ಹಾಸನ: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣನನ್ನು ದೇಶಕ್ಕೆ ಆಗಮಿಸುತ್ತಿದ್ದಂತೆ ವಿಮಾನ ನಿಲ್ದಾಣದಲ್ಲೇ ಬಂಧಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಜನಪರ ಚಳವಳಿಗಳ ಒಕ್ಕೂಟ ಇಂದಿಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿತು.
ಹಾಸನ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ರಾಜ್ಯದ ಹಲವೆಡೆಯಿಂದ 113ಕ್ಕೂ ಹೆಚ್ಚು ಸಂಘಟನೆಗಳ ಸುಮಾರು 10 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು, ಹೇಮಾವತಿ ಪ್ರತಿಮೆಯಿಂದ ಮೆರವಣಿಗೆಯಲ್ಲಿ ಸಾಗಿ, ಜಿಲ್ಲಾಧಿಕಾರಿ ಕಚೇರಿ ಬಳಿ ಹೊಸ ಬಸ್ ನಿಲ್ದಾಣ ರಸ್ತೆಯಲ್ಲಿ ಬಹಿರಂಗ ಸಭೆ ನಡೆಸಿದರು.
ವಿವಿಧ ಸಂಘಟನೆಗಳು ಭಾಗಿ
ಪ್ರತಿಭಟನಾ ಮೆರವಣಿಗೆಯಲ್ಲಿ ಲೇಖಕಿಯರಾದ ಬಾನು ಮುಷ್ತಾಕ್, ರೂಪ ಹಾಸನ, ಜನವಾದಿ ಮಹಿಳಾ ಸಂಘಟನೆ ಅಧ್ಯಕ್ಷೆ ಮೀನಾಕ್ಷಿ ಬಾಳಿ, ಸಿಪಿಎಂ ನಾಯಕಿ ಸುಭಾಷಿಣಿ ಅಲಿ ಸೇರಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
ಮಹಿಳೆಯರು, ರೈತರು, ವಿದ್ಯಾರ್ಥಿಗಳು, ಸಾಹಿತಿಗಳು, ಕಲಾವಿದರು, ಲಿಂಗ ಅಲ್ಪಸಂಖ್ಯಾತರು ಹಾಗೂ ನಿವೃತ್ತ ಸರ್ಕಾರಿ ಅಧಿಕಾರಿಗಳ ಹಲವು ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಬೆಂಗಳೂರು, ಮೈಸೂರು, ಮಂಡ್ಯ, ಹಾಸನ, ಮಂಗಳೂರು ಹಾಗೂ ಚಿಕ್ಕಮಗಳೂರಿನಿಂದಲೂ ಹಾಸನ ಚಲೋ ಪ್ರತಿಭಟನಾ ರ‍್ಯಾಲಿಯಲ್ಲಿ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
ಪ್ರಜ್ವಲ್ ಬಂಧನ ಹಾಗೂ ಪೆನ್‌ಡ್ರೈವ್ ಹಂಚಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಹಾಸನ ಚಲೋ ನಡೆಸಲಾಯಿತು ಎಂದು ಸಂಘಟನೆಗಳ ಪ್ರಮುಖರು ತಿಳಿಸಿದರು.