ಬೆಳಗಾವಿ:ಮುಖ್ಯಮಂತ್ರಿ ಗಾದಿಗೆ ಕಳೆದ ಕೆಲವು ದಿನಗಳಿಂದ ಕಾಂಗ್ರೆಸ್‌ನಲ್ಲಿ ಸಮರ ನಡೆಯುತ್ತಿದ್ದು, ಅತಿವೃಷ್ಟಿಯಿಂದ ತತ್ತರಿಸಿರುವ ಕಲ್ಯಾಣ ಕರ್ನಾಟಕ ಭಾಗದ ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸದಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಆಡಳಿತ ಪಕ್ಷದಲ್ಲಿನ ಗಾದಿ ಸಮರ ತಾರಕಕ್ಕೇರುವ ಲಕ್ಷಣಗಳು ಕಂಡುಬರುತ್ತಿದ್ದು, ರೈತರ ಸಂಕಷ್ಟ ಕೇಳುವವರು ಇಲ್ಲದಂತಾಗಿದೆ ಎಂದರು.
ಮಳೆ ಸಂತ್ರಸ್ತರಿಗೆ ಸ್ಪಂದಿಸುತ್ತಿಲ್ಲ
ಗುಲ್ಬರ್ಗ, ಯಾದಗಿರಿ, ರಾಯಚೂರು ಭಾಗದಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಪ್ರವಾಸ ಮಾಡಿ, ರೈತರ ಸಮಸ್ಯೆ ಬಗ್ಗೆ ಗಮನ ಸೆಳೆದರೂ ಸರ್ಕಾರ ಸ್ಪಂದಿಸುತ್ತಿಲ್ಲ.
ಭೀಕರ ಮಳೆಯಿಂದ ತೀವ್ರ ಹಾನಿಗೊಳಗಾದ ಪ್ರದೇಶಗಳಿಗೆ ಕಂದಾಯ, ಕೃಷಿ ಸಚಿವರು ಪ್ರವಾಸ ಮಾಡಿಲ್ಲ, ಜಿಲ್ಲಾ ಉಸ್ತುವಾರಿ ಸಚಿವರು ಸ್ಪಂದಿಸುತ್ತಿಲ್ಲ, ಕೃಷಿ ಇಲಾಖೆ ಅಧಿಕಾರಿಗಳೂ ತಲೆ ಕೆಡಿಸಿಕೊಂಡಿಲ್ಲ.
ಬೆಳಗಾವಿ, ಬಾಗಲಕೋಟೆ, ಬಿಜಾಪುರ ಜಿಲ್ಲೆ ಭಾಗದ ಕಬ್ಬು ಬೆಳೆಗಾರರು ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಿರಂತರ ಹೋರಾಟ, ಪ್ರತಿಭಟನೆ ನಡೆಸುತ್ತಿದ್ದರೂ ರಾಜ್ಯ ಸರ್ಕಾರ ಸಮಸ್ಯೆ ಪರಿಹಾರಕ್ಕೆ ಮುಂದಾಗಿಲ್ಲ.
ಕಬ್ಬು ಬೆಳೆಗಾರರ ಕಾಳಜಿ ಇಲ್ಲ
ಆರು ಮಿಲಿಯನ್ ಟನ್ ಕಬ್ಬು ಅರೆಯುವ ಮೂಲಕ ಉತ್ಪಾದನೆಯಾಗುವ ಮೊಲಾಸೆಸ್, ಎಥೆನಾಲ್‌ನಿಂದ ಸರ್ಕಾರಕ್ಕೆ ತೆರಿಗೆ ರೂಪದಲ್ಲಿ ಸುಮಾರು 50-55 ಸಾವಿರ ಕೋಟಿ ರೂ. ಆದಾಯ ಬರುತ್ತದೆ, ಆದರೂ ಕಬ್ಬು ಬೆಳೆಗಾರರ ಬಗ್ಗೆ ಕಾಳಜಿ ವಹಿಸುತ್ತಿಲ್ಲ.
ಸರ್ಕಾರ ತನ್ನ ಜವಾಬ್ದಾರಿ ಅರಿತು ನಡೆದುಕೊಳ್ಳಬೇಕು, ನಾಡಿಗೆ ಅನ್ನ ನೀಡುವ ರೈತರ ವಿಚಾರ ಬಂದಾಗ ಪಕ್ಷಾತೀತವಾಗಿ ರೈತರ ಪರ ನಿಲ್ಲಬೇಕಾಗುತ್ತದೆ, ಕಬ್ಬು ಬೆಳೆಗಾರರ ಹೋರಾಟಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ ನೀಡುತ್ತದೆ ಎಂದರು.

