ಮುಂಡಗೋಡು:ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣ ಅವರನ್ನು ರಕ್ಷಣೆ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಆರೋಪಿಸಿದ್ದಾರೆ.
ಬಾಗಲಕೋಟೆ ಹೆಲಿಪ್ಯಾಡ್ನಲ್ಲಿ ಮಾತನಾಡಿದ ಅವರು, ಅಂತರರಾಷ್ಟ್ರೀಯ ಪ್ರಯಾಣ ಮಾಡುವಾಗ ಪಾಸ್ಪೋರ್ಟ್, ವೀಸಾ ಚೆಕ್ ಆಗುತ್ತದೆ, ಕೇಂದ್ರ ಸರ್ಕಾರಕ್ಕೆ ತಿಳಿಯದಂತೆ ಯಾರೂ ದೇಶದ ಹೊರಗೆ ಹೋಗಲು ಸಾಧ್ಯವಿಲ್ಲ ಎಂದರು.
ದೇಶಕ್ಕೆ ಬರಲೇಬೇಕು
ಪ್ರಜ್ವಲ್ ರೇವಣ್ಣ ಯಾವ ದೇಶದಲ್ಲಿದ್ದರೂ ಕರೆತರುತ್ತೇವೆ, ಅವರು ದೇಶಕ್ಕೆ ಬರಲೇಬೇಕು, ಅವರ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದು ಮಾಡಲು ಪ್ರಧಾನಿಗಳಿಗೆ ಪತ್ರ ಬರೆದಿದ್ದೇನೆ.
ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಬಲಾತ್ಕಾರ ಮತ್ತು ಲೈಂಗಿಕ ಶೋಷಣೆ ಮಾಡಿರುವ ಆರೋಪವಿದೆ, ಅವರ ಬಗ್ಗೆ ತಿಳಿದೂ ಬಿಜೆಪಿ, ಜೆಡಿಎಸ್ನೊಂದಿಗೆ ಚುನಾವಣಾ ಮೈತ್ರಿ ಮಾಡಿಕೊಂಡಿದೆ.
ಪ್ರಜ್ವಲ್ ರೇವಣ್ಣ ಅವರ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ರಕ್ಷಣೆ ನೀಡಲು ಸೂಚಿಸಲಾಗಿದೆ, ಕುಮಾರಸ್ವಾಮಿ ಹಾಗೂ ದೇವೇಗೌಡರು ತಮ್ಮ ಮನೆಗೆ ವಕೀಲರನ್ನು ಕರೆಸಿ ಚರ್ಚೆ ಮಾಡಿದ್ದಾರೆ.
ಚುನಾವಣಾ ಪ್ರಚಾರ ಸಂದರ್ಭದಲ್ಲಿ ಕುಮಾರಸ್ವಾಮಿ, ನಾನು ಬೇರೆಯಲ್ಲ, ಪ್ರಜ್ವಲ್ ರೇವಣ್ಣ ಬೇರೆಯಲ್ಲ ಎಂದಿದ್ದರು.
ಅಮಿತ್ ಷಾ ರಾಜಕೀಯ ಹೇಳಿಕೆ
ಹುಬ್ಬಳ್ಳಿಯಲ್ಲಿ ನೇಹಾ ಕೊಲೆ ಲವ್ ಜಿಹಾದ್ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ರಾಜಕೀಯ ಹೇಳಿಕೆ ನೀಡಿದ್ದಾರೆ, ಆರೋಪಿಯನ್ನು ತಕ್ಷಣ ಬಂಧಿಸಲಾಗಿದೆ, ಪ್ರಕರಣ ಸಿಐಡಿಗೆ ವಹಿಸಿ, ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಲಾಗಿದೆ, ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಗುರಿಪಡಿಸಲು ಪ್ರಯತ್ನಿಸಲಾಗಿದೆ.
ಬಿಜೆಪಿಗೆ ಸಂವಿಧಾನ, ಪ್ರಜಾಪ್ರಭುತ್ವ, ಮೀಸಲಾತಿ, ಐಕ್ಯತೆ, ಸಮಾನತೆಯಲ್ಲಿ ನಂಬಿಕೆ ಇಲ್ಲ, ಅಮಾಯಕರ ಕಿರುಕುಳ ಕೊಟ್ಟು ಸಮಾಜ ಒಡೆಯುವುದು ಅವರಿಗೆ ರೂಢಿಯಾಗಿದೆ ಎಂದರು.