ಬೆಂಗಳೂರು:ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇನ್ನೆರಡು-ಮೂರು ದಿನಗಳಲ್ಲಿ ಪ್ರಕಟಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಂಬಂಧ ರಾಜ್ಯ ಮತ್ತು ಕೇಂದ್ರ ಮಟ್ಟದಲ್ಲಿ ಹಲವು ಸುತ್ತಿನ ಚರ್ಚೆಗಳು ನಡೆದಿವೆ.
ಚುನಾವಣಾ ಪೂರ್ವ ಸಮೀಕ್ಷೆ, ಅಭ್ಯರ್ಥಿಗಳ ಆಯ್ಕೆ ಸಂಬಂಧ ನೇಮಕಗೊಂಡಿದ್ದ ಉಸ್ತುವಾರಿ ಸಚಿವರ ವರದಿಯೂ ಸೇರಿದಂತೆ ಹಲವು ಮಾಹಿತಿಗಳನ್ನು ಆಧರಿಸಿ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿ ವರಿಷ್ಠರಿಗೆ ಶಿಫಾರಸು ಮಾಡಲಾಗಿದೆ.
ಶನಿವಾರ ಮತ್ತೊಂದು ಸುತ್ತಿನ ಚರ್ಚೆ
ವರಿಷ್ಠರ ಸೂಚನೆಯಂತೆ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ನಗರದಲ್ಲೇ ಶನಿವಾರ ಮತ್ತೊಂದು ಸುತ್ತಿನ ಚರ್ಚೆ ನಡೆಯಲಿದೆ.
ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸದಸ್ಯರು ನಗರಕ್ಕೆ ಆಗಮಿಸಲಿದ್ದು ಅವರ ಸಮ್ಮುಖದಲ್ಲೇ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.
ಕನಿಷ್ಠ 20 ಸ್ಥಾನ ಗೆಲ್ಲಲೇಬೇಕು
ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲಲೇಬೇಕೆಂಬ ಗುರಿಯೊಂದಿಗೆ ಕಸರತ್ತು ನಡೆಸಿದೆ.
ಸಂಭವನೀಯ ಅಭ್ಯರ್ಥಿಗಳಿಗೆ ಕೆಲವು ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ಆರಂಭಿಸುವಂತೆಯೂ ಹಸಿರು ನಿಶಾನೆ ತೋರಿದ್ದು, ಅವರು ಈಗಾಗಲೇ ಸಿದ್ಧತೆ ನಡೆಸಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಬಂದಿರುವ ಸರಾಸರಿ ಮತವನ್ನು ಈ ಚುನಾವಣೆಯಲ್ಲಿ ಶೇಕಡಾ 4 ರಿಂದ 5 ರಷ್ಟು ಹೆಚ್ಚಳ ಮಾಡಿಕೊಂಡರೆ ತಮ್ಮ ನಿಗದಿತ ಗುರಿಯನ್ನು ಮುಟ್ಟಬಹುದೆಂಬ ಆಶಾಭಾವನೆ ಇದೆ.
ಇದಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣಾ ತಂತ್ರಗಾರಿಕೆಯನ್ನು ತೆರೆಮರೆಯಲ್ಲಿ ಮಾಡುತ್ತಿದ್ದಾರೆ.
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ
ಬಿಜೆಪಿ-ಜೆಡಿಎಸ್‌ನಿಂದ ಈಗಾಗಲೇ ಕೆಲವು ಮುಖಂಡರನ್ನು ಸೆಳೆದುಕೊಂಡಿರುವ ಕಾಂಗ್ರೆಸ್, ಶಿವರಾತ್ರಿ ಹಬ್ಬದ ನಂತರ ಮತ್ತಷ್ಟು ಮುಖಂಡರು ಮತ್ತು ಕಾರ್ಯಕರ್ತರನ್ನು ಸೆಳೆಯಲು ವೇದಿಕೆ ಸಿದ್ಧವಾಗಿದೆ.
ಇವರಲ್ಲಿ ಬಿಜೆಪಿಯ ಮಾಜಿ ಸಂಸದ ಜಯಪ್ರಕಾಶ್ ಹೆಗಡೆ, ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ, ಅದೇ ಪಕ್ಷಕ್ಕೆ ಸೇರಿದ ಮಾಜಿ ಸಚಿವ ಡಾ.ಸುಧಾಕರ್, ಜೆಡಿಎಸ್‌ನ ಮಂಡ್ಯದ ಎಂ.ಶ್ರೀನಿವಾಸ್, ಅಪ್ಪಾಜಿಗೌಡ ಪ್ರಮುಖರಾಗಿದ್ದಾರೆ.
ಇನ್ನೊಂದೆಡೆ ಬಿಜೆಪಿ, ಜೆಡಿಎಸ್ ಜೊತೆಗೂಡಿ ಕರ್ನಾಟಕದ ಎಲ್ಲಾ ೨೮ ಕ್ಷೇತ್ರಗಳಲ್ಲೂ ಗೆಲುವು ಸಾಧಿಸಬೇಕೆಂದು ಪಣ ತೊಟ್ಟಿದೆ. ಈ ಬಾರಿ ವರಿಷ್ಠರೇ ರಾಜ್ಯದ ಸಂಪೂರ್ಣ ಉಸ್ತುವಾರಿಯನ್ನು ವಹಿಸಿಕೊಂಡು ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸಿದ್ದಾರೆ.
ರಾಜ್ಯದ ಪ್ರಮುಖ ನಾಯಕರನ್ನು ದೆಹಲಿಗೆ ಕರೆಸಿಕೊಂಡಿರುವ ವರಿಷ್ಠರು ಕಳೆದ ಎರಡು ದಿನಗಳಿಂದ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಚರ್ಚೆ ಮುಂದುವರೆಸಿದ್ದಾರೆ.
ಲೋಕಸಭಾ ಚುನಾವಣೆ ವೇಳಾಪಟ್ಟಿ ಪ್ರಕಟಗೊಳ್ಳುವ ಮುನ್ನವೇ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ.