ನಮ್ಮ ಶಾಸಕರಿಗೆ ಚಾಕೊಲೇಟ್ ನೀಡಲು ಬಿಜೆಪಿ ಪ್ರಯತ್ನದ ಆರೋಪ
ಬೆಂಗಳೂರು: “ಕಾಂಗ್ರೆಸ್ ಪಕ್ಷದಲ್ಲಿ ಕಿತ್ತಾಟ ಇಲ್ಲ. ಕಿತ್ತಾಟವಿರುವುದು ಬಿಜೆಪಿಯಲ್ಲಿ. ಇದರಿಂದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆಯ್ಕೆ ಮಾಡಲು ಆಗಿಲ್ಲ” ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.
ಕಾಂಗ್ರೆಸ್ ನಾಯಕರು ಕಚ್ಚಾಡುತ್ತಿದ್ದಾರೆ ಎಂಬ ಮಾಜಿ ಸಿಎಂ ಯಡಿಯೂರಪ್ಪ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, “ನಮ್ಮಲ್ಲಿ ಯಾವುದೇ ಜಗಳ ಇಲ್ಲ. ಬಿಜೆಪಿ ಮುಖಂಡರು ತಮ್ಮ ವೈಫಲ್ಯ ಮುಚ್ಚಿಡಲು ಈ ರೀತಿ ಮಾತನಾಡುತ್ತಾರೆ. ನಮ್ಮ ಶಾಸಕರುಗಳಿಗೆ ಚಾಕೊಲೇಟ್ ನೀಡಲು ಪ್ರಯತ್ನಿಸುತ್ತಿದ್ದಾರೆ” ಎಂದು ತಿಳಿಸಿದರು.
ರಾಜ್ಯ ಒಕ್ಕಲಿಗರ ಸಂಘದ ಕೇಂದ್ರ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಪರೇಷನ್ ಕಮಲ ಮಾಡುತ್ತಿಲ್ಲ, ಬೇಕಾದರೆ ಅವರೇ ತನಿಖೆ ಮಾಡಿಸಲಿ ಎಂಬ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ಬಗ್ಗೆ ಕೇಳಿದಾಗ, “ಯಡಿಯೂರಪ್ಪ ಅವರ ಸಲಹೆ ಗಮನದಲ್ಲಿ ಇಟ್ಟುಕೊಳ್ಳುತ್ತೇವೆ” ಎಂದು ತಿಳಿಸಿದರು.
ನಾನೇನೂ ಮಾತಾಡೋದಿಲ್ಲ:
ಐದು ವರ್ಷಗಳ ಕಾಲ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ಈ ವಿಚಾರವಾಗಿ ಬಹಿರಂಗವಾಗಿ ಮಾತನಾಡುವುದಿಲ್ಲ. ಪಕ್ಷ ಹೇಳಿದ್ದನ್ನು ಪಾಲಿಸುವುದಷ್ಟೆ ನಮಗೆ ಗೊತ್ತು” ಎಂದು ಹೇಳಿದರು.