ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ
ಬೆಂಗಳೂರು: ದಲಿತ ಮಹಿಳೆಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿರುವ ಘಟನೆ ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿದೆ ಎಂಬುದನ್ನು ತೋರಿಸುತ್ತದೆ ಎಂದು ಸಂಸದ ಡಿ.ವಿ. ಸದಾನಂದಗೌಡ ಇಂದಿಲ್ಲಿ ಟೀಕಿಸಿದ್ದಾರೆ.
ಪಕ್ಷದ ಮಹಿಳಾ ಮೋರ್ಚಾ ನಡೆಸಿದ ಬೃಹತ್ ಪ್ರತಿಭಟನೆ ಸಂದರ್ಭದಲ್ಲಿ ಮಾತನಾಡಿದ ಅವರು, ಇಷ್ಟು ಕೆಟ್ಟ ಆಡಳಿತವನ್ನು ನನ್ನ ಜೀವನದಲ್ಲೇ ನೋಡಿಲ್ಲ, ಆಡಳಿತ ವ್ಯವಸ್ಥೆ ಪೂರ್ತಿ ಹದಗೆಟ್ಟಿದೆ, ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗಿವೆ ಎಂದರು.
ಪೊಲೀಸ್ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಗೊಂಡು ಸರ್ಕಾರ ಕೆಲಸ ಮಾಡುತ್ತಿಲ್ಲ, ಗೃಹ ಸಚಿವ ಡಾ.ಜಿ. ಪರಮೇಶ್ವರ್, ಯಾವಾಗ ಎಚ್ಚೆತ್ತುಕೊಳ್ಳುತ್ತಾರೋ ಅಲ್ಲಿವರೆಗೂ ಹೋರಾಟ ಮಾಡುತ್ತೇವೆ.
ಸಂಸತ್ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸುತ್ತೇವೆ
ಘಟನೆ ಬಗ್ಗೆ ಈಗಾಗಲೇ ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದೆ, ಸೋಮವಾರ ಸಂಸತ್ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸುತ್ತೇವೆ ಎಂದರು.
ಭ್ರೂಣ ಹತ್ಯೆ ಪ್ರಕರಣಗಳನ್ನು ತಡೆಯುವಲ್ಲಿ ಸರ್ಕಾರದ ವೈಫಲ್ಯವನ್ನೂ ಈ ಸಂದರ್ಭದಲ್ಲಿ ಖಂಡಿಸಲಾಯಿತು. ಗೃಹ ಸಚಿವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾನಿರತರನ್ನು ಪೊಲೀಸರು ವಶಕ್ಕೆ ಪಡೆದರು.