ಬೆಂಗಳೂರು:ಮಾಜಿ ಮುಖ್ಯಮಂತ್ರಿಗಳೂ ಸೇರಿದಂತೆ ಘಟಾನುಘಟಿಗಳು ಕಣದಲ್ಲಿರುವ ಉತ್ತರ ಕರ್ನಾಟಕ ಭಾಗದ 14 ಲೋಕಸಭಾ ಕ್ಷೇತ್ರಗಳ ಬಹಿರಂಗ ಪ್ರಚಾರಕ್ಕೆ ಭಾನುವಾರ ಸಂಜೆ ತೆರೆ ಬೀಳಲಿದೆ.
ದಾವಣಗೆರೆ, ಶಿವಮೊಗ್ಗ, ಹಾವೇರಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕೋಡಿ, ವಿಜಾಪುರ, ಬಾಗಲಕೋಟೆ, ಬೀದರ್, ಗುಲ್ಬರ್ಗ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ಧಾರವಾಡ ಲೋಕಸಭಾ ಕ್ಷೇತ್ರಗಳಿಗೆ ಮೇ 7ರಂದು ಮತದಾನ ನಡೆಯಲಿದೆ.
ಹಳೆ ಮೈಸೂರು ಭಾಗದ 14 ಲೋಕಸಭಾ ಕ್ಷೇತ್ರಗಳಿಗೆ ಕಳೆದ ಏಪ್ರಿಲ್ 26ರಂದು ಮೊದಲ ಹಂತದಲ್ಲಿ ಮತದಾನ ನಡೆದಿದ್ದು, ಉತ್ತರ ಕರ್ನಾಟಕ ಭಾಗದ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮತದಾನ ಜರುಗಲಿದೆ.
ಬಹಿರಂಗ ಪ್ರಚಾರಕ್ಕೆ ನಾಳೆ ತೆರೆ
ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಸಮಯ ಸಮೀಪಿಸುತ್ತಿದ್ದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ನಡೆಸಿದ್ದಾರೆ.
ದಾವಣಗೆರೆ, ಶಿವಮೊಗ್ಗ ಹೊರತುಪಡಿಸಿ ಉಳಿದ 12 ಕ್ಷೇತ್ರಗಳಲ್ಲೂ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಇದ್ದು, ಉಳಿದ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಬಂಡಾಯ ಎದ್ದಿರುವ ಅಭ್ಯರ್ಥಿಗಳು ಪ್ರಬಲ ಪೈಪೋಟಿ ಕೊಡುತ್ತಿದ್ದಾರೆ.
ಕಣದಲ್ಲಿ ಘಟಾನುಘಟಿಗಳು
ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಷಿ (ಧಾರವಾಡ), ಭಗವಂತ ಖೂಬಾ (ಬೀದರ್) ಮರು ಆಯ್ಕೆ ಬಯಸಿ ಕಣದಲ್ಲಿದ್ದಾರೆ.
ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್ (ಬೆಳಗಾವಿ), ಬಸವರಾಜ ಬೊಮ್ಮಾಯಿ (ಹಾವೇರಿ), ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿರುವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಪತ್ನಿ ಪ್ರಭಾ ಮಲ್ಲಿಕಾರ್ಜುನ್ (ದಾವಣಗೆರೆ), ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕ ಜಾರಕಿಹೊಳಿ (ಚಿಕ್ಕೋಡಿ), ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತ ಪಾಟೀಲ್ (ಬಾಗಲಕೋಟೆ), ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ (ಬೀದರ್), ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ (ಬೆಳಗಾವಿ) ಚುನಾವಣಾ ಕಣದಲ್ಲಿದ್ದಾರೆ.
ಅಲ್ಲದೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಳಿಯ ರಾಧಾಕೃಷ್ಣ (ಗುಲ್ಬರ್ಗ), ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ, ಇದೇ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಪುತ್ರಿ ಗೀತಾ ಶಿವರಾಜ್ ಕುಮಾರ್.
ಕಾಂಗ್ರೆಸ್ ಶಾಸಕ ತುಕಾರಾಂ (ಬಳ್ಳಾರಿ), ಇದೇ ಕ್ಷೇತ್ರದಲ್ಲಿ ಬಿಜೆಪಿಯಿಂದ ಮಾಜಿ ಉಪಮುಖ್ಯಮಂತ್ರಿ ಬಿ.ಶ್ರೀರಾಮುಲು, ಮಾಜಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ (ಉತ್ತರ ಕನ್ನಡ) ಕಣದಲ್ಲಿದ್ದಾರೆ.
ನಾಯಕರ ಬಿರುಸಿನ ಪ್ರಚಾರ
ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಮೂರು ದಿನಗಳ ಕಾಲ ಚುನಾವಣಾ ಪ್ರಚಾರ ಕೈಗೊಂಡರೆ, ಕೇಂದ್ರ ಗೃಹ ಸಚಿವ ಅಮಿತ್ ಷಾ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡ ಎರಡು ದಿನಗಳ ಕಾಲ ಬಹಿರಂಗ ಸಭೆ ಮತ್ತು ರೋಡ್ ಶೋಗಳನ್ನು ನಡೆಸಿದ್ದಾರೆ.
ಇವರ ಜೊತೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಸ್.ಯಡಿಯೂರಪ್ಪ ಹಾಗೂ ಎಚ್.ಡಿ.ಕುಮಾರಸ್ವಾಮಿ ಪ್ರಚಾರ ಕೈಗೊಂಡಿದ್ದರೆ, ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹಿರಿಯ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಎರಡು-ಮೂರು ಬಾರಿ ಬಿರುಸಿನ ಪ್ರಚಾರ ಕೈಗೊಂಡಿದ್ದರು.
ಮೊದಲ ಹಂತದ ಚುಮಾವಣೆ ಮುಗಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಕ್ಷದ ಅಭ್ಯರ್ಥಿಗಳನ್ನು ದೊಡ್ಡ ಪ್ರಮಾಣದಲ್ಲಿ ಗೆಲ್ಲಿಸಿಕೊಂಡು ತಮ್ಮ ಶಕ್ತಿ ಹೆಚ್ಚಿಸಿಕೊಳ್ಳಲು ಬಿಡುವಿಲ್ಲದಂತೆ ಈ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದ್ದಾರೆ.
ಮೇ 7ರಂದು ನಡೆಯುವ ಮತದಾನಕ್ಕೆ ಕೇಂದ್ರ ಚುನಾವಣಾ ಆಯೋಗ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದೆ.