ಅಧಿಕಾರಿಗಳು ಎಲ್ಲರಿಗೂ ರಕ್ಷಣೆ, ಗೌರವ ನೀಡಬೇಕು
ಬೆಂಗಳೂರು:ರಾಮನಗರದಲ್ಲಿ ಬಿಜೆಪಿಯವರು ವಕೀಲರನ್ನು ತಪ್ಪು ದಾರಿಗೆಳೆದು ರಾಜಕಾರಣ ಮಾಡುತ್ತಿದ್ದಾರೆ, ವಕೀಲರು ಚರ್ಚೆಗೆ ಬಂದರೆ ಕಾನೂನು ವ್ಯಾಪ್ತಿಯಲ್ಲಿ ಪರಿಹಾರ ನೀಡುವ ಪ್ರಯತ್ನ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದಿಲ್ಲಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನಗರದಲ್ಲಿ ವಕೀಲರ ಪ್ರಕರಣ ವಿಚಾರವಾಗಿ ಗೃಹ ಸಚಿವರು ಉತ್ತರ ನೀಡುತ್ತಾರೆ, ಕಾನೂನು ಬದ್ಧವಾಗಿ ಅಧಿಕಾರಿಗಳು ಎಲ್ಲರಿಗೂ ರಕ್ಷಣೆ, ಗೌರವ ನೀಡಬೇಕು, ನಮ್ಮ ಬಳಿ ಬಂದರೆ ಚರ್ಚೆಗೆ ಸಿದ್ಧ, ರಾಜಕಾರಣವನ್ನೇ ಮಾಡುವುದಾರೆ ಮಾಡಲಿ, ಅಭ್ಯಂತರವೇನೂ ಇಲ್ಲ ಎಂದರು.
ಹೈಕೋರ್ಟ್ ನ್ಯಾಯಮೂರ್ತಿಗಳನ್ನು ನಿಂದಿಸಿದ ವಿಚಾರದ ಬಗ್ಗೆ ಮಾಹಿತಿ ಇಲ್ಲ, ನಾನು ಮಧ್ಯ ಪ್ರವೇಶಿಸುವುದಿಲ್ಲ, ಅವರುಗಳು ನೋವು ಹೇಳಿಕೊಂಡರೆ, ಕಾನೂನು ಚೌಕಟ್ಟಿನಲ್ಲಿ ಪರಿಹಾರಕ್ಕೆ ಪ್ರಯತ್ನ ಮಾಡಲಾಗುವುದು, ನಮಗೆ ವಕೀಲರು, ಅಧಿಕಾರಿಗಳು, ಸಾರ್ವಜನಿಕರ ಬಗ್ಗೆ ಸಮಾನ ಗೌರವವಿದೆ ಎಂದರು.
ಕೇರಳದಲ್ಲಿ ಆನೆ ತುಳಿತಕ್ಕೆ ಮೃತಪಟ್ಟವರಿಗೆ ರಾಜ್ಯ ಸರ್ಕಾರ ಪರಿಹಾರ ನೀಡಿರುವ ಬಗ್ಗೆ ಮಾಹಿತಿ ಇಲ್ಲ, ಮಾಹಿತಿ ಪಡೆದು ಮಾತನಾಡುತ್ತೇನೆ ಎಂದರು.