ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕಿಳಿಸಲು ಬಿಜೆಪಿ ನಿರ್ಧಾರ
ಬೆಂಗಳೂರು: ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹೋದರ ಹಾಗೂ ಸಂಸದ ಡಿ.ಕೆ.ಸುರೇಶ್ ವಿರುದ್ಧ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಹಾಗೂ ಖ್ಯಾತ ಹೃದಯ ತಜ್ಞ ಡಾ.ಸಿ.ಎನ್.ಮಂಜುನಾಥ್ ಅವರನ್ನುಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿದೆ.
ಬಿಜೆಪಿ ವರಿಷ್ಠರ ಸಲಹೆಯಂತೆ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿಸಲು ತೀರ್ಮಾನಿಸಲಾಗಿದೆ. ರಾಷ್ಟ್ರ ವಿಭಜನೆ ಕುರಿತು ಸುರೇಶ್ ಹೇಳಿಕೆ ನೀಡಿದ ನಂತರ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಹಿರಿಯ ನಾಯಕರು ಆಕ್ರೋಶಗೊಂಡಿದ್ದಾರೆ.
ಇಂಥವರು ಲೋಕಸಭೆಗೆ ಆಯ್ಕೆ ಮಾಡಬಾರದು ಎಂಬ ಉದ್ದೇಶದಿಂದಲೇ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ವರ್ಚಸ್ಸು ಹೊಂದಿರುವ ಹಾಗೂ ಜನಮನ್ನಣೆ ಗಳಿಸಿರುವ ಮಂಜುನಾಥ್ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ.
ಬಿಜೆಪಿ ನೀಡಿದ ಈ ಸಂದೇಶದ ಬೆನ್ನಲ್ಲೇ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬದಲ್ಲಿ ಸಭೆ ಸೇರಿ ಆಂತರಿಕವಾಗಿ ಚರ್ಚೆ ನಡೆಸಿದ್ದಾರೆ. ಇದರ ನಡುವೆಯೇ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರನ್ನು ಗೌಡರ ಬಳಿ ಕಳುಹಿಸಿ ಪಕ್ಷದ ಸಂದೇಶ ತಿಳಿಸಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕಿಳಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
ಮಂಜುನಾಥ್ ಅವರನ್ನು ಕಣಕ್ಕಿಳಿಸುತ್ತಿರುವ ವಿಚಾರ ಕಾಂಗ್ರೆಸ್ ನಲ್ಲಿ ತಲ್ಲಣವನ್ನುಂಟು ಮಾಡಿದೆ. ಈ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಸುರೇಶ್ ಅವರು ಚುನಾವಣೆ ಕಣದಿಂದ ಹಿಂದೆ ಸರಿಯುವ ಇಲ್ಲವೆ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಸ್ಪರ್ಧಿಸುವ ಬಗ್ಗೆ ಚಿಂತಿಸಿದ್ದಾರೆ.
ಒಂದು ವೇಳೆ ಸುರೇಶ್ ಕಣಕ್ಕಿಳಿಯದಿದ್ದರೆ, ಕುಸುಮಾ ಅವರನ್ನು ಕಣಕ್ಕಿಳಿಸುವ ಬಗ್ಗೆ ಡಿ.ಕೆ.ಶಿವಕುಮಾರ್ ಅವರ ಕುಟುಂಬದಲ್ಲಿ ಆಂತರಿಕ ಚರ್ಚೆ ನಡೆದಿದೆ.
ರಾಜ್ಯಸಭೆಗೆ ಎನ್ ಡಿಎ ಮೈತ್ರಿಕೂಟದಿಂದ ಎರಡನೇ ಅಭ್ಯರ್ಥಿ ಕಣಕ್ಕೆ
ಇದರ ನಡುವೆ ಹಠಾತ್ ಬೆಳವಣಿಗೆಯಲ್ಲಿ ರಾಜ್ಯಸಭೆ ಚುನಾವಣೆಯಲ್ಲಿ ಗೆಲ್ಲಲು ಅಗತ್ಯವಿರುವ ಸಾಮರ್ಥ್ಯ ವಿಧಾನಸಭೆಯಲ್ಲಿ ಇಲ್ಲದಿದ್ದರೂ ರಾಜ್ಯಸಭಾ ಚುನಾವಣೆಯಲ್ಲಿ ಎರಡನೇ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಬಿಜೆಪಿ ವರಿಷ್ಠರೇ ಆಸಕ್ತಿ ತೋರಿದ್ದಾರೆ.
ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಇಲ್ಲವೇ ರಾಜ್ಯಸಭೆ ಮಾಜಿ ಸದಸ್ಯ ಕುಪೇಂದ್ರರೆಡ್ಡಿ ಅವರು ಎನ್ ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಉಭಯ ಪಕ್ಷಗಳ ನಡುವೆ ತೆರೆಮರೆಯಲ್ಲಿ ಅಭ್ಯರ್ಥಿ ಕಣಕ್ಕಿಳಿಸುವ ಪ್ರಯತ್ನ ನಡೆದಿದ್ದು, ಈ ವಿಚಾರವನ್ನು ಗೌಪ್ಯವಾಗಿಡಲಾಗಿದೆ. ನಾಳೆ ಸ್ಪಷ್ಟ ಚಿತ್ರಣ ಸಿಗಲಿದೆ. ರಾಜ್ಯ ಸಭೆ ಚುನಾವಣೆಗೆ ನಾಮ ಪತ್ರ ಸಲ್ಲಿಸಲು ನಾಳೆಯೇ ಕಡೆಯ ದಿನವಾಗಿದೆ.