ಸಾಧ್ಯವಿಲ್ಲ, ಅಲ್ಲವೇ ಎಂದು ವ್ಯಂಗ್ಯವಾಡಿದ್ದಾರೆ.
ಫಲಿತಾಂಶ ಶೂನ್ಯ
ನೀವು ಮತ್ತು ನಿಮ್ಮ ಪಕ್ಷದ ಅಧ್ಯಕ್ಷರು ತಿಂಗಳಿಗೊಮ್ಮೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಹೇಳಿಕೆ ನೀಡುತ್ತೀರಿ, ಪಕ್ಷದ ಕಾರ್ಯಕರ್ತರ ಸಭೆಗಳನ್ನೂ ಮಾಡುತ್ತೀರಿ, ಆದರೆ, ಫಲಿತಾಂಶ ಮಾತ್ರ ಶೂನ್ಯ.
ಚುನಾವಣೆ ಬದಲು ಸರ್ಕಾರಿ ಹಣದಲ್ಲಿ ಜಾಹೀರಾತುಗಳನ್ನು ನೀಡಿ ಮಾನವ ಸರಪಳಿಯಿಂದ ಪ್ರಜಾಪ್ರಭುತ್ವ ಉಳಿಸುತ್ತೇವೆ ಎಂದು ಬಡಾಯಿ ಮಾತುಗಳನ್ನು ಆಡುತ್ತೀರಿ.
ವಿಚ್ಛಿದ್ರ ಶಕ್ತಿಗಳನ್ನು ದಮನ ಮಾಡುವುದು ಎಂದರೆ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ತತ್ವಕ್ಕೆ ತಿಲಾಂಜಲಿ ಇಡುವುದೇ ಎಂದು ಪ್ರಶ್ನಿಸಿರುವ ಅವರು, ಮಾನವ ಸರಪಳಿಯಿಂದ ಪ್ರಜಾಪ್ರಭುತ್ವ ಉಳಿಯುತ್ತದೆಯೇ.
ಜನರ ತೆರಿಗೆ ಹಣದ ಪೋಲು ಪ್ರಜಾಪ್ರಭುತ್ವಕ್ಕೆ ಭೂಷಣವೇ ಎಂದು ಅವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
