ಬೆಂಗಳೂರು:ರಾಜ್ಯದಲ್ಲಿನ ತೀವ್ರ ಬರ ಪರಿಸ್ಥಿತಿಯಿಂದ ಭವಿಷ್ಯದಲ್ಲಿ ಜನರಿಗೆ ಆಹಾರಧಾನ್ಯ ಕೊರತೆ ಹಾಗೂ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಲಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ಎಚ್ಚರಿಸಿದ್ದಾರೆ.
ಕಂದಾಯ ಇಲಾಖೆ ಹೊಂದಿರುವ ಡಾ.ಪರಮೇಶ್ವರ್ ಸುದ್ದಿಗಾರರೊಂದಿಗೆ ಮಾತನಾಡಿ, ಮುಂಗಾರು ಮಳೆ ವೈಫಲ್ಯದಿಂದ ಶೇ.82ರಷ್ಟು ಆಹಾರ ಉತ್ಪಾದನೆ ಕುಂಠಿತಗೊಂಡಿದ್ದು, ಆಹಾರ ಕೊರತೆಗೆ ಕಾರಣವಾಗಿದೆ ಎಂದರು.
ಜಲ ಮೂಲಗಳೇ ಬತ್ತುತ್ತಿವೆ
ಜಾನುವಾರುಗಳಿಗೆ ಅಗತ್ಯ ಮೇವಿನ ಲಭ್ಯತೆ ಕಡಿಮೆ ಆಗಿದ್ದು, ಕುಡಿಯುವ ಜಲ ಮೂಲಗಳೇ ಬತ್ತಿರುವಾಗ ನೀರು ಪೂರೈಕೆ ಮಾಡುವುದಾದರೂ ಎಲ್ಲಿಂದ ಎಂದರು.
ಈ ಸಂಕಷ್ಟ ನಿಭಾಯಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದ್ದು, ಕೇಂದ್ರ ಸರ್ಕಾರದಿಂದ ಬರ ಪರಿಹಾರ ಅನುದಾನ ಪಡೆಯಲು ನಿರಂತರ ಪ್ರಯತ್ನ ನಡೆಸಲಾಗುತ್ತಿದೆ.
ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ ಪರಿಶೀಲಿಸಿದ್ದು, ರೈತರೊಂದಿಗೂ ಚರ್ಚೆ ನಡೆಸಲಾಗಿದೆ, ಇತ್ತೀಚೆಗೆ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದ್ದರೂ ರಾಜ್ಯದ ಬಹುತೇಕ ಭಾಗಗಳಲ್ಲಿ ಬರದ ತೀವ್ರತೆ ಕಡಿಮೆಯಾಗಿಲ್ಲ.
ನೀರು ಪೂರೈಕೂ ಕಷ್ಟ
ಈಗಾಗಲೇ ಹಲವೆಡೆ ಟ್ಯಾಂಕರ್ಗಳು ಮತ್ತು ಖಾಸಗಿ ಕೊಳವೆಬಾವಿಗಳ ಮೂಲಕ ಕುಡಿಯುವ ನೀರು ಪೂರೈಸಲಾಗುತ್ತಿದೆ, ಜಲ ಮೂಲಗಳೇ ಬತ್ತಿದರೆ ಟ್ಯಾಂಕರ್ಗಳಿಗೆ ನೀರು ತುಂಬಿಸಿ ಪೂರೈಸುವುದೂ ಕಷ್ಟವಾಗಲಿದೆ, ಪರಿಸ್ಥಿತಿ ಆ ಹಂತಕ್ಕೆ ತಲುಪುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ.
ಕೇಂದ್ರ ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿಗಳ ಪ್ರಕಾರ ಬರಪೀಡಿತ ಪ್ರದೇಶಗಳನ್ನು ಘೋಷಿಸಿ, ಬೆಳೆ ಹಾಗೂ ಇತರ ನಷ್ಟಗಳ ಅಂದಾಜು ಸಿದ್ಧಪಡಿಸಲಾಗುತ್ತದೆ, ಇದರ ಆಧಾರದಲ್ಲಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯಾ ನಿಧಿ ಮಾರ್ಗಸೂಚಿಗಳ ಅನ್ವಯ ಕೇಂದ್ರ ಸರ್ಕಾರದಿಂದ ಪರಿಹಾರದ ಅನುದಾನ ಕೋರಲಾಗುತ್ತದೆ.
ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಗಮನ ಸೆಳೆಯಲಾಗಿದ್ದು, ಮೂರನೇ ಮನವಿಪತ್ರ ಸಿದ್ಧತೆ ಕಾರ್ಯ ನಡೆಯುತ್ತಿದೆ, ಇನ್ನೆರಡು ದಿನಗಳಲ್ಲಿ ಸಿದ್ಧವಾಗಲಿದ್ದು, ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದರು.
ಕೇಂದ್ರಕ್ಕೆ ಮನವಿಪತ್ರ
ಕೇಂದ್ರಕ್ಕೆ ಮನವಿಪತ್ರ ಸಲ್ಲಿಸಲು ಮುಖ್ಯಮಂತ್ರಿ, ನಾನು ಅಥವಾ ನಿಯೋಗ ತೆರಳುವ ಕುರಿತು ಮುಖ್ಯಮಂತ್ರಿ ಅವರೇ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ, ಸರ್ವಪಕ್ಷ ನಿಯೋಗ ಕರೆದೊಯ್ಯುವ ಪ್ರಸ್ತಾಪವನ್ನು ಈ ಹಿಂದೆ ಮುಖ್ಯಮಂತ್ರಿ ಮಾಡಿದ್ದರು, ವಿರೋಧ ಪಕ್ಷದವರು ನಿಯೋಗದಲ್ಲಿ ಭಾಗವಹಿಸುವ ಕುರಿತು ಭಿನ್ನ ನಿಲುವು ವ್ಯಕ್ತಪಡಿಸಿರುವುದರಿಂದ ಮುಂದಿನ ಕ್ರಮದ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಗುವುದು.
ಕೇಂದ್ರ ಸರ್ಕಾರದಿಂದ ಪರಿಹಾರದ ಹಣ ಬಿಡುಗಡೆಯಾದರೆ ಸಂಕಷ್ಟದಲ್ಲಿರುವ ರೈತರು ಹಾಗೂ ಇತರ ಸಂತ್ರಸ್ತರಿಗೆ ನೆರವು ಒದಗಿಸಲು ಅನುಕೂಲವಾಗಲಿದೆ, ಕೇಂದ್ರ ಸರ್ಕಾರ ಅಗತ್ಯ ಅನುದಾನ ಬಿಡುಗಡೆ ಮಾಡಬೇಕಿದೆ.
ಕೇಂದ್ರ ಸರ್ಕಾರದ ಅನುದಾನಕ್ಕಾಗಿ ಕಾಯದೆ ರಾಜ್ಯ ಸರ್ಕಾರ ತನ್ನ ಸಂಪನ್ಮೂಲಗಳಿಂದಲೇ ಬರ ಪರಿಹಾರ ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳುತ್ತಿದ್ದು, ಕುಡಿಯುವ ನೀರು ಪೂರೈಕೆಗೆ ಈಗಾಗಲೇ ಅನುದಾನ ಒದಗಿಸಲಾಗಿದೆ.
ಅಧಿಕಾರಿಗಳಿಂದ ಪರಿಸ್ಥಿತಿ ನಿರ್ವಹಣೆ
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾ ಅಧಿಕಾರಿಗಳು ಪರಿಸ್ಥಿತಿ ನಿರ್ವಹಿಸುತ್ತಿದ್ದು, ಅಗತ್ಯವಿರುವ ಕಡೆಗಳಲ್ಲಿ ಟ್ಯಾಂಕರ್ ಹಾಗೂ ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಪೂರೈಸಲಾಗುತ್ತಿದೆ ಎಂದರು.
ವಿಬಿ-ಜಿ-ರಾಮ್-ಜಿ ಯೋಜನೆಯಡಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದಿಂದ ಇದುವರೆಗೆ ಒಂದು ಪೈಸೆಯೂ ಅನುದಾನ ಬಂದಿಲ್ಲ, ಆದರೂ, ರಾಜ್ಯ ಸರ್ಕಾರವೇ ತನ್ನ ಸಂಪನ್ಮೂಲಗಳಿಂದ ಹಣ ಒದಗಿಸಿ ಕಾಮಗಾರಿಗಳನ್ನು ಮುಂದುವರಿಸುತ್ತಿದೆ.
ರೈತರಿಗೆ ತಲಾ 2,500 ರೂ. ನೀಡಲು ರಾಜ್ಯ ಸರ್ಕಾರಕ್ಕೆ ಸುಮಾರು 1,250 ಕೋಟಿ ರೂ. ವೆಚ್ಚವಾಗುತ್ತಿದೆ, ಇಷ್ಟೊಂದು ಆರ್ಥಿಕ ಹೊರೆ ನಡುವೆಯೂ ಜನರು ಹಾಗೂ ರೈತರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡುತ್ತಿದೆ ಎಂದರು.


