ಬರಗಾಲ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲ
ಬೆಂಗಳೂರು:ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯವಾಗಿದೆ, ಬರಗಾಲ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ, 800ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡರೂ ಎಚ್ಚತ್ತುಕೊಳ್ಳದೆ ಇರುವುದು ದುರಂತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದಿಲ್ಲಿ ಟೀಕಿಸಿದ್ದಾರೆ.
ಪಕ್ಷದ ಲೋಕಸಭಾ ಚುನಾವಣಾ ಮಾಧ್ಯಮ ಕೇಂದ್ರ ಉದ್ಘಾಟಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ನದಿಗಳಲ್ಲಿ ನೀರಿಲ್ಲ, ಕುಡಿಯುವ ನೀರಿನ ಹಾಹಾಕಾರ ಇದೆ ಎಂಬುದಾಗಿ ಮುಖ್ಯಮಂತ್ರಿ ಹೇಳುತ್ತಾರೆ, ಕಾವೇರಿ ನೀರನ್ನು ತಮಿಳುನಾಡಿಗೆ ಯಥೇಚ್ಛವಾಗಿ ಹರಿಸುವಾಗ ಈ ಆಲೋಚನೆ ಮಾಡಿದ್ದರೆ ಪರಿಸ್ಥಿತಿ ಇಷ್ಟು ಕೆಡುತ್ತಿರಲಿಲ್ಲ, ನೀರಿಗಾಗಿ ಹಾಹಾಕಾರ ಇರುತ್ತಿರಲಿಲ್ಲ ಎಂದರು.

ಕಾಂಗ್ರೆಸ್ ಆಡಳಿತ ಅಭಿವೃದ್ಧಿ ಶೂನ್ಯ
ಕಾಂಗ್ರೆಸ್ ಆಡಳಿತದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ, ಅಲ್ಪಸಂಖ್ಯಾತರ ತುಷ್ಟೀಕರಣ ಮಾಡುತ್ತಲೇ ಬಂದಿದೆ, ಲೋಕಸಭಾ ಚುನಾವಣೆಯಲ್ಲಿ ಇದಕ್ಕೆ ತಕ್ಕ ಉತ್ತರ ಕೊಡುವ ಕಾಲ ಬಂದಿದೆ.
ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 10 ವರ್ಷಗಳು ಕಳೆದ ಮೇಲೂ ಪ್ರಧಾನಮಂತ್ರಿ ನರೇಂದ್ರ ಮೋದಿ ಜನಪ್ರಿಯತೆ ಇನ್ನೂ ಉತ್ತುಂಗಕ್ಕೆ ಏರಿದೆ.
ದೇಶದ ಜನತೆ ಪ್ರಧಾನಿ ಮೋದಿ ನಾಯಕತ್ವ ಮೆಚ್ಚಿಕೊಂಡಿದ್ದಾರೆ, ಕೇಂದ್ರ ಸರ್ಕಾರದ ಯೋಜನೆಗಳು ಮನೆ ಮನೆಗೆ ತಲುಪಿವೆ, ಅಭಿವೃದ್ಧಿ ರಾಷ್ಟ್ರವನ್ನಾಗಿ ಪರಿವರ್ತಿಸುವ ಸಂಕಲ್ಪದೊಂದಿಗೆ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ.
ದಕ್ಷಿಣ ಭಾರತದ ಹೆಬ್ಬಾಗಿಲು
ಕರ್ನಾಟಕವು ದಕ್ಷಿಣ ಭಾರತದ ಬಿಜೆಪಿಯ ಹೆಬ್ಬಾಗಿಲು ಎಂಬುದನ್ನು ನಾವು ಮತ್ತೆ ಸಾಬೀತು ಮಾಡಬೇಕಿದೆ.
ರಾಜ್ಯದಲ್ಲಿ ಬಿಜೆಪಿ ಆಡಳಿತದ ಸಂದರ್ಭದಲ್ಲಿ ನೀಡಿದ ಕೊಡುಗೆಗಳು, ಕಾರ್ಯಕ್ರಮಗಳು, ಜನಪರ ಯೋಜನೆಗಳನ್ನು ಜನತೆ ಮರೆತಿಲ್ಲ ಎಂದರು.
1 comment
[…] ರಾಜಕೀಯ […]