ಬೆಂಗಳೂರು:ಕರ್ನಾಟಕ ಬಿಜೆಪಿಯಲ್ಲಿ ಭ್ರಷ್ಟಾಚಾರ ಆರೋಪದ ಕಳಂಕ ಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ನಾಯಕನನ್ನು ತೋರಿಸಿದರೆ ನಿಮ್ಮನ್ನು ಗೌರವದಿಂದ ಕರೆಸಿ ಸಾರ್ವಜನಿಕ ಸನ್ಮಾನ ಮಾಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಸವಾಲು ಹಾಕಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಮುಖ್ಯಮಂತ್ರಿ, ದೂರದ ಊರಲ್ಲಿ ಕುಳಿತು ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರವಾಗಿ ಚರ್ಚೆಗೆ ಬನ್ನಿ ಎಂದು ಆಹ್ವಾನಿಸಿದ್ದಾರೆ.
ಕರ್ನಾಟಕ ಮುಖ್ಯಮಂತ್ರಿ ಹುದ್ದೆ ಎರಡೂವರೆ ಸಾವಿರ ಕೋಟಿ ರೂ.ಗಳಿಗೆ ಹರಾಜು ಹಾಕಲಾಗಿದೆ ಎಂಬ ಆರೋಪ ಸ್ವಪಕ್ಷ ನಾಯಕರಿಂದಲೇ ಆರೋಪ ಕೇಳಿ ಬಂದಿದ್ದು ಭ್ರಷ್ಟಾಚಾರದ ಬಗ್ಗೆ ಮೋದಿ ಅವರಿಗೆ ಮಾತನಾಡುವ ನೈತಿಕತೆ ಇಲ್ಲ.
ಮುಖ್ಯಮಂತ್ರಿ ಹುದ್ದೆ ಮಾರಾಟ
ಮುಖ್ಯಮಂತ್ರಿ ಹುದ್ದೆ ಮಾರಾಟ ಮಾಡಲಾಗಿದೆ ಎಂಬುದಾಗಿ ಶಾಸಕರೊಬ್ಬರು ಬಹಿರಂಗವಾಗಿ ಆರೋಪಿಸಿದರೂ ಅವರ ಮೇಲೆ ಕ್ರಮ ಇಲ್ಲ, ದಿನ ಬೆಳಗಾದರೆ ಭ್ರಷ್ಟಾಚಾರ ಆರೋಪದ ಕೆಸರೆರಚಾಟದಲ್ಲಿ ತೊಡಗಿರುವ ಬಿಜೆಪಿ ಶಾಸಕರ ವಿರುದ್ಧವೂ ಕ್ರಮ ಇಲ್ಲ, ಈ ಮೌನಕ್ಕೆ, ನಿಷ್ಕ್ರೀಯತೆಗೆ ಏನು ಕಾರಣ, ಭ್ರಷ್ಟಾಚಾರದಲ್ಲಿ ನೀವೂ ಭಾಗಿಯೇ ಎಂದು ಪ್ರಶ್ನಿಸಿದ್ದಾರೆ.
ಗಣಿಗಾರಿಕೆಗೆ ಕಾನೂನುಬಾಹಿರವಾಗಿ ಭೂಮಿ ಮಂಜೂರು ಮಾಡಿ, ನೂರಾರು ಕೋಟಿ ರೂ. ಹಗರಣ ಆರೋಪ ಎದುರಿಸುತ್ತಿರುವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಕೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿರುವ ನಿಮಗೆ ಇತರರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುವಾಗ ಆತ್ಮಸಾಕ್ಷಿ ಚುಚ್ಚುವುದಿಲ್ಲವೇ.
ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲು ಕರ್ನಾಟಕ ಲೋಕಾಯುಕ್ತರು ಅನುಮತಿ ಕೋರಿರುವ ಬಗ್ಗೆ ರಾಜ್ಯಪಾಲರು ಮೌನ ವಹಿಸಿರುವುದೇಕೆ, ಅವರ ಮೇಲೆ ಒತ್ತಡ ಹೇರುತ್ತಿರುವವರು ಯಾರು.
ಪಿಎಂ ವಾಷಿಂಗ್ ಮೆಷಿನ್
ಮೋದಿ ಅವರೇ, ಕಳೆದ 11 ವರ್ಷಗಳಿಂದ ನಿಮ್ಮ ಕಾರ್ಯಾಲಯದ ವಾಷಿಂಗ್ ಮೆಷಿನ್ ಕೆಲಸ ಮಾಡುತ್ತಿರುವುದನ್ನು ದೇಶ ಗಮನಿಸುತ್ತಿದೆ, ಭ್ರಷ್ಟಾಚಾರ ಆರೋಪಕ್ಕೆ ಒಳಗಾಗಿರುವ ಇತರ ಪಕ್ಷಗಳ ನಾಯಕರನ್ನೆಲ್ಲಾ ವಾಷಿಂಗ್ ಮೆಷಿನ್ನಲ್ಲಿ ಹಾಕಿ ಪರಮ ಪ್ರಾಮಾಣಿಕರನ್ನಾಗಿ ಮಾಡುತ್ತಿರುವ ನಿಮ್ಮ ಚಾಕಚಕ್ಯತೆಗೆ ಶಹಬ್ಬಾಸ್ ಅನ್ನಲೇ ಬೇಕು.
