ಮಾಜಿ ಶಾಸಕರಾದ ಗೌರಿಶಂಕರ್, ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಸಿಎಂ ಆರೋಪ
ಬೆಂಗಳೂರು: ಜೆಡಿಎಸ್ ಈಗ ತನ್ನ ಸ್ವರೂಪದಲ್ಲಿ ಜನ ಸಮುದಾಯದ ರಾಜಕೀಯ ಪಕ್ಷವಾಗಿ ಉಳಿದಿಲ್ಲ, ಕೇವಲ ಕುಟುಂಬಕ್ಕೆ ಸೀಮಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಟೀಕಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಗೌರಿಶಂಕರ್ ಮತ್ತು ದಾಸರಹಳ್ಳಿ ಮಂಜುನಾಥ್ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ ಮಾಡಿಕೊಂಡ ನಂತರ ಮಾತನಾಡಿದ ಮುಖ್ಯಮಂತ್ರಿ ಅವರು, ಜೆಡಿಎಸ್ನ ಡಬಲ್ ಗೇಮ್ ಅನ್ನು ಸರಿಯಾಗಿ ಅರ್ಥ ಮಾಡಿಕೊಂಡಿರುವ ಇವರೂ ಸೇರಿದಂತೆ ಬಹಳಷ್ಟು ಮಂದಿ ಕಾಂಗ್ರೆಸ್ ಕದ ತಟ್ಟಿದ್ದಾರೆ ಎಂದರು.
ನಾವಿದ್ದಾಗ ಜನತಾದಳ ಸೆಕ್ಯುಲರ್ ಆಗಿತ್ತು. ಈಗ “ಎಸ್” ಕಿತ್ತೋಗಿ ಕೇವಲ ಜನತಾದಳ ಆಗಿ ಉಳಿದಿದೆ. ಹಿಂದೆಯೂ ಬಿಜೆಪಿ ಜತೆ ಕೈ ಜೋಡಿಸಿದ್ದ ಕಾರಣಕ್ಕೆ ಜನತಾ ಪರಿವಾರದಲ್ಲಿ ಸೆಕ್ಯುಲರ್ ಸಿದ್ಧಾಂತದವರೆಲ್ಲಾ ಪ್ರತ್ಯೇಕವಾಗಿ ಉಳಿದೆವು.
ಈಗ ಜೆಡಿಎಸ್ ಮತ್ತೆ ಬಿಜೆಪಿ ಜತೆ ಬೆರೆಯುತ್ತಿದೆ. ನಾನು ಈ ಜೆಡಿಎಸ್ ಅನ್ನು ಬಿಜೆಪಿಯ “ಬಿ” ಟೀಮ್ ಅಂದಿದ್ದಕ್ಕೆ ಸಿಟ್ಟಾಗಿದ್ದರು. ಅಂದು ನಾನು ಹೇಳಿದ್ದನ್ನು ಇಂದು ಅವರೇ ಸಾಬೀತುಪಡಿಸಿದ್ದಾರೆ ಎಂದು ಸಮರ್ಥಿಸಿಕೊಂಡರು.
ನಾವು ಗ್ಯಾರಂಟಿ ಕಾರ್ಯಕ್ರಮಗಳನ್ನು ಕೊಟ್ಟಾಗ ಅವನ್ನು ಟೀಕಿಸಿದ್ದ ಪ್ರಧಾನಿಗಳು ಈಗ “ಮೋದಿ ಗ್ಯಾರಂಟಿ” ಹೆಸರಿನಲ್ಲಿ ಪ್ರಚಾರ ಮಾಡುತ್ತಿದ್ದಾರೆ ಎಂದು ಪ್ರಸ್ತಾಪಿಸಿದ ಮುಖ್ಯಮಂತ್ರಿ, ಪ್ರಧಾನಿ ನರೇಂದ್ರ ಮೋದಿಯವರೇ, ನಿಮಗೆ ನಾಚಿಕೆ ಆಗತ್ತೋ ಇಲ್ವೋ ಎಂದು ಪ್ರಶ್ನಿಸಿದರು.
ರಾಜ್ಯದ, ಕನ್ನಡ ನಾಡಿನ ಜನತೆಯ ಹಣ ಇರುವ ಸರ್ಕಾರದ ಕಾರ್ಯಕ್ರಮಗಳನ್ನು ಪ್ರಧಾನಿ ಮೋದಿಯವರು ತಮ್ಮ ಕಾರ್ಯಕ್ರಮ ಎಂದು ಬಿಂಬಿಸಿ ಪ್ರಚಾರ ಪಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿ. ಇದಕ್ಕೆ ರಾಜ್ಯದ ಜನತೆಯ ಮತ್ತು ನಮ್ಮಗಳ ಬೆಂಬಲ ಇಲ್ಲ ಎಂದು ಸ್ಪಷ್ಟಪಡಿಸಿದರು.