ಮೇಕೆದಾಟು ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
ಬೆಂಗಳೂರು: ಅಧಿಕಾರ ಇರುವುದು ನಿಮ್ಮ ಕೈಯ್ಯಲ್ಲಿ. ಜನ ಪೆನ್ನು-ಪೇಪರ್ ಕೊಟ್ಟಿರುವುದೂ ನಿಮಗೇ. ಕೆಲಸ ಮಾಡಿ ಎಂದರೆ ಹಳೆಯದನ್ನು ಕೆದಕುತ್ತಿದ್ದೀರಿ, ಯಾಕೆ? ಜನರು ಕೊಟ್ಟ ಪೆನ್ನು-ಪೇಪರ್ ಹಿಡಿದುಕೊಳ್ಳುವ ನಿಮ್ಮ ಶಕ್ತಿ ಕೇವಲ ಹತ್ತೇ ತಿಂಗಳಿಗೆ ನಿಸ್ತೇಜವಾಯಿತಾ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರೇ? ಕೈಲಾಗದೆ ಮೈ ಪರಚಿಕೊಳ್ಳುವುದು ಎಂದರೆ ಇದೆ ಅಲ್ಲವೇ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಸರಣಿ ಪೋಸ್ಟ್ ಮಾಡಿರುವ ಅವರು, ಅಧಿಕಾರ ಇದ್ದಾಗಲೇ ಕುಮಾರಸ್ವಾಮಿ ಅವರು ಮೇಕೆದಾಟು ಮಾಡಲಿಲ್ಲ ಎಂದು ಹೇಳಿದ್ದೀರಿ. ಕುಮಾರಸ್ವಾಮಿ ಏನೂ ಮಾಡಿಯೇ ಇಲ್ಲವೆಂದು ಕಟ್ಟುಕಥೆ ಕಟ್ಟಿದ್ದೀರಿ. ಎಷ್ಟಾದರೂ ನೀವು ಸುಳ್ಳು ಫ್ಯಾಕ್ಟರಿಯ ಮೇಟಿ. ಮೇಕೆದಾಟುಗಾಗಿ ನಾನು ಏನೆಲ್ಲಾ ಮಾಡಿದೆ ಎನ್ನುವುದು ನಿಮಗೇಗೆ ಗೊತ್ತಾದೀತು? ಸತ್ಯಕ್ಕೂ ನಿಮಗೂ ಎಣ್ಣೆಶೀಗೇಕಾಯಿ ಸಂಬಂಧ ಎಂದು ಆರೋಪಿಸಿದ್ದಾರೆ.
ಮೇಕೆದಾಟು ನಿರ್ಮಾಣಕ್ಕೆ 2018-19ರಲ್ಲೇ ಸಮಗ್ರ ಯೋಜನಾ ವರದಿ (DPR) ಯನ್ನು ಕೇಂದ್ರಕ್ಕೆ ಸಲ್ಲಿಸಿದ್ದು ಅಂದಿನ ನನ್ನ ಸರ್ಕಾರ. ಆ ಸರ್ಕಾರದಲ್ಲಿ ನೀವು ಸಚಿವರಿದ್ದಿರಿ. ಈ ಮಾಹಿತಿಯೇ ನಿಮಗಿಲ್ಲವೆಂದರೆ ಹೇಗೆ? ಹಾಗಾದರೆ, ಜನರು ಕೊಟ್ಟ ಪೆನ್ನು-ಪೇಪರ್ ಗತಿ ಏನು? ಎಂದು ಪ್ರಶ್ನಿಸಿದ್ದಾರೆ.
