ರಾಜ್ಯ ಪ್ರಮುಖರ ಶಿಫಾರಸು
ಬೆಂಗಳೂರು:ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸದ ಹಾಲಿ ಸಂಸದರನ್ನು ಹೊರತುಪಡಿಸಿ, ಉಳಿದಂತೆ ಎಲ್ಲ ಸಂಸದರಿಗೆ ಟಿಕೆಟ್ ನೀಡುವಂತೆ ರಾಜ್ಯ ಬಿಜೆಪಿಯ ಪ್ರಮುಖರು ಪಕ್ಷದ ವರಿಷ್ಠರಿಗೆ ಶಿಫಾರಸು ಮಾಡಿದ್ದಾರೆ.
ಇತ್ತೀಚೆಗೆ ನಗರದ ಕೇಶವಕೃಪಾದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ನೀಡಲು ಶಿಫಾರಸು ಮಾಡಲಾಗಿದೆ.
ರಾಜಧಾನಿ ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕೇಂದ್ರ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರನ್ನು ಕಣಕ್ಕಿಳಿಸಲು ವರಿಷ್ಠರು ಚಿಂತನೆ ಮಾಡಿದ್ದಾರೆ ಎಂಬ ಮಾಹಿತಿಗಳಿದ್ದರೂ, ಹಾಲಿ ಸಂಸದ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ನೀಡಲು ಶಿಫಾರಸು ಮಾಡಲಾಗಿದೆ.
ಹಾಲಿ ಸಂಸದರನ್ನೇ ಮುಂದುವರಿಸಿ
ಇದೇ ರೀತಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದ ಪಿ.ಸಿ.ಮೋಹನ್ ಬದಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಕಣಕ್ಕಿಳಿಸಲು ವರಿಷ್ಠರು ಆಸಕ್ತಿ ತೋರಿದ್ದರೂ ಇಲ್ಲಿನ ಪ್ರಮುಖರು ಮಾತ್ರ ಹಾಲಿ ಸಂಸದರನ್ನೇ ಮುಂದುವರಿಸಲು ನಿರ್ಧರಿಸಿದ್ದಾರೆ.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಸ್ಪರ್ಧೆಗೆ ಆಸಕ್ತಿ ತೋರದ ಹಿನ್ನೆಲೆಯಲ್ಲಿ ಆ ಕ್ಷೇತ್ರದಿಂದ ಯಾರ ಹೆಸರನ್ನೂ ಶಿಫಾರಸು ಮಾಡಲಾಗಿಲ್ಲ.
ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಹಾಲಿ ಸಂಸದ ಜಿ.ಎಂ.ಸಿದ್ದೇಶ್ವರ್ ನಿರಾಸಕ್ತಿ ತೋರಿಸಿರುವ ಹಿನ್ನೆಲೆಯಲ್ಲಿ ಅವರ ಕುಟುಂಬದವರಿಗೆ ಟಿಕೆಟ್ ನೀಡುವಂತೆ ಶಿಫಾರಸು ಮಾಡಲಾಗಿದೆ.
ಚಾಮರಾಜನಗರ ಕ್ಷೇತ್ರದಿಂದ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರು ಸ್ಪರ್ಧಿಸಲು ನಿರಾಸಕ್ತಿ ತೋರಿರುವ ಹಿನ್ನೆಲೆಯಲ್ಲಿ ಅವರ ಅಳಿಯನಿಗೆ ಟಿಕೆಟ್ ನೀಡಲು ಶಿಫಾರಸು ಮಾಡಲಾಗಿದೆ.
ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಸಚಿವ ಡಾ.ಕೆ.ಸುಧಾಕರ್ ಆಸಕ್ತಿ ಹೊಂದಿದ್ದರೂ ಈ ಕ್ಷೇತ್ರದಿಂದ ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಪುತ್ರ ಅಶೋಕ್ ಅವರಿಗೆ ಟಿಕೆಟ್ ನೀಡುವಂತೆ ಶಿಫಾರಸು ಮಾಡಿದೆ.
ಮಾಧುಸ್ವಾಮಿ ಇಲ್ಲವೇ ವಿ.ಸೋಮಣ್ಣ
ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಹಾಲಿ ಸಂಸದ ಬಸವರಾಜು ನಿರಾಸಕ್ತಿ ತೋರಿಸಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಇಲ್ಲವೇ ವಿ.ಸೋಮಣ್ಣ ಅವರ ಮಧ್ಯೆ ಟಿಕೆಟ್‌ಗಾಗಿ ಫೈಟ್ ನಡೆದಿದ್ದು, ಈ ಹಿನ್ನೆಲೆಯಲ್ಲಿ ಈ ಕ್ಷೇತ್ರದಿಂದ ಯಾರಿಗೆ ಟಿಕೆಟ್ ನೀಡಬೇಕು ಎಂಬ ಬಗ್ಗೆ ಯಾವುದೇ ಶಿಫಾರಸು ಮಾಡಲಾಗಿಲ್ಲ.
