ಗ್ಯಾರೆಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳು
ಬೆಳಗಾವಿ:ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿರೋಧಪಕ್ಷದವರು ಕೇಳುವ ಪ್ರತಿಯೊಂದು ಪ್ರಶ್ನೆಗೂ ಉತ್ತರಿಸಲು ಸರ್ಕಾರ ಸಿದ್ಧವಿದೆ, ಉತ್ತರ ಕರ್ನಾಟಕದ ಸಮಸ್ಯೆಗಳಿಗೂ ಗಮನಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ.
ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಜಾರಿಗೆ ತಂದಿರುವ ಗ್ಯಾರೆಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳು, ತೆಲಂಗಾಣದಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಗೆಲುವು ಸಾಧಿಸಿದೆ, ಮಧ್ಯಪ್ರದೇಶದಲ್ಲಿ ಗೆಲುವು ಸಾಧಿಸಿದ ಬಿಜೆಪಿ ಸಹಾ ಗ್ಯಾರೆಂಟಿ ಯೋಜನೆಗಳನ್ನು ಘೋಷಿಸಿತ್ತು ಎಂದರು.
ಚುನಾವಣೆಯಲ್ಲಿ ಗೆಲುವು ಸಾಧಿಸಲೆಂದು ಕಾಂಗ್ರೆಸ್ ಗ್ಯಾರೆಂಟಿ ಯೋಜನೆಗಳನ್ನು ಘೋಷಿಸಲಿಲ್ಲ, ಬಡಜನರಿಗೆ ಆರ್ಥಿಕ ಹಾಗೂ ಸಾಮಾಜಿಕವಾಗಿ ಶಕ್ತಿ ತುಂಬುವ ಪ್ರಾಮಾಣಿಕತೆಯಿಂದ ರಾಜ್ಯ ಸರ್ಕಾರ ಜಾರಿಗೊಳಿಸಿದೆ.
ಸರ್ಕಾರ ರಚನೆಯಾಗಿ ಆರು ತಿಂಗಳು ಕಳೆದರೂ ಬಿಜೆಪಿ ವಿರೋಧಪಕ್ಷದ ನಾಯಕರನ್ನು ಆಯ್ಕೆ ಮಾಡಲಾಗಲಿಲ್ಲ, ಅವರಿಗೆ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕತೆಯೂ ಇಲ್ಲ, ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ ನಡೆಸಿದರೂ, ಎದುರಿಸಲು ಸರ್ಕಾರ ಸಿದ್ಧ ಎಂದರು.