2006-2007ರಲ್ಲೇ ಮಹಾದಾಯಿ ಯೋಜನೆಗೆ ಸಂಪುಟದಲ್ಲಿಯೇ ಒಪ್ಪಿಗೆ ನೀಡಿ, 100 ಕೋಟಿ ರೂ.ಮಂಜೂರು ಮಾಡಿ ಆಗಲೇ ಶಂಕುಸ್ಥಾಪನೆಯನ್ನೂ ನೆರವೇರಿಸಲಾಯಿತು. ಆಮೇಲೆ 5 ವರ್ಷ ನಿಮ್ಮದೇ ಕಾಂಗ್ರೆಸ್ ಸರ್ಕಾರ ಇತ್ತಲ್ಲಾ? ಏನ್ ಮಾಡ್ತಾ ಇದ್ದಿರಿ ಶಿವಕುಮಾರ್ ಅವರೇ? ಆಗ ಯಾಕೆ ತಾವು ನುಡಿದಂತೆ ನಡೆಯಲಿಲ್ಲ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ಮೇಕೆದಾಟು, ಮಹದಾಯಿ ಸೇರಿ ರಾಜ್ಯದ ನೀರಾವರಿ ಯೋಜನೆಗಳಿಗಾಗಿ ನಾನು ಮುಖ್ಯಮಂತ್ರಿಯಾಗಿ ಆಯಾ ಇಲಾಖೆಯ ಕೇಂದ್ರ ಸಚಿವರನ್ನು ಎಷ್ಟು ಸಲ ಭೇಟಿಯಾಗಿದ್ದೆ ಎನ್ನುವ ಮಾಹಿತಿಯೂ ನಿಮಗಿಲ್ಲವಲ್ಲ? ನಿತಿನ್ ಗಡ್ಕರಿ ಅವರೊಬ್ಬರನ್ನೇ ನಾನು 10 ಸಲ ಭೇಟಿಯಾಗಿದ್ದೆ.
‘ಮೌನಂ ಶರಣಂ ಗಚ್ಛಾಮಿ’
90ರ ಇಳಿವಯಸ್ಸಿನಲ್ಲಿಯೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸಂಸತ್ತಿನ ಒಳ-ಹೊರಗೆ ರಾಜ್ಯಕ್ಕಾಗಿ ಅವಿರತವಾಗಿ ಹೋರಾಡುತ್ತಿದ್ದಾರೆ. ಸಂಸತ್ ಅಧಿವೇಶನದಲ್ಲಿ ಅವರು ಮೇಕೆದಾಟು ಬಗ್ಗೆ ದನಿ ಎತ್ತಿದರೆ, ರಾಜ್ಯದವರೇ ಆದ ನಿಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಮೌನವ್ರತ ಮಾಡುತ್ತಿದ್ದರು. ನಿಮ್ಮ ಪಕ್ಷದ ಉಳಿದ ಸದಸ್ಯರು ನಿಮ್ಮ ಅಧ್ಯಕ್ಷರು ಮಾಡಿದ್ದನ್ನೇ ಚಾಚೂ ತಪ್ಪದೇ ಪಾಲಿಸುತ್ತಿದ್ದರು ಎಂದು ಅವರು ಟೀಕಿಸಿದ್ದಾರೆ.
ಕಾಂಗ್ರೆಸ್, ಡಿಎಂಕೆ ಅಣ್ತಮ್ಮ ಪಕ್ಷಗಳಲ್ಲವೇ? ಮೇಕೆದಾಟು ಮಾಡಲು ಕರ್ನಾಟಕದವರಿಗೆ ಬಿಡೋದೇ ಇಲ್ಲ ಎಂದು ಡಿಎಂಕೆ ಚುನಾವಣೆ ಪ್ರಣಾಳಿಕೆಯಲ್ಲೇ ಘೋಷಣೆ ಮಾಡಿದೆ. ಇದಕ್ಕೂ ನಿಮ್ಮದು, ನಿಮ್ಮ ಪಕ್ಷದ್ದು ‘ಮೌನಂ ಶರಣಂ ಗಚ್ಛಾಮಿ’ ಎಂದು ಹೇಳಿದ್ದಾರೆ.
ನಿಮ್ಮ ಸರ್ಕಾರದಲ್ಲಿ ಏನೇನು ನಡೀತಿದೆ ಶಿವಕುಮಾರ್ ಅವರೇ? ಪೆನ್ನು ಪೇಪರ್ ಕೂಡ ‘ಮೌನಂ ಶರಣಂ ಗಚ್ಛಾಮಿ’ ಎನ್ನುತ್ತಿವೆಯಾ. ಹೇಗೆ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.