ಬೆಂಗಳೂರು:ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿದಂತೆ ದುಷ್ಕರ್ಮಿಗಳ ಮೇಲಿನ ಪ್ರಕರಣಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂಪಡೆದ ಕುರಿತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಬಿಜೆಪಿ ದೂರು ಸಲ್ಲಿಸಿದೆ.
ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಗಲಭೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ಬಗ್ಗೆ ಸರ್ಕಾರದಿಂದ ಸ್ಪಷ್ಟನೆ ಕೇಳುವುದಾಗಿ ರಾಜ್ಯಪಾಲರು ಭರವಸೆ ನೀಡಿದ್ದಾರೆ ಎಂದರು.
ಹುಬ್ಬಳ್ಳಿಯಲ್ಲಿ ಪ್ರತಿಭಟನೆ
ರಾಜ್ಯ ಸರ್ಕಾರದ ಈ ಕ್ರಮ ಖಂಡಿಸಿ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು, ಮತಬ್ಯಾಂಕ್ ಹಾಗೂ ಹಗರಣಗಳ ಮರೆಮಾಚಲು ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವ ಕಾರ್ಯಕ್ಕೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದರು.
ಕುರ್ಚಿ ಅಲುಗಾಡುತ್ತಿರುವ ಸಮಯದಲ್ಲಿ ಮುಸ್ಲಿಮರು ತಮ್ಮ ಪರವಾಗಿದ್ದಾರೆ ಎಂಬುದಾಗಿ ಬಿಂಬಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಈ ನಿರ್ಧಾರ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಿಂದೂಗಳ ವಿರೋಧಿ ಸರ್ಕಾರ
ಇದಕ್ಕೂ ಮುನ್ನ ಬಿಜೆಪಿ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದೂಗಳ ವಿರೋಧಿಯಾಗಿದ್ದು ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ದೇಶದ್ರೋಹಿಗಳನ್ನು ರಕ್ಷಿಸುವ ಕೆಲಸನ್ನು ಮಾಡುತ್ತಿದೆ ಎಂದು ಆರೋಪಿಸಿದರು.
ಅಲ್ಪಸಂಖ್ಯಾತರ ಓಲೈಕೆ ಮಾಡುವ ದುಷ್ಟ ಕಾಂಗ್ರೆಸ್ ಸರ್ಕಾರ, ಹುಬ್ಬಳ್ಳಿಯಲ್ಲಿ 2022ರಲ್ಲಿ ಪೊಲೀಸ್ ಠಾಣೆ ಮೇಲೆ ಕಲ್ಲೆಸೆದು ದಾಳಿ ಮಾಡಿ, ಗಲಭೆ ಸೃಷ್ಟಿಸಿದ್ದ ದೇಶದ್ರೋಹಿಗಳ ಮೇಲಿನ ಮೊಕದ್ದಮೆಗಳನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಿಂದ ಪಡೆದಿದೆ ಎಂದರು.
ಮುಖ್ಯಮಂತ್ರಿ ಕುರ್ಚಿ ಅಲ್ಲಾಡುತ್ತಿದೆ
ಹುಬ್ಬಳ್ಳಿ ಘಟನೆ ವಿಷಯದಲ್ಲಿ ಎನ್‌ಐಎ ತನಿಖೆ ನಡೆಯುತ್ತಿದೆ, ಮುಖ್ಯಮಂತ್ರಿಗಳ ಕುರ್ಚಿ ಅಲ್ಲಾಡುತ್ತಿದೆ, ಯಾವುದೇ ಮಟ್ಟಕ್ಕೆ ಇಳಿಯಲು ಕಾಂಗ್ರೆಸ್ ಸರ್ಕಾರ ಹೇಸುವುದಿಲ್ಲ ಎಂಬುದಕ್ಕೆ ಮೊಕದ್ದಮೆ ಹಿಂಪಡೆದ ಪ್ರಕರಣ ಸಾಕ್ಷಿಯಾಗಿದೆ ಎಂದರು.
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ನಿಶ್ಚಿತ, ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎನ್ನುವ ವಿಜಯೇಂದ್ರ ಭವಿಷ್ಯ ಹೇಳುತ್ತಾರಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದರು, ಹಾಗಿದ್ದರೆ, ಐದು ವರ್ಷಗಳವರೆಗೆ ನೀವೇ ಮುಖ್ಯಮಂತ್ರಿ ಎಂಬುದಾಗಿ ನಿಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಂದ ಹೇಳಿಸಿ ನೋಡೋಣ ಎಂದು ವಿಜಯೇಂದ್ರ ಸವಾಲು ಹಾಕಿದರು.
ಖರ್ಗೆ ಅವರು ಇಂಥ ಹೇಳಿಕೆ ಕೊಡುವುದಿಲ್ಲ, ರಾಜ್ಯ ರಾಜಕಾರಣದ ಕುರಿತು ಪ್ರತಿಕ್ರಿಯೆ ನೀಡುವುದರಿಂದ ತಪ್ಪಿಸಿಕೊಳ್ಳುತ್ತಿದ್ದಾರೆ, ಬಿಜೆಪಿ ಹೋರಾಟದ ನಂತರ ಮುಡಾ ಹಗರಣದಲ್ಲಿ ಕದ್ದ ಮಾಲನ್ನು ವಾಪಸ್ ಕೊಡಲು ಸಿದ್ದರಾಮಯ್ಯ ಅವರು ನಿರ್ಧರಿಸಿದರು, ಮುಖ್ಯಮಂತ್ರಿಗಳ ಪಾಪದ ಕೊಡ ತುಂಬಿದೆ, ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡುವುದು ಸೂರ್ಯ-ಚಂದ್ರರು ಇರುವಷ್ಟೇ ಸತ್ಯ ಎಂದರು.
ಪರಿಶಿಷ್ಟರ ಹಣ ಲೂಟಿ
ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣವನ್ನು ಸರ್ಕಾರ ಲೂಟಿ ಮಾಡಿದೆ, ಇದರ ಬಗ್ಗೆ ಜನರು ಚರ್ಚಿಸುತ್ತಿದ್ದಾರೆ, ಬಡವರಿಗೆ ಮೀಸಲಿಟ್ಟ ನಿವೇಶನಗಳನ್ನು ಮೈಸೂರಿನಲ್ಲಿ ಮುಖ್ಯಮಂತ್ರಿಗಳ ಕುಟುಂಬವೇ ಲೂಟಿ ಮಾಡಿದೆ.
ಎಸ್‌ಇಪಿ/ಟಿಎಸ್‌ಪಿ ಹಣ ದುರುಪಯೋಗ ಪ್ರಕರಣವೂ ಚರ್ಚಾ ವಿಷಯವಾಗಿದೆ, ರಾಜ್ಯದಲ್ಲಿ ಅಭಿವೃದ್ಧಿ ಇಲ್ಲವಾಗಿದೆ, ಇಂಥ ಸರ್ಕಾರದಲ್ಲಿ ಶಾಸಕರಾಗಿರುವ ಬದಲು ಆತ್ಮಹತ್ಯೆ ಮಾಡಿಕೊಳ್ಳುವುದೇ ಒಳಿತೆಂದು ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರು ಹೇಳಿದ್ದರ ಕುರಿತು ಗಮನ ಸೆಳೆದರು.
ಗ್ಯಾರಂಟಿಗಳಿಂದ ಅಭಿವೃದ್ಧಿ ಕೆಲಸ ನಿಂತು ಹೋಗಿದೆ ಎಂಬುದಾಗಿ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ, ಅಭಿವೃದ್ಧಿ ಕೆಲಸ ಸ್ಥಗಿತವಾಗಿದೆ ಎಂಬುದು ಆರ್.ವಿ.ದೇಶಪಾಂಡೆ ಸೇರಿದಂತೆ ಕಾಂಗ್ರೆಸ್‌ನ ಹಲವು ಮುಖಂಡರ ಹೇಳಿಕೆಯಾಗಿದೆ.
ಹರಿಯಾಣ ಚುನಾವಣೆ
ಕಾಂಗ್ರೆಸ್ ಯೋಗ್ಯತೆ ಹರಿಯಾಣ ಮತ್ತು ಜಮ್ಮು-ಕಾಶ್ಮೀರದ ವಿಧಾನಸಭಾ ಚುನಾವಣೆಗಳಲ್ಲಿ ಜಗಜ್ಜಾಹೀರಾಗಿದೆ, ಇಷ್ಟಾದರೂ ಕಾಂಗ್ರೆಸ್‌ಗೆ ಬುದ್ಧಿ ಬಂದಿಲ್ಲ.
ಮುಂದಿನ ದಿನಗಳಲ್ಲಿ ಬಿಜೆಪಿ ಜನಾಂದೋಲನ, ಬೃಹತ್ ಪ್ರತಿಭಟನೆ ನಡೆಸಲಿದೆ ಎಂದು ಅವರು ಪ್ರಕಟಿಸಿದರು.