ಹಾಲಿ ಸಂಸದರ ಪೈಕಿ ಯಾರು ಕಣಕ್ಕಿಳಿಯಲು ನಿರಾಸಕ್ತಿ ತೋರುತ್ತಾರೋ ಅವರನ್ನು ಹೊರತುಪಡಿಸಿ, ಉಳಿದಂತೆ ಬಹುತೇಕ ಹಾಲಿ ಸಂಸದರಿಗೆ ಟಿಕೆಟ್ ನೀಡುವುದು ಸೂಕ್ತ ಎಂದು ರಾಜ್ಯ ಬಿಜೆಪಿ ನಾಯಕರು ತೀರ್ಮಾನಿಸಿದ್ದಾರೆ.
ಸ್ಪರ್ಧಾ ಕಣಕ್ಕಿಳಿಯಲು ಆಸಕ್ತಿ ಹೊಂದಿರುವ ಹಾಲಿ ಸಂಸದರಿಗೆ ಬಲವಂತವಾಗಿ ಟಿಕೆಟ್ ತಪ್ಪಿಸಿದರೆ, ಈ ಅಂಶವೇ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗೆ ತಿರುಗುಬಾಣ ಆಗುವ ಸಾಧ್ಯತೆಗಳು ಇವೆ.
ಕಣಕ್ಕಿಳಿಯುವ ಆಸಕ್ತಿ ಇಲ್ಲದವರನ್ನು ಹೊರತುಪಡಿಸಿ ಉಳಿದಂತೆ ಬಹುತೇಕರಿಗೆ ಟಿಕೆಟ್ ನೀಡುವಂತೆ ಶಿಫಾರಸು ಮಾಡಲಾಗಿದೆ.
ನಾಲ್ಕು ಚುನಾವಣಾ ಪೂರ್ವ ಸಮೀಕ್ಷೆ
ಕರ್ನಾಟಕದ 28 ಲೋಕಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ದೆಹಲಿ ವರಿಷ್ಠರು ಇದುವರೆಗೂ ನಾಲ್ಕು ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದ್ದಾರೆ.
ಇದರ ಪ್ರಕಾರ ಐದು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ವರದಿ ಸಮೀಕ್ಷೆ ತೃಪ್ತಿ ತಂದಿಲ್ಲ, ಆದ್ದರಿಂದ ಬಿಜೆಪಿಯ ಅಂಗ ಸಂಸ್ಥೆಗಳ ಮೂಲಕ ವಾಸ್ತವಾಂಶ ತಿಳಿಯಲು ಮತ್ತೊಂದು ಸಮೀಕ್ಷೆ ನಡೆಸಿದ್ದಾರೆ.
ಇದರ ನಡುವೆಯೇ ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಆರ್‌ಎಸ್‌ಎಸ್‌ನ ಮುಕುಂದ್, ತಿಪ್ಪೇಸ್ವಾಮಿ ಸೇರಿದಂತೆ ಪ್ರಮುಖರು, ರಾಜ್ಯ ಬಿಜೆಪಿ ನಾಯಕರಾದ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಆರ್.ಅಶೋಕ್, ಸಿ.ಟಿ. ರವಿ, ಗೋವಿಂದ ಕಾರಜೋಳ್, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಜೊತೆ ಸುದೀರ್ಘ ಸಮಾಲೋಚನೆ ನಡೆಸಿ ಈ ಶಿಫಾರಸು ಮಾಡಿದ್ದಾರೆ.
ಮೊದಲ ವಾರದಲ್ಲಿ ಪಟ್ಟಿ
ವರಿಷ್ಠರು ರಾಜ್ಯ ಘಟಕ ಮಾಡಿರುವ ಶಿಫಾರಸ್ಸನ್ನು ಚುನಾವಣಾ ಸಮೀಕ್ಷೆ ಜೊತೆ ತಾಳೆ ಹಾಕಿ ಮಾರ್ಚ್ ಮೊದಲ ವಾರದಲ್ಲಿ ಪಟ್ಟಿ ಬಿಡುಗಡೆ ಮಾಡಲಿದ್ದಾರೆ.
ಸಭೆಯಲ್ಲಿ ಭಾಗವಹಿಸಿದ್ದ ಬಿಜೆಪಿ ಸಂಸದೀಯ ಮಂಡಳಿ ಸದಸ್ಯರೂ ಆಗಿರುವ ಯಡಿಯೂರಪ್ಪ ಅವರು, ನಿನ್ನೆಯಷ್ಟೇ ಅಭ್ಯರ್ಥಿಗಳ ಪಟ್ಟಿ ಇನ್ನು ಮೂರು-ನಾಲ್ಕು ದಿನಗಳಲ್ಲಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.