ಸಂಪನ್ಮೂಲ ಕ್ರೋಡೀಕರಣದಲ್ಲಿ ಸಂಪೂರ್ಣ ವಿಫಲ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಸಮರ್ಥ, ಅಸಮರ್ಪಕ ಆಡಳಿತದಿಂದ ಹಣಕಾಸು ಸ್ಥಿತಿ ಹಾಗೂ ಕಾನೂನು-ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಇಂದಿಲ್ಲಿ ಟೀಕಿಸಿದರು.
ಪಕ್ಷದ ಲೋಕಸಭಾ ಚುನಾವಣಾ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, 14 ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪನ್ಮೂಲ ಕ್ರೋಡೀಕರಣದಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ, ರಾಜ್ಯದಲ್ಲಿ ಭೀಕರ ಬರಗಾಲವಿದ್ದು, 500 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಸರ್ಕಾರ ಪರಿಹಾರ ಕೊಡದೆ, ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ ಎಂದರು.
ಪರಿಶಿಷ್ಟರಿಗೆ ಮೀಸಲಿಟ್ಟ ಹಣ ಬೇರೆ ಉದ್ದೇಶಗಳಿಗೆ ಬಳಕೆ
ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಅತಿವೃಷ್ಟಿಯಿಂದಾದ ಹಾನಿಗೆ ತಕ್ಷಣ ಸ್ಪಂದಿಸಿದ್ದರು, ಈಗಿನ ಸರ್ಕಾರ ಪರಿಶಿಷ್ಟ ಜಾತಿ-ಪಂಗಡಗಳಿಗೆ ಮೀಸಲಿಟ್ಟ ಹಣವನ್ನೂ ಬೇರೆ ಉದ್ದೇಶಗಳಿಗೆ ವರ್ಗಾಯಿಸಿ ದಲಿತರಿಗೆ ಅನ್ಯಾಯ ಮಾಡಿದೆ.
ಇತ್ತೀಚೆಗೆ ನಡೆದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಪ್ರಜ್ಞಾವಂತ ಮತದಾರರು ಕಾಂಗ್ರೆಸ್‌ನ ಗ್ಯಾರಂಟಿ ಗಿಮಿಕ್‌ಗಳನ್ನು ತಿರಸ್ಕರಿಸಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ 28 ಸ್ಥಾನಗಳಲ್ಲಿ ಪಕ್ಷ ಗೆಲುವು ಸಾಧಿಸಲು ಒಗ್ಗಟ್ಟಾಗಿ ಶ್ರಮಿಸುವುದಾಗಿ ತಿಳಿಸಿದರು.