ಬೆಂಗಳೂರು:ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.
ಲೋಕಸಭೆಗೆ ಆಯ್ಕೆಗೊಂಡ ನಂತರ ಕುಮಾರಸ್ವಾಮಿ ತಾವು ಪ್ರತಿನಿಧಿಸುತ್ತಿದ್ದ ಈ ಕ್ಷೇತ್ರವನ್ನು ತೆರವುಗೊಳಿಸಿದ್ದರು.
ಜೆಡಿಎಸ್ ಚಿನ್ಹೆಯಡಿ ಕಣಕ್ಕೆ
ತೆರವುಗೊಂಡ ಈ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು ಯೋಗೇಶ್ವರ್ ಅವರನ್ನು ಎನ್‌ಡಿಎ ಮೈತ್ರಿಕೂಟ ಹಾಗೂ ಜೆಡಿಎಸ್ ಚಿನ್ಹೆಯಡಿ ಕಣಕ್ಕಳಿಸಲು ಕುಮಾರಸ್ವಾಮಿ ಮುಂದಾಗಿದ್ದಾರೆ.
ಈ ಮೊದಲು ಕುಮಾರಸ್ವಾಮಿ ಪುತ್ರ ನಿಖಿಲ್ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರೆಂಬ ಮಾತುಗಳು ಕೇಳಿಬಂದಿತ್ತು.
ಆದರೆ ಅವರು ರಾಮನಗರ ಬಿಟ್ಟು ಚನ್ನಪಟ್ಟಣಕ್ಕೆ ಬರುವುದಿಲ್ಲ ಎಂದ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಟಿಕೆಟ್ ನೀಡುವುದೋ ಅಥವಾ ಬಿಜೆಪಿಗೆ ಕ್ಷೇತ್ರ ಬಿಟ್ಟುಕೊಡಬೇಕೋ ಎಂಬ ಬಗ್ಗೆ ಕುಮಾರಸ್ವಾಮಿ ಗೊಂದಲದಲ್ಲಿದ್ದರು.
ಇದರ ಮಧ್ಯೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರು.
ಕುಮಾರಸ್ವಾಮಿ ನಿರ್ಧಾರ
ಇದರ ಬೆನ್ನಲ್ಲೇ ನಿನ್ನೆ ಕುಮಾರಸ್ವಾಮಿ, ಚನ್ನಪಟ್ಟಣ ಕ್ಷೇತ್ರ ಪ್ರದಕ್ಷಿಣೆ ಹಾಕಿದ ನಂತರ ಯೋಗೇಶ್ವರ್ ಅವರನ್ನೇ ಜೆಡಿಎಸ್ ಚಿನ್ಹೆಯಡಿ ಕಣಕ್ಕಿಳಿಸುವ ನಿರ್ಧಾರ ಕೈಗೊಂಡಿದ್ದಾರೆ.
ರಾಜ್ಯಲ್ಲಿ ನಡೆಯುತ್ತಿರುವ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರೆಯಲಿದ್ದು ಎರಡು ಕ್ಷೇತ್ರಗಳನ್ನು ಬಿಜೆಪಿ ಇಟ್ಟುಕೊಂಡು ಒಂದನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ.
ಯೋಗೇಶ್ವರ್ ಅವರಿಗೆ ಪಕ್ಷದ ವತಿಯಿಂದ ಕ್ಷೇತ್ರ ದೊರೆಯದ ಕಾರಣ ಜೆಡಿಎಸ್ ಚಿನ್ಹೆಯಡಿ ಅವರನ್ನು ಕಣಕ್ಕಿಳಿಸಲು ಬಿಜೆಪಿ ವರಿಷ್ಠರು ಸಮ್ಮತಿಸಿದ್ದಾರೆ ಎನ್ನಲಾಗಿದೆ.