ಕನ್ನಡದಲ್ಲಿ ಟ್ವೀಟ್ ಮಾಡಿ ಟಾಂಗ್ ಕೊಟ್ಟ ಗಜೇಂದ್ರಸಿಂಗ್ ಶೇಖಾವತ್
ಬೆಂಗಳೂರು: ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವುದನ್ನು ನಿಲ್ಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್ ಅವರು ಖಾರವಾಗಿ ತಿಳಿಸಿದ್ದಾರೆ.
ಕೆಂದ್ರ ರಾಜ್ಯಕ್ಕೆ ಮಲತಾಯಿ ಧೋರಣೆ ತೋರುತ್ತಿದೆ ಎಂದು ಮುಖ್ಯಮಂತ್ರಿ ಅವರು ಪ್ರತಿನಿತ್ಯ ಟ್ವೀಟ್ ಮಾಡುತ್ತಿರುವ ಬೆನ್ನಲ್ಲೇ, ಶೇಖಾವತ್ ಅವರು, ಕನ್ನಡ ಮತ್ತು ಇಂಗ್ಲೀಷ್‌ನಲ್ಲಿ ಪ್ರತ್ಯೇಕವಾಗಿ ಟ್ವೀಟ್ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಕೃಷ್ಣರಾಜಸಾಗರ ಅಣೆಕಟ್ಟೆಗೆ ಸಮಾನಂತರವಾಗಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಮೇಕೆದಾಟು ಯೋಜನೆಗೆ ಸಂಬಂಧಿಸಿದ ನಿಮಗೆ ವಿವರಣೆ ನೀಡುತ್ತಿರುವವರು ಸರಿಯಾಗಿ ಮಾಹಿತಿ ನೀಡುತ್ತಿಲ್ಲ.
ಅವರ ಮಾತನ್ನೇ ಕೇಳಿ ನೀವು ಜನರಿಗೆ ಸುಳ್ಳು ಸುದ್ದಿ ನೀಡಬಾರದು. ಇದು ಕಾಂಗ್ರೆಸಿಗರಿಗೆ ಅಂಟಿದ ಚಟ ಎಂದು ನಮಗೆಲ್ಲರಿಗೂ ತಿಳಿದಿದೆ. ಆದರೆ ಒಬ್ಬ ಮುಖ್ಯಮಂತ್ರಿಯೇ ಖುದ್ದಾಗಿ ತಪ್ಪು ಮಾಹಿತಿಗಳನ್ನು ಬಿತ್ತಿ ಜನಮಾನಸವನ್ನು ಹಾಳುಗೆಡವಲು ಮುಂದಾಗುತ್ತಾರೆಂದು ನಾವು ಭಾವಿಸಿರಲಿಲ್ಲ ಎಂದು ತೀಕ್ಷಣವಾಗಿ ಪ್ರತಿಕ್ರಿಯಿಸಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ಸತ್ಯದ ಘೋರಿ ಕಟ್ಟಿ ಸುಳ್ಳಿನ ವಿಜೃಂಭಣೆ ಮಾಡುವಾಗ ಕನಿಷ್ಠ ಆತ್ಮಸಾಕ್ಷಿಯನ್ನಾದರೂ ಪ್ರಶ್ನಿಸಿಕೊಳ್ಳಿ. ಇಲ್ಲವಾದರೆ ಸುಳ್ಳಿನ ಉಪಾಸನೆಯೇ ನಿಮ್ಮ ನಿತ್ಯಕರ್ಮವೆಂದು ಕರ್ನಾಟಕದ ಜನ ನಿಮ್ಮ ಬಗ್ಗೆ ಕನಿಕರ ಹಾಗೂ ತಿರಸ್ಕಾರವನ್ನು ತೋರಬಹುದು ತಿಳಿಸಿದ್ದಾರೆ.
ಮೇಕೆದಾಟು ಯೋಜನೆಯ ಸ್ಥಿತಿ-ಗತಿ ಹಾಗೂ ವಾಸ್ತವಾಂಶ ಏನೆಂಬುದು ನಿಮಗೆ ಚೆನ್ನಾಗಿ ತಿಳಿದಿದೆ. ನಿಮಗೆ ಬ್ರೀಫೀಂಗ್ ತಂಡ ನೀಡಿದ ಅರ್ಧಂಬರ್ದ ಮಾಹಿತಿ ಆಧರಿಸಿ ನೀವು ತಪ್ಪು ಮಾಹಿತಿಗಳ ಸರಣಿಯನ್ನೇ ಹರಿಬಿಟ್ಟಂತೆ ತೋರುತ್ತದೆ. ಹೀಗಾಗಿ ವಾಸ್ತವ ಏನೆಂಬುದನ್ನು ನಾವೇ ಹೇಳಬೇಕಾಗಿದೆ ಎಂದು ತಿರುಗೇಟು ನೀಡಿದ್ದಾರೆ.
