ಬೆಂಗಳೂರು:ಮುಂಬರುವ ಡಿಸೆಂಬರ್ ಅಂತ್ಯದೊಳಗೆ 17,000 ಶಾಲಾ ಶಿಕ್ಷಕರ ನೇಮಕ ಮಾಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ನೇಮಕಾತಿಯಿಂದ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ನಿವಾರಣೆ ಆಗಲಿದೆ ಎಂದರು.
ಹಣಕಾಸು ಇಲಾಖೆ ಅನುಮತಿ
ಬಿಜೆಪಿ ಆಡಳಿತದಲ್ಲಿ ಬಾಕಿ ಉಳಿದಿದ್ದ 13,500 ಶಿಕ್ಷಕರ ನಾಮಕಾತಿ ಪೂರ್ಣಗೊಂಡಿದೆ, ಇದಲ್ಲದೆ, ಅನುದಾನಿತ ಶಾಲೆಗಳಲ್ಲಿ 6,000 ಶಿಕ್ಷಕರ ನಾಮಕಾತಿಗೆ ಹಣಕಾಸು ಇಲಾಖೆ ಅನುಮತಿ ನೀಡಿದೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿರುವುದಲ್ಲದೆ, ಸರ್ಕಾರಿ ಶಾಲೆಗಳನ್ನು ಪಬ್ಲಿಕ್ ಶಾಲೆಗಳಾಗಿ ಪರಿವರ್ತಿಸಲು ದೊಡ್ಡ ಹೆಜ್ಜೆ ಇಟ್ಟಿದ್ದೇವೆ.
ಖಾಸಗಿ ಸಹಭಾಗಿತ್ವದಲ್ಲಿ ಸರ್ಕಾರ ಹೆಚ್ಚು ಪಬ್ಲಿಕ್ ಶಾಲೆಗಳನ್ನು ತೆರೆದು ಗ್ರಾಮೀಣ ಮಕ್ಕಳಿಗೆ ಪ್ರಾಥಮಿಕ ಹಂತದಲ್ಲೇ ಇಂಗ್ಲೀಷ್ ಕಲಿಕೆಗೆ ಹೆಚ್ಚು ಒತ್ತು ಕೊಡುತ್ತಿದೆ.
ಪಬ್ಲಿಕ್ ಶಾಲೆಗಳಿಗೆ ಹೆಚ್ಚು ಒತ್ತು
ಉನ್ನತ ಶಿಕ್ಷಣ ಮತ್ತು ಉದ್ಯೋಗದಲ್ಲಿ ಗ್ರಾಮೀಣ ಮಕ್ಕಳಿಗೆ ಹೆಚ್ಚು ಅವಕಾಶ ಕಲ್ಪಿಸುವ ಉದ್ದೇಶದಿಂದ ಸರ್ಕಾರ ಪಬ್ಲಿಕ್ ಶಾಲೆಗಳಿಗೆ ಹೆಚ್ಚು ಒತ್ತು ಕೊಡುತ್ತಿದೆ.
ಸಿದ್ದರಾಮಯ್ಯ ಆಡಳಿತ ಹಾಗೂ ಹಾಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವಧಿಯಲ್ಲೂ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ, ಸರ್ಕಾರ ಎಲ್ಲ ಸವಲತ್ತು ಕಲ್ಪಿಸಿದರೂ ಗ್ರಾಮೀಣ ಭಾಗದಲ್ಲಿ ಮಕ್ಕಳು ಸರ್ಕಾರಿ ಶಾಲೆ ಸೇರ್ಪೆಡೆ ಗಣನೀಯವಾಗಿ ಕುಸಿದಿತ್ತು.
ಶೇ.7.5 ಮೀಸಲಾತಿ
ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಕರೆತರುವ ಉದ್ದೇಶದಿಂದ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ.7.5 ಮೀಸಲಾತಿ ನೀಡಲು ತೀರ್ಮಾನಿಸಲಾಯಿತು.
ಸರ್ಕಾರದ ತೀರ್ಮಾನಗಳಿಂದ ಶಿಕ್ಷಣದ ಗುಣಮಟ್ಟ ಹೆಚ್ಚಿ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ತೇರ್ಗಡೆ ಹೊಂದಲು ಕಾರಣವಾಗಿದೆ ಎಂದರು.


