ಬೆಂಗಳೂರು:ಬರುವ ಜೂನ್‌ನಲ್ಲಿ ತೆರವಾಗಲಿರುವ ರಾಜ್ಯಸಭೆಯ ನಾಲ್ಕು ಹಾಗೂ ವಿಧಾನ ಪರಿಷತ್‌ನ ಏಳು ಸ್ಥಾನಗಳಿಗೆ ಪಕ್ಷದ ಅಭ್ಯರ್ಥಿಗಳ ಆಯ್ಕೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಕೇರಳಂ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಸರ್ಕಾರ ರಚನೆ ಪೂರ್ಣಗೊಳ್ಳುತ್ತಿದ್ದತೆ ಉಭಯ ನಾಯಕರಿಗೆ ಪಕ್ಷದ ದೆಹಲಿ ವರಿಷ್ಠರು ಬುಲಾವ್ ನೀಡಲಿದ್ದಾರೆ.
ರಾಜ್ಯಸಭಾ ಸದಸ್ಯತ್ವ
ಬರುವ ಜೂನ್ 25ಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಬಿಜೆಪಿಯ ಈರಣ್ಣ ಕಡಾಡಿ ಹಾಗೂ ನಾರಾಯಣ ಕೊರಗಪ್ಪ ಅವರುಗಳ ರಾಜ್ಯಸಭಾ ಸದಸ್ಯತ್ವ ಅವಧಿ ಪೂರ್ಣಗೊಳ್ಳಲಿದೆ.
ಗೋವಿಂದರಾಜ್, ನಸೀರ್ ಅಹಮದ್, ಎಂ.ಟಿ.ಬಿ.ನಾಗರಾಜ್, ಪ್ರತಾಪ್ ಸಿಂಹ ನಾಯಕ್, ತಿಪ್ಪಣ್ಣಪ್ಪ, ಸುನೀಲ್ ವಲ್ಯಾಪುರ್ ಹಾಗೂ ಬಿ.ಕೆ.ಹರಿಪ್ರಸಾದ್ ಅವರ ವಿಧಾನ ಪರಿಷತ್ ಸದಸ್ಯತ್ವ ಅವಧಿ ಜೂನ್ 30ಕ್ಕೆ ಪೂರ್ಣಗೊಳ್ಳಲಿದೆ.
ಈ ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗ ಯಾವುದೇ ಕ್ಷಣದಲ್ಲಿ ವೇಳಾಪಟ್ಟಿ ಪ್ರಕಟಿಸಲಿದ್ದು, ಅದಕ್ಕೂ ಮುನ್ನವೇ ಅಭ್ಯರ್ಥಿಗಳ ಆಯ್ಕೆಗೆ ಮುಖ್ಯಮಂತ್ರಿ ಕಸರತ್ತು ನಡೆಸಿದ್ದಾರೆ.
ವರಿಷ್ಠರಿಗೆ ಮನವಿ
ಈ ನೆಪದಲ್ಲಿ ದೆಹಲಿಗೆ ತೆರಳುವ ಉಭಯ ನಾಯಕರು ರಾಜ್ಯ ಕಾಂಗ್ರೆಸ್‌ನಲ್ಲಿನ ಅಧಿಕಾರ ಹಸ್ತಾಂತರ ಗೊಂದಲಕ್ಕೂ ತೆರೆ ಎಳೆಯುವಂತೆ ವರಿಷ್ಠರಿಗೆ ಮನವಿ ಮಾಡಿಕೊಳ್ಳಲಿದ್ದಾರೆ.
ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಮುಖ್ಯಮಂತ್ರಿ, ತಮಗೆ ಸಂಪುಟ ಪುನರ್ ರಚನೆಗೆ ಅವಕಾಶ ಮಾಡಿಕೊಡುವುದರ ಮೂಲಕ ಗೊಂದಲಗಳಿಗೆ ಇತಿಶ್ರೀ ಹಾಡಿ ಎಂದು ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿಕೊಳ್ಳಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
ಸಿದ್ದರಾಮಯ್ಯ ಅಧಿಕಾರ ಉಳಿಸಿಕೊಳ್ಳಲು ಒಂದೆಡೆ ಕಸರತ್ತು ನಡೆಸಿದರೆ, ಮತ್ತೊಂದೆಡೆ ಶಿವಕುಮಾರ್ ತಮಗೆ ಈ ತಿಂಗಳಲ್ಲೇ ಅಧಿಕಾರ ಹಸ್ತಾಂತರ ಆಗಲಿದೆ ಎಂಬ ವಿಶ್ವಾಸದಲ್ಲಿ ಇದ್ದಾರೆ.
ಮೇ 9 ಇಲ್ಲವೇ 14ರಂದು ದೆಹಲಿಗೆ
ಕೇರಳಂನಲ್ಲಿ ಸರ್ಕಾರ ರಚನೆ ಆಗುತ್ತಿದ್ದಂತೆ ತಮ್ಮನ್ನು ಹಾಗೂ ಮುಖ್ಯಮಂತ್ರಿ ಅವರನ್ನು ಮೇ 9 ಇಲ್ಲವೇ 14ರಂದು ದೆಹಲಿಗೆ ಬರುವಂತೆ ವರಿಷ್ಠರು ಸೂಚಿಸಲಿದ್ದಾರೆ ಎಂಬುದಾಗಿ ಶಿವಕುಮಾರ್ ತಮ್ಮ ಆಪ್ತ ವಲಯದಲ್ಲಿ ಹೇಳಿಕೊಂಡಿದ್ದಾರೆ.
ಮೇ 20ರೊಳಗೆ ಕರ್ನಾಟಕ ಕಾಂಗ್ರೆಸ್‌ನಲ್ಲಿನ ಗೊಂದಲ ಬಗೆಹರಿಸಿ ತಮಗೆ ಮುಖ್ಯಮಂತ್ರಿ ಸ್ಥಾನವನ್ನು ವರಿಷ್ಠರು ದೊರಕಿಸಿಕೊಡಲಿದ್ದಾರೆ ಎಂಬ ಆಶಾಭಾವನೆ ಹೊಂದಿದ್ದಾರೆ.


