ರೈತರು ಸಹಕಾರಿ ಸಾಲ ತೀರಿಸಿದರೆ ಬಡ್ಡಿ, ಚಕ್ರ ಬಡ್ಡಿ ಮನ್ನಾ
ಬೆಳಗಾವಿ: ನಂಜುಂಡಪ್ಪನವರ ವರದಿ ಅನುಷ್ಠಾನ ಹಾಗೂ ಅದರ ಫಲಶ್ರುತಿ ಅಧ್ಯಯನ ಮಾಡಲು ನುರಿತ ಅರ್ಥಶಾಸ್ತ್ರಜ್ಞರೊಬ್ಬರ ಅಧ್ಯಕ್ಷತೆಯಲ್ಲಿ ಹೈಪವರ್ ಕಮಿಟಿ ರಚಿಸಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿಂದು ಘೋಷಣೆ ಮಾಡಿದ್ದಾರೆ.
ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ಕೊನೆಯ ದಿನವಾದ ಇಂದು ಮುಖ್ಯಮಂತ್ರಿ ಅವರು, ರೈತರಿಗೂ ಕೊಡುಗೆ ಘೋಷಣೆ ಮಾಡಿದ್ದಾರೆ.
ಬಡ್ಡಿ, ಚಕ್ರ ಬಡ್ಡಿ ಮನ್ನಾ ಒಂದು ಬಾರಿಗೆ ಅನ್ವಯ
ಸಹಕಾರಿ ಬ್ಯಾಂಕ್‌ಗಳಲ್ಲಿ ರೈತರು ಪಡೆದಿರುವ ಸಾಲವನ್ನು ಒಂದು ಬಾರಿಗೆ ಅನ್ವಯವಾಗುವಂತೆ ತೀರಿಸಿದರೆ, ಸಾಲದ ಮೇಲಿನ ಬಡ್ಡಿ ಹಾಗೂ ಚಕ್ರ ಬಡ್ಡಿಯನ್ನು ಮನ್ನಾ ಮಾಡಲಾಗುವುದು ಎಂದಿದ್ದಾರೆ.
ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೂ ಹತ್ತು ಹಲವು ಘೋಷಣೆ ಮಾಡಿರುವ ಮುಖ್ಯಮಂತ್ರಿ ಅವರು, ಇದುವರೆಗೂ ಈ ಭಾಗಕ್ಕೆ ವೆಚ್ಚವಾಗಿರುವ ಹಣ ಫಲ ನೀಡಿದೆಯೇ ಎಂಬ ಬಗ್ಗೆ ಉನ್ನತಾಧಿಕಾರ ಸಮಿತಿ ವರದಿ ನೀಡಲಿದೆ.
ನಂಜುಂಡಪ್ಪ ವರದಿ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮೂಲಕ ಇದುವರೆಗೆ 61,330 ಕೋಟಿ ರೂ. ಅನುದಾನ ಒದಗಿಸಿದೆ. ಸುಮಾರು 42,000 ಕೋಟಿ ರೂ. ಖರ್ಚು ಮಾಡಿದೆ.
ನಂಜುಂಡಪ್ಪನವರ ವರದಿಯನ್ನಾಧರಿಸಿ ನೀಡಲಾಗುವ ವಿಶೇಷ ಅಭಿವೃದ್ಧಿ ಯೋಜನೆಯಡಿಯೇ 32,433.43 ಕೋಟಿ ರೂ. ಖರ್ಚು ಮಾಡಲಾಗಿದೆ. ಇದರ ಜೊತೆಯಲ್ಲಿ ಬಯಲು ಸೀಮೆ ಅಭಿವೃದ್ಧಿ ಮಂಡಳಿ ವತಿಯಿಂದಲೂ ಅನುದಾನ ಒದಗಿಸಲಾಗಿದೆ.
ಇಷ್ಟೆಲ್ಲ ಮಾಡಿದರೂ ಮಾನವ ಅಭಿವೃದ್ಧಿ ಸೂಚ್ಯಂಕವು ನಿರೀಕ್ಷಿತ ಮಟ್ಟದಲ್ಲಿ ಸುಧಾರಿಸುತ್ತಿಲ್ಲ, ಶಿಕ್ಷಣ, ಆರೋಗ್ಯ, ಆದಾಯ ಗಳಿಕೆ ಮುಂತಾದವುಗಳಲ್ಲಿ ಹಿನ್ನಡೆಯನ್ನು ಈ ಜಿಲ್ಲೆಗಳು ಅನುಭವಿಸುತ್ತಿವೆ.
