ಬಿಜೆಪಿ ಹೇಳಿಕೆ ರಾಜಕೀಯ ಪ್ರೇರಿತ
ಮೈಸೂರು:ಬೆಂಗಳೂರಿನ ಕೆಫೆಯೊಂದರಲ್ಲಿ ಸ್ಫೋಟಕ ಇಟ್ಟು ಹೋಗಿದ್ದ ಆರೋಪಿ ಪತ್ತೆ ಕಾರ್ಯ ಚುರುಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಫೋಟ ಸಂಭವಿಸಿರುವುದು ನಿಜ, ಆರೋಪಿ ಮಾಸ್ಕ್ ಮತ್ತು ಟೋಪಿ ಧರಿಸಿ ಬಸ್‌ನಲ್ಲಿ ಬಂದು ತಿಂಡಿ ತಿಂದು ನಂತರ ಸ್ಫೋಟಕವುಳ್ಳ ಬ್ಯಾಗ್ ಇಟ್ಟು ತೆರಳಿದ್ದಾನೆ ಎಂಬ ಮಾಹಿತಿ ಇದೆ, ತನಿಖೆ ನಡೆಯುತ್ತಿದೆ ಎಂದರು.
ಘಟನೆಯಲ್ಲಿ ಗಾಯಗೊಂಡಿರುವವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ, ಉಪಮುಖ್ಯಮಂತ್ರಿ ಮತ್ತು ಗೃಹ ಸಚಿವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಅಲ್ಪಸಂಖ್ಯಾತರ ತುಷ್ಟೀಕರಣದಿಂದಾಗಿ ಈ ರೀತಿಯ ಘಟನೆಗಳು ನಡೆಯುತ್ತಿವೆ ಎಂಬ ಬಿಜೆಪಿ ಹೇಳಿಕೆ ರಾಜಕೀಯ ಪ್ರೇರಿತ, ಅವರ ಆಡಳಿತಾವಧಿಯಲ್ಲಿಯೂ ಬಾಂಬ್ ಸ್ಫೋಟ ಘಟನೆಗಳು ನಡೆದಿವೆ, ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ನಡೆದಾಗ ಏನು ಮಾಡಿದರು, ಆಗಲೂ ತುಷ್ಟೀಕರಣದಿಂದಾಗಿ ಆಗಿತ್ತೇ ಎಂದು ಪ್ರಶ್ನಿಸಿದರು.
ಸ್ಫೋಟ ಘಟನೆಯನ್ನು ಖಂಡಿಸುತ್ತೇನೆ, ಇದರಲ್ಲಿ ರಾಜಕಾರಣ ಮಾಡಬಾರದು, ಇದು ಭಯೋತ್ಪಾದಕ ಕೃತ್ಯವೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದರು.
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ತಪ್ಪಿತಸ್ಥರನ್ನು ಶಿಕ್ಷಿಸುವ ಕೆಲಸವನ್ನು ಸರ್ಕಾರ ಮಾಡುತ್ತದೆ ಎಂದರು.