ಬೆಂಗಳೂರು:ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮ ಎತ್ತಿಹಿಡಿದ ರಾಜ್ಯ ಹೈಕೋರ್ಟ್ ತೀರ್ಪು ಗೌರವಿಸಿ, ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದಿಲ್ಲಿ ಆಗ್ರಹಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ರಾಜ್ಯಪಾಲರ ಕ್ರಮವನ್ನು ರಾಜ್ಯ ಹೈಕೋರ್ಟ್ ಎತ್ತಿಹಿಡಿದು, ಸಿದ್ದರಾಮಯ್ಯ ಅವರ ಅರ್ಜಿ ವಜಾ ಮಾಡಿ, ಕಾನೂನಿನ ಮುಂದೆ ಎಲ್ಲರೂ ಒಂದೇ ಎಂದು ತಿಳಿಸಿದೆ.
ಹೈಕೋರ್ಟ್ ತೀರ್ಪು
ಹೈಕೋರ್ಟ್ನಲ್ಲಿ ಸುದೀರ್ಘ ವಾದ-ಪ್ರತಿವಾದದ ಬಳಿಕ ತೀರ್ಪು ಹೊರಬಿದ್ದಿದೆ, ಕಾಂಗ್ರೆಸ್ಸಿಗರು ಗೌರವಾನ್ವಿತ ರಾಜ್ಯಪಾಲರು ಮತ್ತು ರಾಜಭವನವನ್ನು ಕೇಂದ್ರದ ಏಜೆಂಟ್ ಎಂದು ಆಕ್ಷೇಪಿಸಿದ್ದರು.
ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಳೆದ ಕೆಲವು ತಿಂಗಳಿನಿಂದ ಬಿಜೆಪಿ ನಿರಂತರ ಹೋರಾಟ ನಡೆಸಿತ್ತು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಭ್ರಷ್ಟಾಚಾರ ವಿರುದ್ಧವೂ ಹೋರಾಟ ಮಾಡಿದ್ದೆವು ಎಂದರು.
ಸ್ವತಃ ಮುಖ್ಯಮಂತ್ರಿ ಅವರ ಕುಟುಂಬವೇ ಫಲಾನುಭವಿಗಳಾಗಿದೆ, ಮೈಸೂರಿನ ಮುಡಾ ಹಗರಣ ವಿರುದ್ಧ ಬಿಜೆಪಿ-ಜೆಡಿಎಸ್ ಒಟ್ಟಾಗಿ ಬೆಂಗಳೂರು-ಮೈಸೂರು ಪಾದಯಾತ್ರೆ ನಡೆಸಿ ಯಶಸ್ವಿ ಹೋರಾಟ ಮಾಡಿತ್ತು.
ಭ್ರಷ್ಟಾಚಾರ ಕಳಂಕ
ಭ್ರಷ್ಟಾಚಾರ ರಹಿತ ಆಡಳಿತ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದರು, ಭ್ರಷ್ಟಾಚಾರ ಕಳಂಕ ಹೊತ್ತ ಅವರು, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಕೂಡಲೇ ರಾಜೀನಾಮೆ ನೀಡಬೇಕು, ನೈತಿಕ ಹೊಣೆ ಹೊತ್ತು ಅವರು ರಾಜೀನಾಮೆ ನೀಡುವ ವಿಶ್ವಾಸವಿದೆ.
ಮುಡಾ ವಿಚಾರದಲ್ಲಿ ತಮ್ಮ ಪಾತ್ರ ಇಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದರು, ಹೈಕೋರ್ಟ್ ಸ್ಪಷ್ಟ ಮಾತುಗಳಲ್ಲಿ ಹೇಳಿದೆ, ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕು, ನಮ್ಮ ಹೋರಾಟಕ್ಕೆ ಮೊದಲ ಜಯ ಸಿಕ್ಕಿದೆ, ಪಕ್ಷದ ಮುಂದಿನ ನಡೆ ಕುರಿತು ಪ್ರಮುಖರು ಹಾಗೂ ಹಿರಿಯರ ಜೊತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದರು.