ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಪ್ರಗತಿಯಲ್ಲಿ
ನವದೆಹಲಿ: ರಾಜ್ಯದಲ್ಲಿ ಪ್ರಗತಿಯಲ್ಲಿರುವ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ನೀಡಬೇಕಾಗಿರುವ ತನ್ನ ಪಾಲಿನ ಹಣವನ್ನು ತ್ವರಿತವಾಗಿ ಬಿಡುಗಡೆ ಮಾಡುವಂತೆ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಅವರು ಕೇಂದ್ರ ಜಲ ಶಕ್ತಿ ಕಾರ್ಯದರ್ಶಿ ದೆಬಾಷಿಶ್ ಮುಖರ್ಜಿ ಅವರಿನ್ನು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಮಾಡಿದ್ದಾರೆ.
ಭದ್ರಾ ಮೇಲ್ದಂಡೆ ಯೋಜನೆಯನ್ನು ಕೇಂದ್ರ ಸರ್ಕಾರ ಕಳೆದ ಬಜೆಟ್ ನಲ್ಲಿ ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಿದ್ದು, ಈ ಯೋಜನೆಗಾಗಿ 5300 ಕೋಟಿ ಹಣ ನೀಡುವುದಾಗಿ ಸಹ ಭರವಸೆ ನೀಡಿತ್ತು.
ಇದೀಗ ಈ ಯೋಜನೆಗೆ ಸಂಬಂಧಿಸಿದ ಕಡತ ಪ್ರಧಾನಮಂತ್ರಿ ಅವರ ಕಾರ್ಯಾಲಯದಲ್ಲಿದೆ. ಮುಂದೆ ನಡೆಯಲಿರುವ ಕೇಂದ್ರ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಈ ಕಡತವನ್ನು ಮಂಡಿಸಿ ರಾಷ್ಟ್ರೀಯ ಯೋಜನೆಯಾಗಿ ಘೋಷಿಸಿರುವುದನ್ನು ಅನುಮೋದಿಸುವುದಾಗಿ ಕೇಂದ್ರ ಜಲ ಶಕ್ತಿ ಕಾರ್ಯದರ್ಶಿ ದೇಬಶ್ರೀ ಮುಖರ್ಜಿ ಜಯಚಂದ್ರ ಅವರಿಗೆ ಮಾತುಕತೆ ವೇಳೆ ತಿಳಿಸಿದ್ದಾರೆ .
ಕಳೆದ ಬಾರಿ ದೆಹಲಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಟಿ.ಬಿ.ಜಯಚಂದ್ರ ಅವರು ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡಲು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಬೇಕು ಎಂದು ಮನವಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಜಲಶಕ್ತಿ ಕಾರ್ಯದರ್ಶಿಯವರನ್ನು ಭೇಟಿ ಮಾಡಿ ಮತ್ತೊಮ್ಮೆ ಜಯಚಂದ್ರ ಅವರು ಮನವಿ ಮಾಡಿದ್ದಾರೆ.
ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಪ್ರಗತಿಯಲ್ಲಿದ್ದು ಕೆಲವು ಭಾಗಗಳಲ್ಲಿ ಭೂಸ್ವಾಧೀನ ಮಾಡಿಕೊಳ್ಳಬೇಕಾಗಿದೆ.
ಹೀಗಾಗಿ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಕೇಂದ್ರ ಸರ್ಕಾರ ಅಧಿಕೃತವಾಗಿ ಘೋಷಿಸಿದರೆ ನಿಗದಿತ ಸಮಯದಲ್ಲಿ ಭದ್ರಾ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸಬಹುದು ಎಂದು ಜಯಚಂದ್ರ ಅವರು ಕಾರ್ಯದರ್ಶಿ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.
ಈ ಯೋಜನೆಯಿಂದ ಮಧ್ಯ ಕರ್ನಾಟಕದ ಹಲವು ಜಿಲ್ಲೆಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ಅನುಕೂಲವಾಗಲಿದೆ ಎಂದು ಅವರು ಮನವರಿಕೆ ಮಾಡಿಕೊಟ್ಟಿದ್ದಾರೆ.
ಮೇಕೆದಾಟು ಯೋಜನೆಗೆ ಇರುವ ಅಡೆತಡೆ ನಿವಾರಿಸಿ
ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳನ್ನು ನಿವಾರಿಸಿ ಅನುಮೋದನೆ ನೀಡುವಂತೆ ಸಹ ಕೋರಿದ್ದಾರೆ. ದೀರ್ಘಕಾಲದಿಂದ ನೆನೆಗುದಿಗೆ ಬಿದ್ದಿರುವ ಮೇಕೆದಾಟು ಯೋಜನೆಗೆ ಕೇಂದ್ರ ಪರಿಸರ ಇಲಾಖೆ, ಜಲ ಶಕ್ತಿ ಇಲಾಖೆ ಸೇರಿದಂತೆ ವಿವಿಧ ಪ್ರಾಧಿಕಾರಗಳಿಂದ ಅನುಮತಿ ಕೊಡಿಸಿ, ಮೇಕೆದಾಟು ಯೋಜನೆ ಕಾಮಗಾರಿ ಆರಂಭಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಬೇಕು ಎಂದು ಇದೇ ವೇಳೆ ಜಯಚಂದ್ರ ಅವರು ಕೇಂದ್ರ ಜಲ ಶಕ್ತಿ ಕಾರ್ಯದರ್ಶಿಯವರಿಗೆ ಮನವಿ ಮಾಡಿದ್ದಾರೆ.
ಮೇಕೆದಾಟು ಸಮತೋಲಿತ ಜಲಾಶಯ ನಿರ್ಮಾಣ ಮಾಡುವುದರಿಂದ ಬೆಂಗಳೂರು ಹಾಗೂ ಸುತ್ತಮುತ್ತಲ ಜಿಲ್ಲೆಗಳಿಗೆ ಕುಡಿಯುವ ನೀರನ್ನು ಒದಗಿಸಲು ಅನುಕೂಲವಾಗುತ್ತದೆ. ಅಷ್ಟೇ ಅಲ್ಲ ಬರಗಾಲದ ಸಮಯದಲ್ಲಿ ತಮಿಳುನಾಡಿಗೆ ಸಹ ನೀರು ಬಿಡಲು ಅನುಕೂಲವಾಗಲಿದೆ ಎಂದು ಇದೇ ವೇಳೆ ಜಯಚಂದ್ರ ಅವರು ಮನವಿ ಮಾಡಿದ್ದಾರೆ.