ಮೊದಲನೆಯದಾಗಿ ಸಿಡಬ್ಲ್ಯುಎಂಎಯ ಹಲವು ಸಭೆಗಳಲ್ಲಿ ಮೇಕೆದಾಟು ಯೋಜನೆಯ ಡಿಪಿಆರ್ ಕುರಿತು ಚರ್ಚೆಯನ್ನು ಅಜೆಂಡಾ ವಿಷಯವಾಗಿ ಸೇರಿಸಲಾಗಿತ್ತು. ಆದರೆ, ಈ ಕಾರ್ಯಸೂಚಿಯ ಬಗ್ಗೆ ನೆರೆಯ ರಾಜ್ಯಗಳ ನಡುವೆ ಒಮ್ಮತ ಮೂಡದೇ ಇರುವುದರಿಂದ ಈ ಬಗ್ಗೆ ಚರ್ಚೆ ನಡೆಸಲು ಸಾಧ್ಯವಾಗಿಲ್ಲ. ಇದು ಕೇಂದ್ರದ ತಪ್ಪಲ್ಲ ಎಂದಿದ್ದಾರೆ.
ಕಳಸಾ ಮತ್ತು ಬಂಡೂರ ನಾಲೆ ಯೋಜನೆ ಡಿಪಿಆರ್‌ಗಳನ್ನು ಈಗಾಗಲೇ ಕೇಂದ್ರ ಜಲ ಆಯೋಗ (ಸಿಡಬ್ಲ್ಯೂಸಿ) ಕೆಲವು ಷರತ್ತುಗಳೊಂದಿಗೆ ಅನುಮೋದಿಸಿದೆ. ಅದನ್ನು ಕರ್ನಾಟಕ ಸರ್ಕಾರಕ್ಕೆ ಈಗಾಗಲೇ ತಿಳಿಸಲಾಗಿದೆ. ಈ ಮಾಹಿತಿಯನ್ನು ನೀವು ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿದ್ದೀರಲ್ಲವೇ ? ಎಂದು ಅವರು ಪ್ರಶ್ನಿಸಿದ್ದಾರೆ.
ಕಳೆದ ೨೦೧೭ರಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ತ್ವರಿತ ನೀರಾವರಿ ಕಾರ್ಯಕ್ರಮದ ಅಡಿಯಲ್ಲಿ ಆದ್ಯತೆ ನೀಡಲಾದ ಕರ್ನಾಟಕದ ೫ ಯೋಜನೆಗಳಲ್ಲಿ ಮೂರು ಪೂರ್ಣಗೊಂಡಿವೆ. ಎರಡು ಕಾಮಗಾರಿ ಚಾಲನೆಯಲ್ಲಿವೆ.
ಈ ಯೋಜನೆಗಾಗಿ ಕೇಂದ್ರದ ಪಾಲಿನ ೧೨೩೮.೩೦ ಕೋಟಿ ರೂ.ಗಳ ಪೈಕಿ ೧೧೯೦.೦೫ ಕೋಟಿ ರೂ. ಈಗಾಗಲೇ ಬಿಡುಗಡೆಯಾಗಿದೆ. ಇದು ರಾಜ್ಯದ ಹಣಕಾಸು ಸಚಿವಾಲಯವನ್ನೂ ನಿಭಾಯಿಸುತ್ತಿರುವ ನಿಮ್ಮ ಗಮನಕ್ಕೆ ಬಾರದಿರುವುದು ಚೋದ್ಯವಲ್ಲವೇ? ಎಂದು ಅವರು ಕೇಳಿದ್ದಾರೆ.
ಅಟಲ್ ಭೂ ಜಲ ಯೋಜನೆ ಅಡಿಯಲ್ಲಿ, ಕರ್ನಾಟಕಕ್ಕೆ ಕೇಂದ್ರದಿಂದ ಈಗಾಗಲೇ ೬೨೯.೫೪ ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಆದರೆ, ಅ.೨೮ರವರೆಗೆ ಕೇವಲ ೨೭೪.೦೫ ಕೋಟಿ ರೂ. ಮಾತ್ರ ಬಳಕೆ ಮಾಡಿಕೊಂಡಿದ್ದೀರಿ ಎಂದು ಹೇಳಿದ್ದಾರೆ.