ಜೀವ ಉಳಿಸುವ ಕೆಲಸ ಪ್ರಶಂಸನೀಯ
ಬೆಂಗಳೂರು: ಅಂಗಾಂಗ ದಾನ ನಿರ್ಧಾರ ಮಹತ್ತರವಾದದು, ಇನ್ನೊಂದು ಜೀವ ಉಳಿಸುವ ಕೆಲಸ ಪ್ರಶಂಸನೀಯವಾಗಿದ್ದು, ಅಂಗದಾನಿಗಳ ಸಂಕಷ್ಟದೊಂದಿಗೆ ಸರ್ಕಾರ ಇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಂತ್ವನ ಹೇಳಿದ್ದಾರೆ.
ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಅಂಗಾಂಗ ದಾನಿಗಳ ಕುಟುಂಬದವರಿಗೆ ಪ್ರಶಂಸಾಪತ್ರ ನೀಡಿಕೆ ಸಂದರ್ಭದಲ್ಲಿ, ಅಪಘಾತಕ್ಕೀಡಾದ ಶರವಣ ಅವರ ಪತ್ನಿ ಪ್ರಶಂಸಾ ಪತ್ರ ಸ್ವೀಕರಿಸುವಾಗ ಅಗಲಿದ ತಮ್ಮ ಪತಿಯನ್ನು ನೆನೆದು ಕಣ್ಣೀರು ಸುರಿಸಿದರು, ಕೊಲೆಗೀಡಾದ ರಾಮನಗರದ ಕೆ.ಜಿ. ನವೀನ್ ಕುಟುಂಬದವರಿಗೆ ನ್ಯಾಯ ಒದಗಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದರು.
ಅಂಗಾಂಗ ದಾನಕ್ಕೆ ಮುಂದಾಗಬೇಕು
ತಮ್ಮ ಹಿಂದಿನ ಅಧಿಕಾರಾವಧಿಯಲ್ಲಿ ಅಂಗಾಂಗ ದಾನಕ್ಕೆ ಸೊಸೈಟಿ ಸ್ಥಾಪಿಸಿದ್ದನ್ನು ಸ್ಮರಿಸಿದ ಮುಖ್ಯಮಂತ್ರಿ, ಇನ್ನಷ್ಟು ಜನರು ಅಂಗಾಂಗ ದಾನಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಅಂಗಾಂಗ ದಾನ ಕೋರಿ, ನೋಂದಾಯಿಸಿಕೊಂಡವರ ಸಂಖ್ಯೆ 8,000ಕ್ಕೂ ಹೆಚ್ಚಿದ್ದು, ಕಳೆದ ಒಂದು ವರ್ಷದಲ್ಲಿ 178 ಅಂಗಾಂಗ ದಾನ ಆಗಿದೆ, ಕರ್ನಾಟಕ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ, ಇದು ಇನ್ನಷ್ಟು ಹೆಚ್ಚಬೇಕಿದೆ, ಜನರಲ್ಲಿ ಅರಿವು ಮೂಡಿಸಲು, ಅಂಗಾಂಗ ದಾನಿಗಳ ಕುಟುಂಬದವರಿಗೆ ಪ್ರಶಂಸಾಪತ್ರ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಅಥವಾ ಜಿಲ್ಲಾಧಿಕಾರಿಗಳು ಅಂಗಾಂಗ ದಾನಿಗಳ ಕುಟುಂಬದವರಿಗೆ ಪ್ರಶಂಸಾ ಪತ್ರ ನೀಡಲಿದ್ದಾರೆ ಎಂದರು.