ಕಳೆದ 2014ರಿಂದ ಇದುವರೆಗೆ ಭ್ರಷ್ಟಾಚಾರ ಆರೋಪ ಹೊತ್ತಿರುವ ಇತರೆ ಪಕ್ಷಗಳ 25 ನಾಯಕರು ಬಿಜೆಪಿ ಸೇರಿದ್ದಾರೆ. ಇವರಲ್ಲಿ 23 ನಾಯಕರನ್ನು ಭ್ರಷ್ಟಾಚಾರ ಆರೋಪಗಳಿಂದ ಕೇಂದ್ರ ತನಿಖಾ ಸಂಸ್ಥೆಗಳು ಮುಕ್ತಗೊಳಿಸಿವೆ.
ಹಿಮಂತಾ ಶರ್ಮಾ, ಸುವೇಂದು ಅಧಿಕಾರಿ, ಹೆಚ್.ಡಿ.ಕುಮಾರಸ್ವಾಮಿ, ಅಜಿತ್ ಪವಾರ್, ಅಶೋಕ್ ಚವ್ಹಾಣ್, ನಾರಾಯಣ ರಾಣೆ, ಪ್ರತಾಪ್ ಸರ್ನಾಯಕ್ ಅವರಿಂದ ಹಿಡಿದು ಇತ್ತೀಚಿನ ಏಡ್ಸ್ಟ್ರ್ಯಾಪ್ ಗಿರಾಕಿ ಮುನಿರತ್ನವರೆಗೆ ಎಷ್ಟೊಂದು ಭ್ರಷ್ಟರನ್ನು ವಾಷಿಂಗ್ ಮೆಷಿನ್ನಲ್ಲಿ ತೊಳೆದು ನೀವು ಕ್ಲೀನ್ ಮಾಡಿದ್ದೀರಿ, ಇವೆಲ್ಲ ಧರ್ಮಾರ್ಥ ಸೇವೆಯೇ ಎಂದಿದ್ದಾರೆ.
ಚುನಾವಣಾ ಬಾಂಡ್
ಬಿಜೆಪಿ ಖಜಾನೆಗೆ ಸಂದಾಯವಾಗಿರುವ ಚುನಾವಣಾ ಬಾಂಡ್ಗಳ ಹಿಂದಿನ ಕೊಡುಗೈ ದಾನಿಗಳು ಯಾರು, ಅವರು ಕೊಟ್ಟದ್ದೆಷ್ಟು, ಅದಕ್ಕಾಗಿ ಅವರು ಪಡೆದದ್ದು ಎಷ್ಟು, ಎನ್ನುವುದು ದೇಶದ ಜನರ ಕಣ್ಣಮುಂದಿದೆ.
ನಿಮ್ಮ 11 ವರ್ಷಗಳ ಆಡಳಿತಾವಧಿಯಲ್ಲಿ ಬ್ಯಾಂಕ್ ಲೂಟಿ ಮಾಡಿ ದೇಶ ಬಿಟ್ಟು ಓಡಿಹೋಗಲು ದಾರಿ ಮಾಡಿಕೊಟ್ಟವರು ಯಾರು, ಅದಾನಿ, ಅಂಬಾನಿ ಸಂಪತ್ತು ಎಷ್ಟು ಪಟ್ಟು ಹೆಚ್ಚಾಯಿತು, ಬಡವರ ಗಳಿಕೆ ಎಷ್ಟು ಪಟ್ಟು ಕಡಿಮೆಯಾಯಿತು.
ಭ್ರಷ್ಟಾಚಾರದ ಬಗ್ಗೆ ನೀವು ಚರ್ಚೆ ಪ್ರಾರಂಭಿಸಿರುವುದನ್ನು ಕಂಡು ಸಂತೋಷವಾಯಿತು, ನನ್ನ ವಿರುದ್ಧ ಭ್ರಷ್ಟಾಚಾರದ ಸುಳ್ಳು ಆರೋಪಗಳನ್ನು ಮಾಡಿ ಕುಣಿದಾಡುತ್ತಿರುವ ಪಾತ್ರಧಾರಿಗಳನ್ನಷ್ಟೇ ರಾಜ್ಯದ ಜನ ನೋಡಿದ್ದಾರೆ, ಈಗ ಇದರ ಹಿಂದಿರುವ ಸೂತ್ರಧಾರಿ ಯಾರು ಎನ್ನುವುದು ಕೂಡಾ ಜನರಿಗೆ ಗೊತ್ತಾಗಲಿ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.