ಏಕಗವಾಕ್ಷಿ ಅನುಮೋದನಾ ಸಮಿತಿ ಒಪ್ಪಿಗೆ
ಬೆಂಗಳೂರು:ರಾಜ್ಯದಾದ್ಯಂತ ಕೈಗಾರಿಕಾ ಬೆಳವಣಿಗೆ ಉತ್ತೇಜಿಸಲು ಮತ್ತು ಉದ್ಯೋಗ ಸೃಷ್ಟಿಸಲು ಶಿಕ್ಷಣ – ಸಂಶೋಧನಾ ಸಂಸ್ಥೆಗಳ ಸ್ಥಾಪನೆ, ಉಗ್ರಾಣ, ಶೈತ್ಯಾಗಾರಗಳ ನಿರ್ಮಾಣ, ವಾಹನ ಬಿಡಿಭಾಗ, ಪಿವಿಸಿ ಪೈಪ್ ಸೇರಿದಂತೆ ವಿವಿಧ ಉತ್ಪನ್ನ ತಯಾರಿಕಾ ಪ್ರಸ್ತಾವಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ಬಂಡವಾಳ ಹೂಡಿಕೆ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಒಟ್ಟು6,407 ಕೋಟಿ ರೂ. ಬಂಡವಾಳ ಹೂಡಿಕೆಯ ವಿವಿಧ ಪ್ರಸ್ತಾವಗಳಿಗೆ ರಾಜ್ಯಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಒಪ್ಪಿಗೆ ನೀಡಿದೆ ಎಂದರು.
ವಿವಿಧ ಜಿಲ್ಲೆಗಳಲ್ಲಿ ಹೂಡಿಕೆ
ಇವುಗಳಲ್ಲಿ ಬೆಂಗಳೂರು ಗ್ರಾಮಾಂತರ, ಬೆಳಗಾವಿ, ರಾಮನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆಯ ವಿವಿಧ ಯೋಜನೆಗಳಿಗೆ ಒಪ್ಪಿಗೆ ಸೂಚಿಸಲಾಗಿದೆ, ತಲಾ 50 ಕೋಟಿ ರೂ.ಗಳಿಗೂ ಹೆಚ್ಚಿನ ಬಂಡವಾಳದ 22 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ಇವುಗಳಿಂದ ರಾಜ್ಯದಲ್ಲಿ 4,230.64 ಕೋಟಿ ರೂ. ಬಂಡವಾಳ ಹೂಡಿಕೆಯೊಂದಿಗೆ ಒಟ್ಟು 24,846 ಜನರಿಗೆ ಉದ್ಯೋಗಾವಕಾಶಗಳು ದೊರೆಯಲಿವೆ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ 484.33 ಕೋಟಿ ರೂ. ಮೊತ್ತದ ವಿಜ್ಞಾನ, ತಂತ್ರಜ್ಞಾನ ಸಂಶೋಧನೆ ಹಾಗೂ ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆ, ಮೈಸೂರು ಜಿಲ್ಲೆಯಲ್ಲಿ 415 ಕೋಟಿರೂ. ಮೊತ್ತದ ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್ನ ಶಿಕ್ಷಣ ವಿಶ್ವವಿದ್ಯಾಲಯ ಸ್ಥಾಪನೆ, ಬೆಳಗಾವಿ ಜಿಲ್ಲೆಯಲ್ಲಿ 485 ಕೋಟಿ ರೂ. ಬಂಡವಾಳದ ಯಾಂತ್ರಿಕೃತ ಎರಕಹೊಯ್ಯುವ ಘಟಕ ಸ್ಥಾಪನೆ ಸೇರಿವೆ ಎಂದರು.