ಕೆಪಿಸಿಸಿ ಅಧ್ಯಕ್ಷರ, ಸಚಿವರ ಖಾತೆ ಮರು ಹಂಚಿಕೆ ಬಗ್ಗೆ ಚರ್ಚೆ
ಬೆಂಗಳೂರು : ಕರ್ನಾಟಕದ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ, ಸಚಿವರ ಖಾತೆಗಳ ಮರು ಹಂಚಿಕೆ ಸೇರಿದಂತೆ ಕೆಲವು ರಾಜಕೀಯ ವಿಚಾರಗಳ ಕುರಿತು ವರಿಷ್ಠರ ಜೊತೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮೂರು ದಿನಗಳ ದೆಹಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ.
ಕೇಂದ್ರದ ಮುಂದೆ ಬಾಕಿ ಉಳಿದಿರುವ ರಾಜ್ಯದ ಯೋಜನೆಗಳಿಗೆ ಚಾಲನೆ, ಕೇಂದ್ರ ಸಂಪುಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುತ್ತಿರುವ ನೂತನ ಸಚಿವರುಗಳಿಗೆ ಅಭಿನಂದನೆ ಮತ್ತು ರಾಜ್ಯದ ಸಂಸದರೊಂದಿಗೆ ಚರ್ಚೆ ನಡೆಸಲು ಈ ಪ್ರವಾಸ ಕೈಗೊಂಡಿದ್ದಾರೆ.
ದೆಹಲಿಯ ಲೀಲಾ ಪ್ಯಾಲೇಸ್ ಹೋಟೆಲ್‌ನಲ್ಲಿ ನಾಳೆ ಸಂಜೆ ಸಭೆ ನಡೆಯಲಿದ್ದು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭೆಯ ಎಲ್ಲ ಸದಸ್ಯರ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ಅಲ್ಲದೆ, ತಮ್ಮ ಪ್ರವಾಸ ಕಾಲದಲ್ಲಿ ಕೇಂದ್ರ ಸಚಿವರುಗಳನ್ನು ಭೇಟಿ ಮಾಡಲು ಮುಖ್ಯಮಂತ್ರಿಗಳು ಸಮಯ ನಿಗದಿ ಮಾಡಿಕೊಂಡಿದ್ದಾರೆ.
ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕರಾಗಿ ಅಧಿಕಾರ ವಹಿಸಿಕೊಂಡಿರುವ ರಾಹುಲ್ ಗಾಂಧಿ ಅವರನ್ನು ಅಭಿನಂದಿಸುವ ಕಾರ್ಯಕ್ರಮವನ್ನೂ ಹಮ್ಮಿಕೊಂಡಿದ್ದಾರೆ. ಇದೇ ಸಮಯ ಬಳಕೆ ಮಾಡಿಕೊಂಡು ತಮ್ಮ ಮಂತ್ರಿಮಂಡಲದಲ್ಲಿ ಕೆಲವು ಸಚಿವರ ಖಾತೆ ಬದಲಾವಣೆ ಹಾಗೂ ಜಿಲ್ಲಾ ಉಸ್ತುವಾರಿಗಳ ಬದಲಾವಣೆಗೆ ಸಂಬಂಧಿಸಿದಂತೆಯೂ ವರಿಷ್ಠರೊಂದಿಗೆ ಚರ್ಚೆ ನಡೆಸಿ, ಹಸಿರು ನಿಶಾನೆ ಪಡೆಯಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ಹೊಸಬರ ನೇಮಕಾತಿ ಸಂಬಂಧ ಆಂತರಿಕವಾಗಿ ಒತ್ತಡ ಹೆಚ್ಚಿದ್ದು, ಈ ಬಗ್ಗೆ ತೀರ್ಮಾನ ಕೈಗೊಳ್ಳುವಂತೆ ವರಿಷ್ಠರನ್ನು ಮನವಿ ಮಾಡಲಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರ ವಹಿಸಿಕೊಳ್ಳುವ ವೇಳೆ ಕೆಲವು ನಿಬಂಧನೆಗಳನ್ನು ವಿಧಿಸಲಾಗಿತ್ತು.
ಇದರಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಲೋಕಸಭಾ ಚುನಾವಣೆ ಪೂರ್ಣಗೊಳ್ಳುವವರೆಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲೇ ಮುಂದುವರೆಸುವ ತೀರ್ಮಾನ ಕೈಗೊಳ್ಳಲಾಗಿತ್ತು.
ಅದರಂತೆ ಚುನಾವಣೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಶಿವಕುಮಾರ್ ಸ್ಥಾನಕ್ಕೆ ಬೇರೆಯವರನ್ನು ನೇಮಕ ಮಾಡಬೇಕು. ಇಂತಹ ಸಂದರ್ಭದಲ್ಲಿ ಆ ಸ್ಥಾನವನ್ನು ಪರಿಶಿಷ್ಟ ಸಮಾಜ ಇಲ್ಲವೇ ವರ್ಗದ ನಾಯಕರಿಗೆ ನೀಡಬೇಕು ಎಂಬುದು ಬೇಡಿಕೆಯಾಗಿದೆ.
ಇದೇ ಸಂದರ್ಭದಲ್ಲಿ ಕೆಲವು ಸಚಿವರು ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ, ಅದನ್ನು ಈಡೇರಿಸುವ ಅವಶ್ಯಕತೆ ಇದೆ. ಇಲ್ಲದಿದ್ದಲ್ಲಿ ಸರ್ಕಾರ ಮತ್ತು ಪಕ್ಷದಲ್ಲಿ ಗೊಂದಲ ಉಂಟಾಗಬಹುದು ಎಂಬ ಮಾಹಿತಿಯನ್ನು ವರಿಷ್ಠರ ಗಮನಕ್ಕೆ ತರಲಿದ್ದಾರೆ.
ಮುಖ್ಯಮಂತ್ರಿ ಅವರು ವರಿಷ್ಠರನ್ನು ಭೇಟಿ ಮಾಡುವುದನ್ನು ಅರಿತ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಕೆಲವು ಸಚಿವರು, ಶಾಸಕರು ವರಿಷ್ಠರನ್ನು ಭೇಟಿ ಮಾಡಿ ಉಪಮುಖ್ಯಮಂತ್ರಿ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ.
ಅಲ್ಲದೆ, ಸಹಕಾರಿ ಸಚಿವ ಕೆ.ಎನ್.ರಾಜಣ್ಣ ತಮ್ಮನ್ನು ಮಂತ್ರಿಗಿರಿಯಿಂದ ವಿಮುಕ್ತಿಗೊಳಿಸಿ ಪಕ್ಷದ ರಾಜ್ಯಾಧ್ಯಕ್ಷ ಹುದ್ದೆ ನೀಡಿ ಎಂದು ವರಿಷ್ಠರ ಮುಂದೆ ಬೇಡಿಕೆ ಇಟ್ಟಿದ್ದಾರೆ.
ಅವರು ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಪರಿಶಿಷ್ಟ ಸಮಯದಾಯಕ್ಕೆ ಕರ್ನಾಟಕ ಕಾಂಗ್ರೆಸ್‌ನ ಹೊಣೆ ವಹಿಸಿ ಎಂದು ಮನವಿ ಮಾಡಿದ್ದಾರೆ.