5 ಷರತ್ತು ವಿಧಿಸಿದ ರಾಜ್ಯ ಹೈಕೋರ್ಟ್
ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಗಣತಿ ಕಾರ್ಯಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿರುವ ರಾಜ್ಯ ಹೈಕೋರ್ಟ್ ಸಮೀಕ್ಷೆ ಮುಂದುವರಿಸಲು ಷರತ್ತು ಬದ್ಧ ಅನುಮತಿ ನೀಡಿದೆ.
ರಾಜ್ಯ ಸರ್ಕಾರ ಯಾವುದೇ ಪೂರ್ವ ತಯಾರಿ ಇಲ್ಲದೆ ಅತುರಾತುರವಾಗಿ ಸಮೀಕ್ಷೆ ನಡೆಸುತ್ತಿದೆ ಎಂದು ಆರೋಪಿಸಿ ಅಖಿಲ ಭಾರತ ಬ್ರಾಹ್ಮಣ ಸಭಾ, ವೀರಶೈವ ಮಹಾಸಭಾ, ರಾಜ್ಯ ಒಕ್ಕಲಿಗರ ಸಂಘ ಸೇರಿದಂತೆ ಹಲವು ಸಂಘಗಳು ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದವು.
ಈ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ.ಜೋಶಿ ಅವರಿದ್ದ ವಿಭಾಗೀಯ ಪೀಠ ಸಮೀಕ್ಷೆ ಮುಂದುವರೆಸಲು ಹಸಿರು ನಿಶಾನೆ ತೋರಿದೆ. ಆದರೆ, ಈ ವೇಳೆ ಐದು ಷರತ್ತುಗಳನ್ನು ಚಾಚು ತಪ್ಪದೇ ಪಾಲಿಸಬೇಕು ಎಂದು ಸರ್ಕಾರ ಮತ್ತು ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚನೆ ನೀಡಿದೆ.
ಸಮೀಕ್ಷೆಯ ಪರ ಮತ್ತು ವಿರುದ್ಧವಾಗಿ ನಡೆದ ಸುಧೀರ್ಘ ವಿಚಾರಣೆಯನ್ನು ಆಲಿಸಿದ ನ್ಯಾಯ ಪೀಠ ಅಂತಿಮವಾಗಿ ಸಾರ್ವಜನಿಕ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ನಡೆಯುತ್ತಿರುವ ಸಮೀಕ್ಷೆಯನ್ನು ನಾವು ನಿಷೇಧಿಸಲು ಸಾಧ್ಯವಿಲ್ಲ. ಆದರೂ ಸಂಗ್ರಹಿಸಿದ ದತ್ತಾಂಶವನ್ನು ಯಾವುದೇ ವ್ಯಕ್ತಿ ಬಹಿರಂಗಪಡಿಸಬಾರದು ಎಂದು ಸೂಚಿಸಿತು.
ದತ್ತಾಂಶವನ್ನು ಸಂಪೂರ್ಣವಾಗಿ ರಕ್ಷಿಸಲಾಗಿದೆ ಮತ್ತು ಗೌಪ್ಯವಾಗಿಡಲಾಗಿದೆ ಎಂದು ಆಯೋಗವು ಖಚಿತಪಡಿಸಿಕೊಳ್ಳಬೇಕು. ಈ ಪ್ರಕರಣ ಇತ್ಯರ್ಥವಾಗುವವರೆಗೆ ಯಾವುದೇ ಕಾರಣಕ್ಕೂ ಸಂಗ್ರಹಿಸಿದ ಮಾಹಿತಿ ಸೋರಿಕೆ ಆಗುವುದಿಲ್ಲ ಎಂದು ಹಿಂದುಳಿದ ವರ್ಗಗಳ ಆಯೋಗ ಅಫಿಡವಿಟ್ ಸಲ್ಲಿಸಬೇಕು ಎಂದು ಆದೇಶಿಸಿತು.
ಸಮೀಕ್ಷೆಯ ಸಮಯದಲ್ಲಿ ಮಾಹಿತಿ ಸಂಗ್ರಹಿಸಲು ಅಧಿಕಾರಿಗಳು ಯಾವುದೇ ಬಲವಂತ ಅಥವಾ ಒತ್ತಡ ಹೇರಬಾರದು.ಜನರು ಸ್ವಯಂ ಪ್ರೇರಣೆಯಿಂದ ನೀಡಿದರಷ್ಟೇ ಮಾಹಿತಿ ಪಡೆಯಬೇಕು ಈ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ಸೂಚಿಸಿ ಪ್ರಕರಣದ ವಿಚಾರಣೆಯನ್ನು ಡಿಸೆಂಬರ್ 2ನೇ ವಾರಕ್ಕೆ ಮುಂದೂಡಿತು.
ಷರತ್ತುಗಳು:
1) ದತ್ತಾಂಶವನ್ನು ಸರ್ಕಾರ ಸೇರಿ ಯಾರಿಗೂ ಬಹಿರಂಗಪಡಿಸಬಾರದು.
2) ದತ್ತಾಂಶದ ಗೌಪ್ಯತೆಯನ್ನು ಹಿಂದುಳಿದ ವರ್ಗಗಳ ಆಯೋಗ ರಕ್ಷಿಸಬೇಕು.
3) ಜನರು ಸ್ವಯಂ ಪ್ರೇರಣೆಯಿಂದ ನೀಡಿದರಷ್ಟೇ ಮಾಹಿತಿ ಪಡೆಯಬೇಕು.
4) ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು.
5) ಮಾಹಿತಿ ನೀಡುವಂತೆ ಜನರಿಗೆ ಯಾವುದೇ ಒತ್ತಡ ಹಾಕಬಾರದು.

