ಬೆಂಗಳೂರು:ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರು, ತಾವು ಸ್ಪರ್ಧಿಸಿರುವ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮತದಾರರಿಗೆ ಉಚಿತ ಕೊಡುಗೆಗಳನ್ನು ನೀಡಲು ಯೋಜನೆ ರೂಪಿಸುತ್ತಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ, ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಿ ಎಂದು ಕೇಂದ್ರ ಚುನಾವಣಾ ಆಯೋಗ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳಿಗೆ ಸೂಚಿಸಿದೆ.
ಇತ್ತೀಚೆಗಷ್ಟೇ ಕ್ಷೇತ್ರದ ವ್ಯಾಪ್ತಿಯಲ್ಲಿ ಕುಕ್ಕರ್ ಸೇರಿದಂತೆ ಕೆಲವು ಉಡುಗೊರೆಗಳನ್ನು ಮತದಾರರಿಗೆ ನೀಡಲು ಸಂಗ್ರಹಿಸಿಟ್ಟಿದ್ದ ಸ್ಥಳಗಳಿಗೆ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ದಾಳಿ ಮಾಡಿ, ಅವುಗಳನ್ನು ವಶಕ್ಕೆ ತೆಗೆದುಕೊಂಡಿದ್ದರು.
ಕ್ರಮ ಕೈಗೊಳ್ಳಲು ವಿಫಲ
ತದನಂತರ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ, ಕ್ಷೇತ್ರದಲ್ಲಿ ಜಿಲ್ಲಾಧಿಕಾರಿ ಸೇರಿದಂತೆ ಎಲ್ಲರೂ ಸುರೇಶ್ ಮರ್ಜಿಯಲ್ಲಿದ್ದಾರೆ, ಆಯೋಗ ಇಲ್ಲಿ ಕ್ರಮ ಕೈಗೊಳ್ಳಲು ವಿಫಲವಾಗಿದೆ ಎಂದು ದಾಖಲೆ ಸಮೇತ ಆರೋಪ ಮಾಡಿದ್ದರು.
ಆಯೋಗ ಕಠಿಣ ಕ್ರಮ ಕೈಗೊಳ್ಳದಿದ್ದರೆ, ನಾವು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಬೇಕಾಗುತ್ತದೆ, ತಕ್ಷಣವೇ ಮಧ್ಯೆ ಪ್ರವೇಶ ಮಾಡಬೇಕೆಂದು ಒತ್ತಾಯಿಸಿದ್ದರು.
ದಾಖಲೆ ಸಮೇತ ದೂರು
ಈ ಬೆಳವಣಿಗೆಗೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದು ದಾಖಲೆ ಸಮೇತ ದೂರು ನೀಡಿದ್ದರು.
ಗೌಡರ ದೂರಿನ ಆಧಾರದ ಮೇಲೆ ಕೇಂದ್ರ ಚುನಾವಣಾ ಆಯೋಗ, ರಾಜ್ಯದ ಸಿಇಓಗೆ ಪತ್ರ ಬರೆದು, ಮಾದರಿ ನೀತಿ ಸಂಹಿತೆ ಮತ್ತು ಸಂಬಂಧಿತ ಕಾನೂನು ನಿಬಂಧನೆಗಳನ್ನು ಗಮನದಲ್ಲಿಟ್ಟುಕೊಂಡು ಕ್ರಮ ಕೈಗೊಳ್ಳುವಂತೆ ಆದೇಶಿಸಿದೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ವಿರುದ್ಧ ದೇವೇಗೌಡರ ಅಳಿಯ ಹಾಗೂ ಹೃದಯ ತಜ್ಞ ಡಾ.ಸಿ.ಎನ್.ಮಂಜುನಾಥ್ ಬಿಜೆಪಿ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.
ಕಾಂಗ್ರೆಸ್ ಸಂಸದ ಸುರೇಶ್ ಸಹೋದರ ಡಿ.ಕೆ.ಶಿವಕುಮಾರ್ ಉಪಮುಖ್ಯಮಂತ್ರಿ ಆಗಿದ್ದು, ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಆರೋಪವೂ ಗೌಡರ ಪತ್ರದಲ್ಲಿ ಸೇರಿತ್ತು.
1 comment
[…] ರಾಜಕೀಯ […]