ಬೆಂಗಳೂರು:ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತದೊಂದಿಗೆ 27 ವರ್ಷಗಳ ನಂತರ ಅಧಿಕಾರ ಗದ್ದುಗೆ ಹಿಡಿಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಪ್ರಧಾನ ಕಾರ್ಯಾಲಯದಲ್ಲಿಂದು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವರು ಹಾಗೂ ಶಾಸಕರು, ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

ಮೋದಿ ಪರ ಘೋಷಣೆ
ಎಲ್ಲರೂ ಪರಸ್ಪರ ಸಿಹಿ ತಿನ್ನಿಸಿ, ಪಟಾಕಿ ಸಿಡಿಸಿ ದೆಹಲಿ ಚುನಾವಣೆಯ ವಿಜಯೋತ್ಸವ ಆಚರಿಸಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಪರ ಘೋಷಣೆಗಳನ್ನು ಕೂಗಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ದೆಹಲಿಯಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ್ದು, ಪಕ್ಷದ ಎಲ್ಲಾ ಮುಖಂಡರು ಕಾರ್ಯಕರ್ತರು ಹಾಗೂ ಮತದಾರರನ್ನು ಅಭಿನಂದಿಸುವುದಾಗಿ ತಿಳಿಸಿದ್ದಾರೆ.
ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಭ್ರಷ್ಟ ಆಡಳಿತದ ಮುಖವಾಡ ಕಳಚಿದೆ, ಆಮ್ ಆದ್ಮಿ ಪಕ್ಷದ ಬಣ್ಣ ಬಯಲಾಗಿದೆ ಎಂದರು.
ಪಕ್ಷ ಶೂನ್ಯ ಸಾಧನೆ
ಈ ಸಂದರ್ಭದಲ್ಲಿ ಟ್ವೀಟ್ ಮಾಡಿರುವ ಆರ್.ಅಶೋಕ್, ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹಾ ಪ್ರಚಾರ ನಡೆಸಿದ್ದರಲ್ಲದೆ, ಪಕ್ಷ ಶೂನ್ಯ ಸಾಧನೆ ಮಾಡುವಲ್ಲಿ ಇವರ ಸಹಕಾರವೂ ಇದೆ ಎಂದು ವ್ಯಂಗ್ಯವಾಡಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆಯ ಕಳಪೆ ಫಲಿತಾಂಶವನ್ನೇ ಆಧಾರವಾಗಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಾರವನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಕರ್ನಾಟಕದಲ್ಲೂ ಕಾಂಗ್ರೆಸ್ ಗತಿ ಏನಾಗಲಿದೆ ಎಂಬ ಕುರಿತು ಪಕ್ಷದ ಹೈಕಮಾಂಡ್‌ಗೆ ರಾಜ್ಯ ನಾಯಕರು ರಹಸ್ಯ ಪತ್ರಗಳನ್ನು ಬರೆಯುತ್ತಿದ್ದಾರೆ ಎಂಬ ಮಾಹಿತಿ ರಾಜಕೀಯ ಪಡಸಾಲೆಯಲ್ಲಿ ಹರಿದಾಡುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.