ಉತ್ತರ ಕರ್ನಾಟಕದಲ್ಲಿ ಆರ್ಥಿಕತೆಗೆ ಉತ್ತೇಜನ
ಉತ್ತರ ಕರ್ನಾಟಕದಲ್ಲಿ ಬೃಹತ್ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ಆರ್ಥಿಕತೆಗೆ ಉತ್ತೇಜನ ನೀಡಲು ಹಾಗೂ ಸ್ಥಳೀಯರಿಗೆ ಉದ್ಯೋಗ ಒದಗಿಸಲು ಬೆಳಗಾವಿ ಸಮೀಪ ಸುಮಾರು 2,000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ, 500 ಎಕರೆ ಪ್ರದೇಶದಲ್ಲಿ ಫೌಂಡ್ರಿ ಕ್ಲಸ್ಟರ್ ಅನ್ನು ಸ್ಥಾಪಿಸಲಾಗುವುದು ಹಾಗೂ ಜಿಲ್ಲೆಯಲ್ಲಿ ಏರೋಸ್ಪೇಸ್ ಆಧಾರಿತ ಕೈಗಾರಿಕೆಗಳ ಬೆಳವಣಿಗೆಗೆ ವಿಶೇಷ ಒತ್ತು ನೀಡಲಾಗುವುದು.
ಧಾರವಾಡ ಜಿಲ್ಲೆಯಲ್ಲಿ ಕೈಗಾರಿಕಾ ಕ್ಲಸ್ಟರ್ ಸ್ಥಾಪಿಸಲಾಗುತ್ತಿದ್ದು, ಈಗಾಗಲೇ 19 ಘಟಕಗಳು 1,255 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುತ್ತಿದ್ದು, ಸುಮಾರು 2,450 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದೆ ಹಾಗೂ ಧಾರವಾಡದ ಸಮೀಪ ಸುಮಾರು 3,000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ ಸ್ಥಾಪಿಸಲಾಗುತ್ತದೆ.
ರಾಯಚೂರಿನಲ್ಲಿ ಹತ್ತಿ ಉತ್ಪಾದನೆ ಹೆಚ್ಚಿರುವುದರಿಂದ ಈ ಜಿಲ್ಲೆಯಲ್ಲಿ ಆರ್ಥಿಕ ಅಭಿವೃದ್ಧಿ ಹಾಗೂ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವ ದೃಷ್ಠಿಯಿಂದ ಹತ್ತಿ ಆಧಾರಿತ ಕೈಗಾರಿಕೆಗಳ ಸ್ಥಾಪನೆಗೆ ವಿಶೇಷ ಒತ್ತು ನೀಡಲಾಗುವುದು.
ವಿಜಯಪುರದಲ್ಲಿ ಉತ್ಪಾದನಾ ಕ್ಲಸ್ಟರ್
ವಿಜಯಪುರದಲ್ಲಿ ಉತ್ಪಾದನಾ ಕ್ಲಸ್ಟರ್ ಅನ್ನು ಅಂದಾಜು 1,500 ಎಕರೆ ಪ್ರದೇಶದಲ್ಲಿ ಸ್ಥಾಪಿಸಲಾಗುವುದು.
ಉತ್ತರ ಕರ್ನಾಟಕವು ಸಮೃದ್ಧ ಪ್ರವಾಸೋದ್ಯಮಗಳ ತಾಣವಾಗಿದೆ, ಐತಿಹಾಸಿಕ ಮಹತ್ವವಿರುವ ಈ ತಾಣಗಳು ಅಂತಾರಾಷ್ಟ್ರೀಯವಾಗಿಯೂ ಮಹತ್ವ ಪಡೆದಿವೆ. ಇದಕ್ಕೆ ಸಾಕಷ್ಟು ಮಹತ್ವ ನೀಡದೆ ಹಿನ್ನಡೆಯನ್ನು ಅನುಭವಿಸುತ್ತಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಸಮಗ್ರ ಕ್ರಿಯಾಯೋಜನೆ ರೂಪಿಸಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಕ್ರಮವಹಿಸುತ್ತೇವೆ ಎಂದರು.
1 comment
[…] ರಾಜ್ಯ […]