ಚಿಕಿತ್ಸೆ ಸಿಗದೆ ಯಾರೂ ಪ್ರಾಣ ಕಳೆದುಕೊಳ್ಳುವಂತಾಗಬಾರದು
ಬೆಂಗಳೂರು: ಜಯದೇವ ಆಸ್ಪತ್ರೆಯ ಗುಣಮಟ್ಟದ ಆರೋಗ್ಯ ಸೇವೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಲಭ್ಯವಾಗಬೇಕು ಎನ್ನುವುದು ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 262 ಆಧುನಿಕ ಜೀವ ರಕ್ಷಕ ಆಂಬ್ಯುಲೆನ್ಸ್ ಗಳನ್ನು ಜನಸೇವೆಗೆ ಅರ್ಪಿಸಿ ಮಾತನಾಡಿದ ಅವರು, ಹಳೆಯ ಹಾಗೂ ಕೊಳಕು ಬಟ್ಟೆ ಹಾಕಿಕೊಂಡು ಬರುವ ಬಡವರನ್ನೂ ಮಾನವೀಯವಾಗಿ ನಡೆಸಿಕೊಂಡು ತಾರತಮ್ಯ ಮಾಡದೆ ಉತ್ತಮ ಆರೋಗ್ಯ ಸೇವೆ ನೀಡಿ ಎಂದು ವೈದ್ಯರಿಗೆ ಕಿವಿಮಾತು ಹೇಳಿದರು.
ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ಧ
ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ಧವಾಗಿದೆ. ಚಿಕಿತ್ಸೆ ಸಿಗದೆ ಯಾರೂ ಪ್ರಾಣ ಕಳೆದುಕೊಳ್ಳುವಂತಾಗಬಾರದು ಎಂಬ ಕಾರಣಕ್ಕೆ ತುರ್ತು 108 ಆಂಬ್ಯುಲೆನ್ಸ್ಗಳನ್ನು ಆರೋಗ್ಯ ಸೇವೆಗೆ ಒದಗಿಸಲಾಗಿದೆ.
ರಾಜ್ಯದಲ್ಲಿ 840 ಕ್ಕೂ ಹೆಚ್ಚು ಆಂಬ್ಯುಲೆನ್ಗಳ ಅಗತ್ಯವಿದೆ. ಪ್ರತೀ ತಾಲ್ಲೂಕಿನಲ್ಲಿ 4 ಆಂಬ್ಯುಲೆನ್ಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿದಿನ ನೂರಾರು ಮಂದಿಗೆ ತುರ್ತು ಆರೋಗ್ಯ ಸೇವೆ ಒದಗಿಸುತ್ತಿವೆ, ಪ್ರಾಥಮಿಕ ತುರ್ತು ಚಿಕಿತ್ಸೆ ಪ್ರಾಣ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದರು.
ಪ್ರತೀ ಜಿಲ್ಲೆಯಲ್ಲಿ ಎಂಆರ್ಐ ಸ್ಕ್ಯಾನಿಂಗ್ ಸೌಲಭ್ಯ
ಪ್ರತೀ ಜಿಲ್ಲೆಯಲ್ಲಿ ಎಂಆರ್ಐ ಸ್ಕ್ಯಾನಿಂಗ್ ಸೌಲಭ್ಯ ಇರಬೇಕು. ಖಾಸಗಿ ಡಯಾಗ್ನಸ್ಟಿಕ್ ಸೆಂಟರ್ಗಳಲ್ಲಿ ಸೇವಾ ವೆಚ್ಚ ದುಬಾರಿ ಆಗಿರುವುದರಿಂದ ಬಡವರಿಗೆ ಬಹಳ ಕಷ್ಟ ಆಗುತ್ತಿದೆ.
ಮುಖ್ಯಮಂತ್ರಿ ಪರಿಹಾರ ನಿಧಿಗೆ ಸಾವಿರಾರು ಮಂದಿ ಬೇಡಿಕೆ ಅರ್ಜಿಗಳು ಬರುತ್ತಿವೆ, ಸರ್ಕಾರಿ ಆಸ್ಪತ್ರೆಗಳಲ್ಲೇ ಉತ್ತಮ ಗುಣಮಟ್ಟದ ಚಿಕಿತ್ಸೆ ಸಿಗುವ ವಾತಾವರಣ ರಾಜ್ಯದಲ್ಲಿ ಸೃಷ್ಟಿ ಆಗುತ್ತಿದೆ.
ಜಯದೇವ ಆಸ್ಪತ್ರೆಯಿಂದ ಉತ್ತಮ ಸೇವೆ ಸಾಧ್ಯವಾಗಿರುವಾಗ ಉಳಿದ ಕಡೆಗಳಲ್ಲೂ ಅದೇ ಗುಣಮಟ್ಟದ ಸೇವೆ ಒದಗಿಸಲು ಸಾಧ್ಯವಿದೆ.
ರಾಜ್ಯ ಸರ್ಕಾರ ಈ ದಿಕ್ಕಿನಲ್ಲಿ ಶ್ರಮಿಸುತ್ತಿದೆ, ಉತ್ತರ ಕರ್ನಾಟಕದ ಕಡೆ ಹೆಚ್ಚಿನ ಗಮನ ನೀಡಿ ಎಂದು ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಸಲಹೆ ನೀಡಿದರು.